ಮಡಿಕೇರಿ ನ.24 : ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸಿ ಸಂಯುಕ್ತ ಹೋರಾಟ-ಕರ್ನಾಟಕ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ನ.26 ರಿಂದ 28ರವರೆಗೆ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯುವ 72 ಗಂಟೆಗಳ ಮಹಾಧರಣಿಗೆ ಎಐಟಿಯುಸಿ ಕೊಡಗು ಜಿಲ್ಲಾ ಸಮಿತಿಯ ಬೆಂಬಲವಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಎಐಟಿಯುಸಿ ಸಂಘಟನೆಯ ಕೊಡಗು ಜಿಲ್ಲಾ ಸಮಿತಿಯ ನೂರಕ್ಕೂ ಅಧಿಕ ಸದಸ್ಯರು ಬೆಂಗಳೂರಿನಲ್ಲಿ ನ.27 ರಂದು ನಡೆಯುವ ಧರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳ ಸಾವಿರಾರು ಕಾರ್ಯಕರ್ತರು ಮಹಾಧರಣಿಯಲ್ಲಿ ಪಾಲ್ಗೊಂಡು ಸುಮಾರು 26 ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲಿದ್ದಾರೆ ಎಂದು ಹೇಳಿದ್ದಾರೆ.
ರೈತರ ಉತ್ಪನ್ನಗಳಿಗೆ ಎಂ.ಎಸ್.ಸ್ವಾಮಿನಾಥನ್ ಶಿಫಾರಸ್ಸಿನಂತೆ ಕನಿಷ್ಠ ಬೆಂಬಲ ಹಾಗೂ ಖರೀದಿ ಖಾತ್ರಿ ಒದಗಿಸುವ ಶಾಸನ ಜಾರಿ ಮಾಡಬೇಕು, ರೈತರಿಗೆ ನೀಡುವ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ವಿದ್ಯುತ್‌ಚ್ಛಕ್ತಿ ಮೇಲಿನ ಸಬ್ಸಿಡಿ ಮೊತ್ತ ಹೆಚ್ಚಳ ಮಾಡಬೇಕು, ರೈತರ ಆತ್ಮಹತ್ಯೆ ತಡೆಯಲು ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳಬೇಕು, ಕನಿಷ್ಟ ವೇತನ ಮಾಸಿಕ 26,000 ರೂ. ನಿಗದಿ ಮಾಡಬೇಕು, ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿ, ಖಾಯಂ ಸ್ವರೂಪದ ಕೆಲಸದಲ್ಲಿ ತೊಡಗುವ ಕಾರ್ಮಿಕರ ಖಾಯಂಗೆ ಶಾಸನ ರೂಪಿಸಬೇಕು, ನಾಲ್ಕು ಕಾರ್ಮಿಕ ಸಂಹಿತೆಗಳನ್ನು, ಎಫ್‌ಟಿಇ ಪದ್ಧತಿಯನ್ನು ಹಾಗೂ ಕೆಲಸದ ಅವಧಿಯ ಹೆಚ್ಚಳವನ್ನು ರದ್ದುಪಡಿಸಬೇಕು, ಕಾರ್ಪೊರೇಟ್ ಪರವಾದ ಪಿಎಂ ಫಸಲ್ ಭೀಮಾ ಯೋಜನೆಯನ್ನು ರದ್ದುಪಡಿಸಿ, ಎಲ್ಲಾ ಬೆಳೆಗಳಿಗೂ ವಿಮೆ ಒದಗಿಸುವ ಸಮಗ್ರ ಸಾರ್ವಜನಿಕ ವಿಮಾ ಯೋಜನೆ ಜಾರಿ ಹಾಗೂ ಸಮಗ್ರ ಸಾಲ ಮನ್ನಾ ಯೋಜನೆ ಜಾರಿಗೆ ತರಬೇಕು, ದೆಹಲಿ ರೈತ ಹೋರಾಟದ ಸಂದರ್ಭದಲ್ಲಿ ನೀಡಿದ್ದ ಲಿಖಿತ ಭರವಸೆಗಳನ್ನು ಜಾರಿ ಮಾಡಬೇಕು, ಹುತಾತ್ಮ ರೈತರ ಸ್ಮಾರಕ ನಿರ್ಮಿಸಲು ಜಾಗ, ಅವರ ಕುಟುಂಬಕ್ಕೆ ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸಬೇಕು, ಹೋರಾಟ ಸಂದರ್ಭದಲ್ಲಿ ರೈತರ ಮೇಲೆ ಹಾಕಿರುವ ಎಲ್ಲಾ ಪೋಲಿಸ್ ಕೇಸ್‌ಗಳನ್ನು ವಾಪಾಸ್ಸು ಪಡೆಯಬೇಕು ಸೇರಿದಂತೆ ಹಲವು ಬೇಡಿಕೆಗಳ ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದು ಎಂದು ಸೋಮಪ್ಪ ತಿಳಿಸಿದ್ದಾರೆ.











