ಮಡಿಕೇರಿ ನ.24 : ಹಿಂದೂ ಮಲಯಾಳಿ ಸಂಘದ ವತಿಯಿಂದ ನ.26 ರಂದು ಮಡಿಕೇರಿಯಲ್ಲಿ ಮಲಯಾಳಿ ಬಾಂಧವರ “ಓಣಾಘೋಷಂ-ಓಣಂಸಧ್ಯ” ಹಬ್ಬ ಆಚರಿಸಲಾಗುವುದೆಂದು ಓಣಂ ಆಚರಣಾ ಸಮಿತಿ ಅಧ್ಯಕ್ಷ ಟಿ.ಆರ್.ವಾಸುದೇವ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಕಾವೇರಿ ಹಾಲ್ನಲ್ಲಿ ಬೆಳಿಗ್ಗೆ 9.30ಕ್ಕೆ ನಡೆಯಲಿರುವ ಕಾರ್ಯಕ್ರಮವನ್ನು ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ.ಎಸ್.ರಮೇಶ್ ವಹಿಸಲಿದ್ದಾರೆ ಎಂದರು.
ಮುಖ್ಯ ಅತಿಥಿಗಳಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಸೇರಿದಂತೆ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಸಭಾ ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ 9.30 ಗಂಟೆಗೆ ನಗರದ ಗಾಂಧಿ ಮೈದಾನದಿಂದ ಹೊರಟು ನಗರದ ಮುಖ್ಯ ರಸ್ತೆಯ ಮೂಲಕ ಸಾಗಿ ಕಾವೇರಿ ಹಾಲ್ ತನಕ ಓಣಾಘೋಷಂ ಮೆರವಣಿಗೆ ನಡೆಯಲಿದೆ ಎಂದರು.
ಮಧ್ಯಾಹ್ನ 1 ಗಂಟೆಗೆ ಓಣಂ ಸಧ್ಯ ನಡೆಯಲಿದ್ದು, 2 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದ್ದು, ಹಿಂದೂ ಮಲಯಾಳಿ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ.ಎಸ್.ರಮೇಶ್ ಮಾತನಾಡಿ, ಸಾಂಪ್ರಾದಾಯಿಕ ಉಡುಗೆಯಲ್ಲಿ ಭಾಗವಹಿಸುವ ಅದೃಷ್ಟಶಾಲಿಗಳಿಗೆ ಆಕರ್ಷಕ ಬಹುಮಾನ ನೀಡಲಾಗುವುದು. ಅಲ್ಲದೇ ಪೊಕಳಂ ಸ್ಪರ್ಧೆ ಏರ್ಪಡಿಸಲಾಗಿದ್ದು, ಭಾಗವಹಿಸಿದ ಪ್ರತಿ ತಂಡಕ್ಕೂ ಪಾರಿತೋಷಕ ನೀಡಲಾಗುವುದೆಂದು ತಿಳಿಸಿದರು.
10ನೇ ತರಗತಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಪ್ರತಿಭಾನ್ವಿತ ಮಕ್ಕಳಿಗೆ ಸನ್ಮಾನ ಹಾಗೂ ಸಾಧಕರಿಗೆ ಸನ್ಮಾನ ಮಾಡಲಾಗುವುದೆಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಹಿಂದೂ ಮಲಯಾಳಿ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ವಿ.ಧರ್ಮೇಂದ್ರ, ಉಪಾಧ್ಯಕ್ಷ ಪಿ.ವಿಜಯಕುಮಾರ್, ಖಜಾಂಚಿ ಪಿ.ಟಿ.ಉತ್ತಮನ್ ಉಪಸ್ಥಿತರಿದ್ದರು.