ಮಡಿಕೇರಿ ಡಿ.1 : ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಡಿಂಪಲ್ ಎಂಬ ವ್ಯಕ್ತಿಯ ಸಂಶಯಾಸ್ಪದ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕೆಂದು ಕೊಡಗು ಹಾಗೂ ಹಾಸನ ಜಿಲ್ಲಾ ದಲಿತ ಮುಖಂಡರು ಆಗ್ರಹಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಲಿತ ಮುಖಂಡ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ಟಿ.ಈ.ಸುರೇಶ್, ಇದೇ ಸೆ.9 ರಂದು ಹಾನಗಲ್‍ನಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಡಿಂಪಲ್ ಎಂಬುವವರು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಕೊಡಗು ಜಿಲ್ಲಾ ಪೊಲೀಸರ ತನಿಖೆ ತೃಪ್ತಿದಾಯಕವಾಗಿಲ್ಲ. ಈ ಹಿನ್ನೆಲೆಯಲ್ಲಿ ಸಿಐಡಿ ತನಿಖೆಗೆ ಒಪ್ಪಿಸುವಂತೆ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಿರುವುದಾಗಿ ಹೇಳಿದರು.
ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೆತ್ತೂರು ಹೋಬಳಿಯ ಬಾಚಳ್ಳಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಡಿಂಪಲ್ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ ಗ್ರಾಮದ ಮಹಿಳೆಯೊಬ್ಬರೊಂದಿಗೆ 4 ವರ್ಷಗಳಿಂದ ಜೀವನ ಸಾಗಿಸುತ್ತಿದ್ದರು. ಸೆ.9 ರಂದು ಡಿಂಪಲ್ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ದೂರಿನ ಹಿನ್ನೆಲೆ ಮಹಿಳೆಯನ್ನು ಮಾತ್ರ ಬಂಧಿಸಲಾಗಿದೆ. ಆದರೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದ ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿಲ್ಲವೆಂದು ಸುರೇಶ್ ಆರೋಪಿಸಿದರು.
ಸಿಐಡಿ ತನಿಖೆಯಿಂದ ಮಾತ್ರ ಡಿಂಪಲ್ ಕುಟುಂಬಕ್ಕೆ ನ್ಯಾಯ ಸಿಗಲು ಸಾಧ್ಯ ಎಂದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸಂಚಾಲಕ ಡಿ.ಜೆ.ಈರಪ್ಪ, ತಾಲ್ಲೂಕು ಸಂಚಾಲಕ ಎಂ.ಎಸ್.ಕುಮಾರ್, ಡಿಂಪಲ್‍ನ ಸಂಬಂಧಿಗಳಾದ ಬಿ.ವಿ.ಹರೀಶ್, ನಯನ್ ಟಿ.ಎಸ್ ಹಾಗೂ ಬಿ.ಪಿ.ದರ್ಶನ್ ಉಪಸ್ಥಿತರಿದ್ದರು.








