ಮಡಿಕೇರಿ ಡಿ.3 : ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರ ಮತ್ತು ಸಂಘ, ಸಂಸ್ಥೆಗಳು ನೀಡುವ ನೆರವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕೆಂದು ಹಿರಿಯ ಪತ್ರಕರ್ತ ಹಾಗೂ ಕೊಡಗು ಚಾನಲ್ ಸಂಪಾದಕ ಜಿ.ವಿ.ರವಿಕುಮಾರ್ ಕರೆ ನೀಡಿದ್ದಾರೆ.
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ಮಡಿಕೇರಿಯ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಉತ್ತಮ ಫಲಿತಾಂಶ ಬರಲು ಕಾರಣಕರ್ತರಾದ ಅಧ್ಯಾಪಕರಿಗೆ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮಕ್ಕಳು ಉತ್ತಮ ಶಿಕ್ಷಣ ಪಡೆದು ಜೀವನದಲ್ಲಿ ಯಶಸ್ಸು ಸಾಧಿಸುವ ಮೂಲಕ ದೇಶದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಪೋಷಕರಂತೆ ಶಿಕ್ಷಕರು ಕೂಡ ಹೆಚ್ಚು ಶ್ರಮ ವಹಿಸುತ್ತಾರೆ. ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದರೊಂದಿಗೆ ಶಿಕ್ಷಕರನ್ನು ಸನ್ಮಾನಿಸುವುದು ಕೂಡ ಅತಿಮುಖ್ಯ ಎಂದರು.
ಶಿಕ್ಷಣಕ್ಕೆ ಆದ್ಯತೆ ನೀಡುವ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ದಲಿತ ಸಂಘರ್ಷ ಸಮಿತಿ ಇತರ ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ರವಿಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಡಗದಾಳು ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಗಂಗಮ್ಮ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಬಾರದು, ಶೈಕ್ಷಣಿಕ ಗುರಿ ಸಾಧನೆಗೆ ವಿದ್ಯಾರ್ಥಿಗಳಿಗೆ ಶಿಕ್ಷಕರ ಮಾರ್ಗದರ್ಶನದ ಅಗತ್ಯವಿದೆ. ಶಿಕ್ಷಕರ ಮಾರ್ಗದರ್ಶನವನ್ನು ಸಮರ್ಥವಾಗಿ ಬಳಸಿಕೊಂಡು ಜೀವನದಲ್ಲಿ ಸಾಧನೆ ಮಾಡಬೇಕು ಎಂದರು.
ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಮಾತನಾಡಿ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುವ ಮೂಲಕ ಪೋಷಕರ ಹಾಗೂ ಶಿಕ್ಷಕರ ಪರಿಶ್ರಮಕ್ಕೆ ಪ್ರತಿಫಲ ನೀಡಬೇಕು ಎಂದು ಹೇಳಿದರು.
ಸಮಾಜದ ಪ್ರತಿಯೊಬ್ಬರು ವಿದ್ಯಾವಂತರಾಗಬೇಕು ಎನ್ನುವ ಉದ್ದೇಶವನ್ನು ಮುಂದಿಟ್ಟುಕೊಂಡು ಕಳೆದ ಅನೇಕ ವರ್ಷಗಳಿಂದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ದಲಿತ ಸಂಘರ್ಷ ಸಮಿತಿ ಸನ್ಮಾನಿಸಿಕೊಂಡು ಬಂದಿದೆ ಎಂದರು.
ಸಮಾಜ ಸೇವಕ ವಾಸುದೇವ ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಗುಣ ನಡತೆಗಳನ್ನು ಅಳವಡಿಸಿಕೊಂಡು ಶಿಕ್ಷಣದ ಗುರಿ ಸಾಧನೆ ಮಾಡಬೇಕು. ಆ ಮೂಲಕ ಪೋಷಕರಿಗೆ ಹಾಗೂ ಗುರುಗಳಿಗೆ ಹೆಸರು ತಂದು ಕೊಡಬೇಕು ಎಂದು ಕರೆ ನೀಡಿದರು.
ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಸಂಚಾಲಕ ದೀಪಕ್ ಪೊನ್ನಪ್ಪ ಮಾತನಾಡಿ ಜ್ಞಾನವು ಪ್ರತಿಯೊಬ್ಬರ ಜೀವನದಲ್ಲಿ ಬಹಳ ಮುಖ್ಯವಾದ ಅಂಶವಾಗಿರುತ್ತದೆ. ಬದುಕಿಗೆ ಮುಖ್ಯ ತಿರುವನ್ನು ನೀಡುವ ಶಕ್ತಿಯನ್ನು ಇದು ಹೊಂದಿದೆ. ಶಿಕ್ಷಕರ ಮಾರ್ಗದರ್ಶನವನ್ನು ಪಡೆದುಕೊಳ್ಳುವುದರಿಂದ ಶೈಕ್ಷಣಿಕ ಯಶಸ್ಸು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜು ಪ್ರಾಂಶುಪಾಲರಾದ ವಸಂತ ಕುಮಾರಿ ಈ ಸನ್ಮಾನ ಹೊಸ ಸ್ಫೂರ್ತಿಯನ್ನು ನೀಡಿದ್ದು, ಮುಂದಿನ ವರ್ಷ ಮತ್ತಷ್ಟು ಉತ್ತಮ ಫಲಿತಾಂಶ ಗಳಿಸಲು ಶ್ರಮಿಸುವುದಾಗಿ ತಿಳಿಸಿದರು.
ದಲಿತ ಸಂಘರ್ಷ ಸಮಿತಿಯ ವಿದ್ಯಾರ್ಥಿ ಒಕ್ಕೂಟದ ಸಂಚಾಲಕ ಸಂತೋಷ್ ಕುಮಾರ್, ನಗರ ಸಂಚಾಲಕ ಲೋಕನಾಥ್, ಉದ್ಯಮಿ ಅವಿನ್ ಕುಮಾರ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.












