ಮಡಿಕೇರಿ ಡಿ.4 : ಕೊಡವ ಅಭಿವೃದ್ಧಿ ನಿಗಮಕ್ಕೆ ಹಿಂದಿನ ಬಿಜೆಪಿ ಸರ್ಕಾರ ಅನುದಾನ ಬಿಡುಗಡೆ ಮಾಡಿಲ್ಲವೆಂದು ವಿನಾಕಾರಣ ಟೀಕೆ ಮಾಡುವ ಬದಲು ಈಗ ಇರುವ ತಮ್ಮದೇ ಸರ್ಕಾರದಿಂದ ತಕ್ಷಣ ಹಣ ಬಿಡುಗಡೆ ಮಾಡಿಸಲು ಕಾಂಗ್ರೆಸ್ಸಿಗರು ಕ್ರಮ ಕೈಗೊಳ್ಳಲಿ ಎಂದು ಕೊಡಗು ಜಿಲ್ಲಾ ಬಿಜೆಪಿ ಒತ್ತಾಯಿಸಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ವಕ್ತಾರ ಮಹೇಶ್ ಜೈನಿ, ಕೊಡಗು ಕಾಂಗ್ರೆಸ್ಸಿಗರು ಕೊಡವ ಅಭಿವೃದ್ಧಿ ನಿಗಮದ ವಿಚಾರದಲ್ಲಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೊಡವ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಹಿಂದಿನ ಬಸವರಾಜು ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ಕೊಡವ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಆದೇಶಿಸಿದೆ. ಆದರೆ ಆ ಸಂದರ್ಭ ವಿಧಾನಸಭಾ ಚುನಾವಣೆ ಘೋಷಣೆಯಾದ ಹಿನ್ನೆಲೆ ಹಣವನ್ನು ನಿಗಮಕ್ಕೆ ನೀಡಲು ಸಾಧ್ಯವಾಗಿಲ್ಲ.
2022-23 ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿದಂತೆ 10 ಕೋಟಿ ರೂ. ಅನುದಾನದಲ್ಲಿ ಕೊಡವ ಜನಾಂಗದ ಶ್ರೇಯೋಭಿವೃದ್ಧಿಗಾಗಿ ಕಾರ್ಯಕ್ರಮಗಳನ್ನು ರೂಪಿಸಲು ಕ್ರಿಯಾಯೋಜನೆಗೆ ಅನುಮೋದನೆ ನೀಡಿ ಆದೇಶಿಸಲಾಗಿದೆ. ಜಿಲ್ಲಾಧಿಕಾರಿಗಳ ಖಾತೆಗೆ ಹಣ ಜಮಾವಣೆಯಾಗಿದ್ದು, ಕಾಮಗಾರಿಯನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.
ಕಾಂಗ್ರೆಸ್ಸಿಗರು ಹೇಳಿರುವಂತೆ 2018ರ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರಕಾರದಲ್ಲಿ ಯಾವುದೇ ಹಣ ಬಿಡುಗಡೆ ಮಾಡಿದ ದಾಖಲೆಗಳಿದ್ದಲ್ಲಿ ಬಿಡುಗಡೆ ಮಾಡಲಿ ಎಂದು ಮಹೇಶ್ ಜೈನಿ ಸವಾಲು ಹಾಕಿದರು.
ಹಿಂದಿನ ಬಿಜೆಪಿ ಸರ್ಕಾರ ಕೊಡಗು ಜಿಲ್ಲೆಯ ರಸ್ತೆಗಳ ಅಭಿವೃದ್ಧಿಗೆ ರೂ.100 ಕೋಟಿ ಘೋಷಣೆ ಮಾಡಿದ್ದರು. ಅಲ್ಲದೆ ಮಲೆನಾಡಿನ 5 ಜಿಲ್ಲೆಗಳ 500 ಕಾಲುಸೇತುವೆಗಳ ನಿರ್ಮಾಣಕ್ಕಾಗಿ 250 ಕೋಟಿ ರೂ. ಘೋಷಣೆ ಮಾಡಲಾಗಿತ್ತು. ಕಾಡಾನೆಗಳ ಹಾವಳಿ ನಿಯಂತ್ರಣಕ್ಕಾಗಿ 150 ಕೋಟಿ ರೂ. ಘೋಷಣೆ ಮಾಡಿದ್ದರು. ಆದರೆ ಈಗ ಬಂದಿರುವ ಕಾಂಗ್ರೆಸ್ ಸರಕಾರ ಹೊಸ ಬಜೆಟ್ ಮಂಡನೆ ಸಂದರ್ಭ ಈ ಎಲ್ಲಾ ಅಂಶಗಳನ್ನು ಕೈಬಿಟ್ಟಿದೆ ಎಂದು ಆರೋಪಿಸಿದರು.
ಸಂಸದ ಪ್ರತಾಪ್ ಸಿಂಹ ಅವರ ವಿಶೇಷ ಪ್ರಯತ್ನದ ಫಲವಾಗಿ ಮಡಿಕೇರಿ ಮತ್ತು ವಿರಾಜಪೇಟೆಯ ಎರಡು ಪ್ರಥಮ ದರ್ಜೆ ಕಾಲೇಜುಗಳಿಗೆ ತಲಾ 5 ಕೋಟಿಯಂತೆ ಒಟ್ಟು 10 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಕುಶಾಲನಗರದಿಂದ ಸಂಪಾಜೆಯವರೆಗೆ ಚತುಷ್ಪಥ ರಸ್ತೆಯ ಕಾಮಗಾರಿ ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದೆ. ಕೇಂದ್ರ ಸರಕಾರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳಿಗೆ ಕೋಟ್ಯಾಂತರ ರೂ. ಅನುದಾನ ಬಿಡುಗಡೆ ಮಾಡಿದೆ. ಜಿಲ್ಲೆಯಲ್ಲಿ ಸುಮಾರು 63 ಬಿಎಸ್‌ಎನ್‌ಎಲ್ ಟವರ್ ಗಳ ಕಾಮಗಾರಿ ತ್ವರಿತಗತಿಯಲ್ಲಿ ನಡೆಯುತ್ತಿದೆ.
ಸಂಸದ ಪ್ರತಾಪ್ ಸಿಂಹ ಅವರು ಕೊಡಗಿನ ಅಭಿವೃದ್ಧಿ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದಾರೆ. ಇದನ್ನು ಸಹಿಸದ ಕಾಂಗ್ರೆಸ್ ನಾಯಕರುಗಳು ಸುಳ್ಳು ಆರೋಪವನ್ನು ಮಾಡಿ ಜನಸಮಾನ್ಯರ ಹಾದಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಜಿಲ್ಲೆಯ ಜನರಿಗೆ ವಾಸ್ತವ ಏನು ಎಂಬುವುದು ತಿಳಿದಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರ ಮತ್ತೆ ಬಿಜೆಪಿ ಪಾಲಾಗಲಿದೆ ಎಂದು ಮಹೇಶ್ ಜೈನಿ ಭವಿಷ್ಯ ನುಡಿದರು.
ರಾಜ್ಯ ಬಿಜೆಪಿ ರೈತ ಮೋರ್ಚಾದ ಸದಸ್ಯೆ ಯಮುನಾ ಚಂಗಪ್ಪ ಮಾತನಾಡಿ ಸಂಸದ ಪ್ರತಾಪ್ ಸಿಂಹರ ಕಾರ್ಯವೈಖರಿ ಜಿಲ್ಲೆಯ ಜನತೆಗೆ ತೃಪ್ತಿ ತಂದಿದೆ. ಪ್ರತಿ 3 ತಿಂಗಳಿಗೊಮ್ಮೆ ಅಭಿವೃದ್ಧಿಗೆ ಪೂರಕವಾದ ಸಭೆಗಳನ್ನು ನಡೆಸುತ್ತಿದ್ದಾರೆ. ವಿನಾಕಾರಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಸಂಸದರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದರು.
ಉಚಿತ ಭಾಗ್ಯಗಳನ್ನು ಘೋಷಿಸಿರುವ ಕಾಂಗ್ರೆಸ್ ಸರ್ಕಾರ ವಿದ್ಯುತ್, ಬಸ್ ದರ ಸೇರಿದಂತೆ ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡಿರುವುದು ಯಾಕೆ, ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಯಾಕೆ ಕಡಿಮೆ ಮಾಡಿಲ್ಲವೆಂದು ಪ್ರಶ್ನಿಸಿದರು.
ಸುದ್ದಿಗೋಷ್ಠಿಯಲ್ಲಿ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಬಿಜೆಪಿ ಉಪಾಧ್ಯಕ್ಷ ಬಿ.ಎ.ಅರುಣ್ ಕುಮಾರ್ ಹಾಗೂ ನಗರಾಧ್ಯಕ್ಷ ಮನು ಮಂಜುನಾಥ್ ಉಪಸ್ಥಿತರಿದ್ದರು.











