ಮಡಿಕೇರಿ ಡಿ.8 : ಬರಗಾಲದ ಪರಿಸ್ಥಿತಿಯಿಂದ ರಾಜ್ಯದ ಜನ ಹಾಗೂ ಕೃಷಿಕ ವರ್ಗ ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ ಸರ್ಕಾರ ಬರ ಪರಿಹಾರ ನಿರ್ವಹಣೆಯಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಆರೋಪಿಸಿರುವ ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾ ಘಟಕ, ಹೋರಾಟದ ಎಚ್ಚರಿಕೆ ನೀಡಿದೆ.
ನಗರದಲ್ಲಿ ಅಪರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದ ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಅವರು, ಬರ ಪರಿಹಾರ ಒದಗಿಸುವಲ್ಲಿ ರಾಜ್ಯ ಹಾಗೂ ಕೇಂದ್ರ ಸರಕಾರ ನಿರ್ಲಕ್ಷ್ಯ ತೋರುತ್ತಿವೆ ಎಂದು ಟೀಕಿಸಿದರು.
ಬರ ಪೀಡಿತ ಪ್ರದೇಶಗಳಲ್ಲಿ ಸೂಕ್ತ ರೀತಿಯಲ್ಲಿ ವೈಜ್ಞಾನಿಕ ಸಮೀಕ್ಷೆ ನಡೆಸಬೇಕು. ಸರ್ವ ಪಕ್ಷಗಳ ನಿಯೋಗ ದೆಹಲಿಗೆ ತೆರಳಿ ಬರ ಪರಸ್ಥಿತಿಗೆ ಸ್ಪಂದಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು. ಬೆಳೆಹಾನಿಗೆ ಬೆಳೆವಿಮೆ ತುರ್ತು ಪಾವತಿ ಮಾಡಬೇಕು. ಬರಪೀಡಿತ ಪ್ರದೇಶದ ರೈತರಿಗೆ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಬೇಕು. ಪಶುಸಂಗೋಪನೆಯಲ್ಲಿ ತೊಡಗಿರುವ ಹಾಗೂ ಜಾನುವಾರು ಹೊಂದಿರುವ ರೈತರಿಗೆ ಪ್ರತಿ ಜಾನುವಾರಿಗೆ 5 ಸಾವಿರ ರೂ. ಪರಿಹಾರ ಮಂಜೂರು ಮಾಡಬೇಕು. ಬೆಲೆ ಏರಿಕೆ ನೀಗಿಸಿ ಕುಟುಂಬ ನಿರ್ವಹಿಸಲು ಪ್ರತಿ ಕುಟುಂಬಕ್ಕೆ ಉಚಿತ ರೇಷನ್ ಒದಗಿಸಬೇಕು. ಮನರೇಗಾ ಮತ್ತಿತರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಗ್ರಾಮೀಣ ಭಾಗದಲ್ಲಿ ಆದಾಯ ಹೆಚ್ಚಿಸುವ ವ್ಯವಸ್ಥೆ ಕಲ್ಪಿಸಬೇಕು. ಸಾಂಕ್ರಾಮಿಕ ರೋಗಗಳು ಹರಡದಂತೆ ಸರಕಾರಿ ಆಸ್ಪತ್ರೆಗಳ ವ್ಯವಸ್ಥೆ ಸುಧಾರಿಸಬೇಕು ಎಂದು ಅವರು ಒತ್ತಾಯಿಸಿದರು.
ಬರ ಸಮಸ್ಯೆಗಳಿಗೆ ಪರಿಹಾರ ದೊರೆಯದೆ ರೈತರು ಆತ್ಮಹತ್ಯೆಯ ದಾರಿ ಹಿಡಿದರೆ, ಅದಕ್ಕೆ ಸರ್ಕಾರವೇ ನೇರ ಜವಾಬ್ದಾರಿಯಾಗಲಿದೆ ಎಂದು ಎಚ್ಚರಿಕೆ ನೀಡಿದ ಭೋಜಣ್ಣ ಸೋಮಯ್ಯ, ಜನಸಾಮಾನ್ಯರ ಹಾಗೂ ಕೃಷಿಕರ ಹಕ್ಕುಗಳಿಗಾಗಿ ಹೋರಾಟ ನಡೆಸಲು ಆಮ್ ಆದ್ಮಿ ಪಾರ್ಟಿ ಸಿದ್ಧವಿದೆ ಎಂದರು.
ರಾಜ್ಯದ ವಿವಿಧ ಜಿಲ್ಲೆಗಳ ಬೆಳೆಗಾರರಂತೆ ಕೊಡಗಿನ ಬೆಳೆಗಾರರು ಕೂಡ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವಿದೆ, ರಾಜ್ಯದಲ್ಲಿ ಬಿಜೆಪಿ ಸಂಸದರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದರೆ ರೈತರ ಸಮಸ್ಯೆಗಳನ್ನು ಕೇಂದ್ರ ಸರ್ಕಾರಕ್ಕೆ ಮನದಟ್ಟು ಮಾಡಿಕೊಡುವಲ್ಲಿ ವಿಫಲರಾಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಬಹುಮತದ ಸರ್ಕಾರವಿದ್ದರೂ ಕೃಷಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲವೆಂದು ಆರೋಪಿಸಿದರು.









