ಬೆಂಗಳೂರು ಡಿ.8 : ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ (85) ಅವರು ಇಂದು ನಿಧನ ಹೊಂದಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಲೀಲಾವತಿ ಅವರು ತಮ್ಮ ಪ್ರೀತಿಯ ಪುತ್ರ ವಿನೋದ್ ರಾಜ್ ಅವರನ್ನು ಅಗಲಿದ್ದಾರೆ. ಕನ್ನಡ, ತಮಿಳು, ತೆಲುಗು ಸೇರಿದಂತೆ 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಮದುವೆ ಮಾಡಿನೋಡು’ ಮತ್ತು ‘ಸಂತ ತುಕಾರಾಮ್’ ಸಿನಿಮಾಗಳಿಗೆ ಲೀಲಾವತಿ ಅವರು 2 ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. 1938ರಲ್ಲಿ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ಜನಿಸಿದ ಲೀಲಾವತಿ ಅವರು 50 ವರ್ಷಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದರು. ಲೀಲಾವತಿ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ನಾಯಕರುಗಳು ಹಾಗೂ ಚಿತ್ರರಂಗದ ಸರ್ವರು ಲೀಲಾವತಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.










