ಮಡಿಕೇರಿ ಡಿ.16 : ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಥಳಿಸಿರುವ ಅಮಾನವೀಯ ಘಟನೆಯನ್ನು ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದಿಂದ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.
ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ, ಮಡಿಕೇರಿ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಅವರ ನೇತೃತ್ವದಲ್ಲಿ ಶನಿವಾರ ಬೆಳಗ್ಗೆ ಜ.ತಿಮ್ಮಯ್ಯ ವೃತ್ತದಲ್ಲಿ ಸಮಾವೇಶಗೊಂಡ ಪಕ್ಷದ ಕಾರ್ಯಕರ್ತರು, ಬೆಳಗಾವಿ ಘಟನೆಯನ್ನು ತೀವ್ರವಾಗಿ ಖಂಡಿಸಿದರು. ರಾಜ್ಯದಲ್ಲಿ ಮಹಿಳೆಯರಿಗೆ ಭದ್ರತೆ ಇಲ್ಲದಾಗಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದರು.
ಭ್ರೂಣ ಹತ್ಯೆ ಪ್ರಕರಣದ ವಿರುದ್ಧವೂ ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ಈ ಸಂಬಂಧ ರಾಜ್ಯ ಸರ್ಕಾರ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ನಗರಸಭಾ ಉಪಾಧ್ಯಕ್ಷೆ ಸವಿತಾ ರಾಕೇಶ್, ಸದಸ್ಯರುಗಳಾದ ಮಹೇಶ್ ಜೈನಿ, ಅರುಣ್ ಶೆಟ್ಟಿ, ಪಕ್ಷದ ಪ್ರಮುಖರಾದ ಜಗದೀಶ್, ನಾಗೇಶ್, ಬಾಲಕೃಷ್ಣ, ಅರುಣ್ ಕುಮಾರ್, ಚಂದ್ರು ಸೇರಿದಂತೆ ಕಾರ್ಯಕರ್ತರು ಪಾಲ್ಗೊಂಡಿದ್ದರು.








