ಮಡಿಕೇರಿ ಡಿ.16 : ಸಂಸತ್ ಭವನದಲ್ಲಿ ಇಬ್ಬರು ವ್ಯಕ್ತಿಗಳು ಆತಂಕ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಅವರನ್ನು ಉಚ್ಚಾಟಿಸಬೇಕೆಂದು ಆಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದ್ದಾರೆ.
ಪಕ್ಷದ ರಾಜ್ಯ ಕಚೇರಿಯಿಂದ ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಂಸತ್ತಿನ ಭದ್ರತಾ ಲೋಪದ ನೈತಿಕ ಹೊಣೆ ಹೊತ್ತು ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ಸಂಸತ್ತಿನ ಭದ್ರತಾ ಲೋಪ ಆಘಾತಕಾರಿ ಘಟನೆಯಾಗಿದೆ. ದಾಳಿ ನಡೆಸಿದ ಯುವಕರಿಗೆ ಸಂಸದ ಪ್ರತಾಪ್ ಸಿಂಹ ಅವರು ಪಾಸ್ ನೀಡಿರುವುದು ಅತ್ಯಂತ ಕಳವಳಕಾರಿ ವಿಚಾರವಾಗಿದೆ. ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹವಾಗಿದೆ. ತಕ್ಷಣ ಪ್ರತಾಪ್ ಸಿಂಹ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಉಚ್ಚಾಟನೆ ಮಾಡಬೇಕು. ಸಂಸತ್‌ಗೆ ರಕ್ಷಣೆ ನೀಡಲಾಗದ ಗೃಹ ಸಚಿವರು ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ.
ಈ ಘಟನೆ ಹಿಂದೆ ಬೇರೆ ಹುನ್ನಾರಗಳಿರಬಹುದು. ಇದು ದೇಶದ ಸುರಕ್ಷತೆಯ ದೃಷ್ಟಿಯಿಂದ ಹಲವು ಪ್ರಶ್ನೆಗಳನ್ನು ಸೃಷ್ಟಿಸಿವೆ. ಮೈಸೂರಿನ ಮೂಲದ ಮನೋರಂಜನ್ ಅವರಿಗೆ ಈ ಮೊದಲು ಪ್ರತಾಪ್ ಸಿಂಹ ಅವರೇ ಪಾಸ್ ನೀಡಿದ್ದರು ಎನ್ನಲಾಗುತ್ತಿದೆ. ಪರಿಚಿತರಿಗಷ್ಟೇ ಪಾಸ್ ನೀಡಬೇಕು ಎಂಬ ನಿಯಮವಿದೆ.
ಆದರೆ ಭದ್ರತಾ ಸಿಬ್ಬಂದಿಯನ್ನು ಮಾತ್ರ ಕೆಲಸದಿಂದ ತೆಗೆದು ಹಾಕಲಾಗಿದೆ. ಪಾಸ್ ನೀಡಿರುವ ಸಂಸದ ಪ್ರತಾಪ್ ಸಿಂಹ ಅವರನ್ನು ಕೂಡ ಉಚ್ಚಾಟಿಸಬೇಕು ಮತ್ತು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಚಂದ್ರು ಆಗ್ರಹಿಸಿದ್ದಾರೆ.











