ಮಡಿಕೇರಿ ಡಿ.18 : ಕೇರಳ ರಾಜ್ಯದಲ್ಲಿ ಕೊರೋನಾ ರೂಪಾಂತರಿ ಜೆಎನ್.1 ಪತ್ತೆಯಾಗಿರುವ ಹಿನ್ನೆಲೆಯಲ್ಲಿ ನಮ್ಮ ರಾಜ್ಯದಲ್ಲಿಯೂ ಅಗತ್ಯ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಕುಶಾಲನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್, ಮಾಸ್ಕ್, ವೆಂಟಿ ಲೇಟರ್, ಪಿಪಿ ಕಿಟ್, ಬೆಡ್‍ಗಳ ಕೊರತೆ ಉಂಟಾಗದಂತೆ ಎಚ್ಚರ ವಹಿಸಲಾಗಿದೆ. 60 ವರ್ಷ ಮೇಲ್ಪಟ್ಟವರು, ಹೃದಯ ಸಂಬಂಧಿ ಸಮಸ್ಯೆ, ಜ್ವರ, ಕೆಮ್ಮು ರೋಗ ಲಕ್ಷಣ ಕಂಡುಬಂದಲ್ಲಿ ಕಡ್ಡಾಯ ಮಾಸ್ಕ್ ಧರಿಸುವಂತೆ ಸಲಹೆ ನೀಡಿದರು.
ಅಗತ್ಯ ಕ್ರಮಕೈಗೊಳ್ಳುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಡಾ.ರವಿ ನೇತೃತ್ವದ ತಾಂತ್ರಿಕ ಸಲಹಾ ಸಮಿತಿಯ ಸಭೆ ನಡೆಸಿ ಕೆಲವು ಸಲಹೆ ಸೂಚನೆಗಳನ್ನು ನೀಡಲಾಗಿದೆ ಎಂದರು.
ಕೇರಳ ಗಡಿಗೆ ಹೊಂದಿಕೊಂಡಂತೆ ಇರುವ ಸ್ಥಳಗಳಲ್ಲಿ ನಿಗಾ ತಪಾಸಣೆ ಮಾಡಲಾಗುವುದು. ಹೆಚ್ಚು ಟೆಸ್ಟಿಂಗ್ ಮಾಡಲು ಆರೋಗ್ಯ ಇಲಾಖೆಗೆ ಆದೇಶ ನೀಡಲಾಗಿದ್ದು, ಹೆಚ್ಚು ಪಾಸಿಟಿವ್ ಕೇಸ್ ಬಂದರೆ ನಿರ್ಬಂಧದ ಬಗ್ಗೆ ಯೋಚಿಸುವುದಾಗಿ ತಿಳಿಸಿದರು.