ಸುಂಟಿಕೊಪ್ಪ, ಡಿ.20: ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭ ಮರದ ಕೊಂಬೆ ಬಿದ್ದು ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪದಲ್ಲಿ ನಡೆದಿದೆ.
ಸಮೀಪದ ಡಿ.ಪನ್ಯ ತೋಟದ ಲೈನ್ ಮನೆಯಲ್ಲಿ ವಾಸವಿರುವ ಕಾರ್ಮಿಕ ಬಪ್ಪಯ್ಯ ಎಂಬವರ ಪತ್ನಿ ಲಕ್ಷ್ಮೀ (48) ಮೃತ ದುರ್ದೈವಿ.
ಎಂದಿನಂತೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಮರದ ಕೊಂಬೆ ತಲೆ ಮೇಲೆ ಬಿದ್ದಿದ್ದು, ಗಾಂಭೀರ ಗಾಯಗೊಂಡ ಲಕ್ಷೀ ಅವರಿಗೆ ಸುಂಟಿಕೊಪ್ಪ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತು. ಆದರೆ ಆದಾಗಲೇ ಮಹಿಳೆ ಸಾವನ್ನಪ್ಪಿರುವುದಾಗಿ ವೈದ್ಯರು ದೃಢಪಡಿಸಿದರು.
ಘಟನಾ ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತರು ಪತಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.










