ಮಡಿಕೇರಿ, ಡಿ.21 : ರಾಷ್ಟ್ರೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ, ನವದೆಹಲಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ( ಕೆ- ಸ್ಟೆಪ್ಸ್ ) ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ಹಾಗೂ ಮಡಿಕೇರಿ ನಗರದ ಕೊಡಗು ವಿದ್ಯಾಲಯದ ವತಿಯಿಂದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಸಹಯೋಗದೊಂದಿಗೆ ಡಿ.22 ರಂದು ಬೆಳಿಗ್ಗೆ 10.00 ಗಂಟೆಗೆ
ಮಡಿಕೇರಿ ನಗರದ ಕೊಡಗು ವಿದ್ಯಾಲಯದಲ್ಲಿ “ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ”ಎಂಬ ಕೇಂದ್ರ ವಿಷಯದಡಿ 31ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ-2023 ವನ್ನು ಸಂಘಟಿಸಲಾಗಿದೆ.
ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದ ಕೇಂದ್ರ ವಿಷಯದಡಿ ನಾನಾ ಉಪ-ವಿಷಯಗಳ ಅಭ್ಯಾಸಾತ್ಮಕ ಚಟುವಟಿಕೆ ಕುರಿತು ಇಬ್ಬರು ವಿದ್ಯಾರ್ಥಿಗಳ ತಂಡ ತಮ್ಮ ಶಿಕ್ಷಕರ ಮಾರ್ಗದರ್ಶನದೊಂದಿಗೆ ವಿಜ್ಞಾನಿಗಳ ಮಾದರಿಯಲ್ಲಿ ವೈಜ್ಞಾನಿಕ ಯೋಜನಾ ವರದಿ ತಯಾರಿಸಿ ವೈಜ್ಞಾನಿಕ ಯೋಜನಾ ಪ್ರಬಂಧ ಮಂಡಿಸಲಿದ್ದಾರೆ
ಎಂದು ಎಂದು ರಾಜ್ಯ ವಿಜ್ಞಾನ ಪರಿಷತ್ ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷ ಟಿ.ಜಿ ಪ್ರೇಮಕುಮಾರ್ ತಿಳಿಸಿದ್ದಾರೆ.
ಜಿಲ್ಲಾಮಟ್ಟದಲ್ಲಿ ಉತ್ತಮ ವೈಜ್ಞಾನಿಕ ಯೋಜನಾ ಪ್ರಬಂಧ ಮಂಡಿಸಿ ಆಯ್ಕೆಯಾಗುವ ಮೊದಲ 10 ತಂಡಗಳು ಜನವರಿ ಮೊದಲ ವಾರದಲ್ಲಿ ಕೊಪ್ಪಳ ನಗರದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ರಾಜ್ಯಮಟ್ಟದ ವಿಜ್ಞಾನ ಸಮಾವೇಶದಲ್ಲಿ ಪಾಲ್ಗೊಂಡು ವೈಜ್ಞಾನಿಕ ಪ್ರಬಂಧ ಮಂಡಿಸಲಿದ್ದಾರೆ ಎಂದು ಸಮಾವೇಶದ ಜಿಲ್ಲಾ ಸಂಯೋಜಕ ಜಿ.ಶ್ರೀಹರ್ಷ ತಿಳಿಸಿದ್ದಾರೆ.
ನಂತರ ರಾಜ್ಯ ಮಟ್ಟದಲ್ಲಿ ಆಯ್ಕೆಯಾಗುವ ಮೊದಲ 30 ತಂಡಗಳು ಜನವರಿಯಲ್ಲಿ ಜರುಗುವ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ-2023ದಲ್ಲಿ ಭಾಗವಹಿಸಲಿವೆ ಎಂದು ತಿಳಿಸಿದ್ದಾರೆ.
ಈ ಸಮಾವೇಶದಲ್ಲಿ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಜ್ಞಾನ ಆಸಕ್ತ ಶಿಕ್ಷ ಕರು ಭಾಗವಹಿಸಲು ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಓಓಡಿ ಸೌಲಭ್ಯ ಕಲ್ಪಿಸಲಾಗಿದೆ.
ಡಿ.22 ರಂದು( ಶುಕ್ರವಾರ ) ಬೆಳಿಗ್ಗೆ 10.15 ಕ್ಕೆ ಜಿಲ್ಲಾಮಟ್ಟದ ಮಕ್ಕಳ ವಿಜ್ಞಾನ ಸಮಾವೇಶವನ್ನು ಅಪರ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಉದ್ಘಾಟಿಸಲಿದ್ದು, ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ಕೆ.ಎಸ್.ಸುಮಿತ್ರ ಅಧ್ಯಕ್ಷತೆ ವಹಿಸಲಿದ್ದಾರೆ. ಡಿಡಿಪಿಐ ಎಂ.ಚಂದ್ರಕಾಂತ್, ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮತ್ತಿತರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಂಜೆ 3.15 ಕ್ಕೆ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿಯ ಅಧ್ಯಕ್ಷ ಟಿ.ಜಿ.ಪ್ರೇಮಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಶಾಸಕ ಡಾ.ಮಂಥರ್ ಗೌಡ ಬಾಲ ವಿಜ್ಞಾನಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಿದ್ದಾರೆ.
ಜಿಲ್ಲಾ ಉಪ ವಿಭಾಗಾಧಿಕಾರಿ ಸತೀಶ್ ಉಳ್ಳಾಲ್ ಬಹುಮಾನ ವಿತರಿಸಲಿದ್ದು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಕೆ.ಎಂ.ಸತೀಶ್ ಕುಮಾರ್ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮಕ್ಕಳ ಸಮಾವೇಶಕ್ಕೆ ಸಂಬಂಧಿಸಿದಂತೆ ಮಾಹಿತಿಗಾಗಿ ಸಮಾವೇಶದ ಜಿಲ್ಲಾ ಸಂಯೋಜಕ ಜಿ.ಶ್ರೀಹರ್ಷ (ಮೊ.ನಂ: 9481431263) ಅವರನ್ನು ಸಂಪರ್ಕಿಸಬಹುದು.











