ಮಡಿಕೇರಿ ಡಿ.22 : ಜಿಲ್ಲೆಯ ನೆರೆ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ ಜಿಲ್ಲೆಯ ಗಡಿ ಭಾಗದಲ್ಲಿಯೂ ಸಹ ಅಗತ್ಯ ಮುನ್ನೆಚ್ಚರ ವಹಿಸುವುದು, ಜೊತೆಗೆ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಸಲಹೆ ಮಾಡಿದ್ದಾರೆ.
ವಿವಿಧ ಇಲಾಖೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪರಿಶೀಲನಾ ಸಂದರ್ಭದಲ್ಲಿ ಅವರು ಮಾತನಾಡಿದರು.
ನೆರೆಯ ರಾಜ್ಯದಲ್ಲಿ ಕೆಲವು ದಿನಗಳಿಂದ ಕೋವಿಡ್-19 ಪ್ರಕರಣಗಳ ಸಂಖ್ಯೆ ಏರಿಕೆಯಾಗುವುದರಿಂದ ಜಿಲ್ಲೆಯಲ್ಲಿಯೂ ಸಹ ಅಗತ್ಯ ಎಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿದೆ ಎಂದು ಪ್ರಸಾದ್ ಹೇಳಿದರು.
ಜಿಲ್ಲೆಯ ಕುಟ್ಟ, ಮಾಕುಟ್ಟ, ಕರಿಕೆ ಗ್ರಾಮದ ಗಡಿ ಪ್ರದೇಶದಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸುವುದರ ಜೊತೆಗೆ ಅಗತ್ಯ ತಪಾಸಣೆ ಕೈಗೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತಿಳಿಸಿದರು.
‘ನೆರೆಯ ರಾಜ್ಯ ಮಾತ್ರವಲ್ಲದೆ ವಿವಿಧ ಕಡೆಗಳಲ್ಲಿ ಜೆಎನ್.1 ಪ್ರಕರಣಗಳು ವರದಿಯಾಗಿವೆ. ಆದ್ದರಿಂದ ಅಗತ್ಯ ಮುನ್ನೆಚ್ಚರ ವಹಿಸುವುದು ಅತ್ಯಗತ್ಯ. ಆದರೆ ಆತಂಕ ಪಡುವ ಅಗತ್ಯವಿಲ್ಲ. ಆದರೂ ಎಲ್ಲರೂ ಮುನ್ನೆಚ್ಚರ ವಹಿಸಬೇಕಿದೆ ಎಂದು ಡಾ.ಎನ್.ವಿ.ಪ್ರಸಾದ್ ಅವರು ವಿವರಿಸಿದರು.’
ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿ, ಉಪಕರಣಗಳು ಇರಬೇಕು. ಆರೋಗ್ಯಕ್ಕೆ ಸಂಬಂಧಿಸಿದಂತೆ ಉಪಕರಣಗಳು ಹಾಗೂ ಸೌಲಭ್ಯಗಳು ಬೇಕಿದ್ದಲ್ಲಿ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಡಿಎಚ್‍ಒಗೆ ಡಾ.ಪ್ರಸಾದ್ ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಜಿಲ್ಲೆಯ ಗಡಿ ಪ್ರದೇಶದಲ್ಲಿ ಸರ್ಕಾರದ ನಿರ್ದೇಶನದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್, ವೆಂಟಿಲೇಟರ್, ಹಾಸಿಗೆ, ಔಷಧಿ ಸೇರಿದಂತೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಲಹೆ ಮಾಡಿದರು.
ಶಕ್ತಿ ಯೋಜನೆಯಡಿ ಜಿಲ್ಲೆಗೆ ಹೊಸ ಬಸ್‍ಗಳು ಶೀಘ್ರ ಬರಲಿದ್ದು, ಈಗಾಗಲೇ ಬಸ್ ಖರೀದಿಗೆ ಮುಂದಾಗಲಾಗಿದೆ ಎಂದು ಸಾರಿಗೆ ಇಲಾಖೆಯ ಕಾರ್ಯದರ್ಶಿಯಾದ ಡಾ.ಎನ್.ವಿ.ಪ್ರಸಾದ್ ಅವರು ಹೇಳಿದರು.
ಯಾವ ಯಾವ ಊರುಗಳಿಗೆ ಬಸ್ ಅಗತ್ಯವಿದೆ. ಅಲ್ಲಿಗೆ ಬಸ್ ಸೌಲಭ್ಯ ಕಲ್ಪಿಸಬೇಕು. ಸಾರ್ವಜನಿಕರಿಂದ ದೂರು ಬರದಂತೆ ಗಮನಹರಿಸಬೇಕು ಎಂದರು.
ಅನ್ನಭಾಗ್ಯ ಯೋಜನೆಯಡಿ ಸರ್ಕಾರದ ನಿಯಮದಂತೆ ಪಡಿತರ ವಿತರಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಆಹಾರ ಇಲಾಖೆ ಅಧಿಕಾರಿಗೆ ಸೂಚಿಸಿದರು. ಬಿಪಿಎಲ್, ಅಂತ್ಯೋದಯ ಅನ್ನಭಾಗ್ಯ ಯೋಜನೆ ಹೀಗೆ ಹಲವು ವಿಚಾರಗಳ ಕುರಿತು ಮಾಹಿತಿ ಪಡೆದರು.
ಬಿಪಿಎಲ್ ಪಡಿತರ ಚೀಟಿದಾರರಿಗೆ ಪ್ರತೀ ಯೂನಿಟ್ ಸದಸ್ಯರಿಗೆ 5 ಕೆ.ಜಿ ಅಕ್ಕಿಯಂತೆ ಉಚಿತವಾಗಿ ವಿತರಿಸಲಾಗುತ್ತಿದೆ. ಹಾಗೂ ಆದ್ಯತಾ(ಎಎವೈ) ಪಡಿತರ ಚೀಟಿದಾರರಿಗೆ ಪ್ರತೀ ಪಡಿತರ ಚೀಟಿಗೆ 35 ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತಿದೆ ಎಂದು ಆಹಾರ ಇಲಾಖೆಯ ಕಿರಣ್ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ 1,10,824 ಪಡಿತರ ಚಿಟಿದಾರರು ಇದರ ಪ್ರಯೋಜನ ಪಡೆಯುತ್ತಿದ್ದಾರೆ. ಆದ್ಯತೇತರ ಪಡಿತರ ಚೀಟಿದಾರರಿಗೆ ಸಂಬಂಧಿಸಿದಂತೆ ಪಡಿತರಕ್ಕೆ ನೋಂದಾಯಿಸಿಕೊಂಡ ಪಡಿತರ ಚೀಟಿದಾರರಿಗೆ 1 ಯೂನಿಟ್ ಗೆ 5 ಕೆ.ಜಿ ಅಕ್ಕಿ 1 ಕ್ಕಿಂತ ಮೇಲ್ಪಟ್ಟ ಯೂನಿಟ್ ಗೆ 10 ಕೆ.ಜಿ ಅಕ್ಕಿಯನ್ನು 1 ಕೆ.ಜಿ ಗೆ ರೂ 15 ರಂತೆ ಪಡೆದು ವಿತರಿಸಲಾಗುತ್ತಿದೆ. ಜಿಲ್ಲೆಯಲ್ಲಿ 26,172 ಆದ್ಯತೇತರ (ಎಪಿಎಲ್) ಪಡಿತರ ಚೀಟಿದಾರರು ಪಡಿತರ ಪಡೆಯಲು ಹೆಸರು ನೋಂದಾಯಿಸಿಕೊಂಡಿರುತ್ತಾರೆ ಎಂದು ಅವರು ಮಾಹಿತಿ ನಿಡಿದರು.
ಸರ್ಕಾರದ ಆದೇಶದಂತೆ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗುವ 05 ಕೆ.ಜಿ ಆಹಾರ ಧಾನ್ಯದೊಂದಿಗೆ ರಾಜ್ಯ ಸರ್ಕಾರದ ವತಿಯಿಂದ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು 05 ಕೆ.ಜಿ ಹೆಚ್ಚುವರಿ ಅಕ್ಕಿಯ ಬದಲಾಗಿ ಜುಲೈ-2023ರ ಮಾಹೆಯಿಂದ ನವೆಂಬರ್-2023ರ ಮಾಹೆಯವರೆಗೆ ಪ್ರತಿ ಕೆ.ಜಿಗೆ ರೂ 34 ರಂತೆ (34*5 ಕೆ.ಜಿ=170) 170 ರೂಗಳನ್ನು ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಹಣವನ್ನು ವರ್ಗಾಯಿಸಲಾಗಿದೆ. ನವೆಂಬರ್-2023ರ ಮಾಹೆಯ ವರ್ಗಾವಣೆ ಪ್ರಕ್ರಿಯೆ ಕೂಡ ಪೂರ್ಣಗೊಂಡಿದೆ ಎಂದರು.
ಕೊಡಗು ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1.31 ಲಕ್ಷ ಮಹಿಳೆಯರು ಹೆಸರು ನೋಂದಾಯಿಸುವ ಗುರಿ ಇದ್ದು, ಇವರಲ್ಲಿ ಈಗಾಗಲೇ 1.13 ಲಕ್ಷ ಮಹಿಳೆಯರು ಹೆಸರು ನೋಂದಾಯಿಸಿದ್ದಾರೆ. ಉಳಿದಂತೆ 18 ಸಾವಿರ ಕುಟುಂಬದ ಮಹಿಳೆಯರು ಹೆಸರು ನೋಂದಾಯಿಸಲು ಬಾಕಿ ಇದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಖೆಯ ಉಪ ನಿರ್ದೇಶಕರಾದ ನಟರಾಜು ಅವರು ಮಾಹಿತಿ ನೀಡಿದರು.
ಗೃಹಲಕ್ಷ್ಮಿ ಯೋಜನೆಯಡಿ ನವೆಂಬರ್ ವರೆಗೆ ಹಣ ಬ್ಯಾಂಕ್ ಖಾತೆಗೆ ಜಮೆ ಆಗಿದೆ. ತಾಂತ್ರಿಕ ಸಮಸ್ಯೆಯಿಂದ 5 ಸಾವಿರ ಮಂದಿಗೆ ಹಣ ಜಮೆ ಆಗಲು ಬಾಕಿ ಇದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಮಾಹಿತಿ ನೀಡಿದರು.
ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರು ಸಮಸ್ಯೆ ಉಂಟಾಗದಂತೆ ಗಮನಹರಿಸುವಂತೆ ಸ್ಥಳೀಯ ಸಂಸ್ಥೆಗಳು ಹಾಗೂ ತಹಶೀಲ್ದಾರರಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಅವರು ಸೂಚಿಸಿದರು.
ಈ ಬಗ್ಗೆ ತಹಶೀಲ್ದಾರರಾದ ಪ್ರವೀಣ್ ಕುಮಾರ್, ಪ್ರಶಾಂತ್, ಕಿರಣ್ ಗೌರಯ್ಯ, ರಾಮಚಂದ್ರ, ಎಸ್.ಎನ್.ನರಗುಂದ ಅವರು ಮಾಹಿತಿ ನೀಡಿದರು.
ರಸ್ತೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತ್ ಹಾಗೂ ಲೋಕೋಪಯೋಗಿ ಇಲಾಖೆಯ ಬಾಕಿ ಇರುವ ರಸ್ತೆ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸುವಂತೆ ಡಾ.ಎನ್.ವಿ.ಪ್ರಸಾದ್ ಅವರು ನಿರ್ದೇಶನ ನೀಡಿದರು.
ಹಣ ಬಿಡುಗಡೆಯಾಗಲು ಬಾಕಿ ಇದ್ದಲ್ಲಿ ತಿಳಿಸಬೇಕು. ಸರ್ಕಾರದ ಹಂತದಲ್ಲಿ ಹಣ ಬಿಡುಗಡೆಗೆ ಪ್ರಯತ್ನಿಸಲಾಗುವುದು. ಯಾವುದೇ ಹಳೇ ಕಾಮಗಾರಿಗಳು ಅರ್ಧಕ್ಕೆ ನಿಲ್ಲಬಾರದು. ಆ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಸಲಹೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಮುತ್ತುರಾಜ್ ಅವರು 27 ಕಾಮಗಾರಿಗಳಲ್ಲಿ 24 ಕಾಮಗಾರಿಗಳು ಅಂತಿಮ ಹಂತದಲ್ಲಿದ್ದು, ಕಾಮಗಾರಿ ಆರಂಭಿಸಬೇಕಿದೆ ಎಂದು ಮಾಹಿತಿ ನೀಡಿದರು.
ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನಾ ವಿಭಾಗದ ಎಂಜಿನಿಯರ್ ಪ್ರಭು ಅವರು ಈ ಯೋಜನೆಯಡಿ ಕಾಮಗಾರಿ ಪೂರ್ಣಗೊಂಡಿದ್ದು, ನಿರ್ವಹಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಗ್ರಾಮೀಣ ಕುಡಿಯುವ ನೀರು ವಿಭಾಗದ ಎಂಜಿನಿಯರ್ ಸುರೇಶ್‍ಕುಮಾರ್ ಅವರು ಜಲಜೀವನ್ ಮಿಷನ್ ಯೋಜನೆಯಡಿ ಹಲವು ಪ್ರಗತಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದರು.
ಜಿ.ಪಂ. ಉಪ ಕಾರ್ಯದರ್ಶಿ ಧನರಾಜ್ ಅವರು ನರೇಗಾ ಯೋಜನೆಯಡಿ ಉದ್ಯೋಗ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು. ಈ ಕುರಿತು ಮಾತನಾಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಅವರು ನರೇಗಾ ಯೋಜನೆಯಡಿ ಭೌತಿಕ ಪ್ರಗತಿ ಸಾಧಿಸಲಾಗಿದ್ದು, ಆರ್ಥಿಕ ಪ್ರಗತಿ ಸಾಧಿಸುವಂತೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಜನವರಿ ಅಂತ್ಯದೊಳಗೆ ವಿವಿಧ ಇಲಾಖೆಯ ಕಾಮಗಾರಿಗಳು ಹಾಗೂ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಸ್ಪಷ್ಟ ನಿರ್ದೇಶನ ನೀಡಿದರು.
ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನಾ ಕಾರ್ಯಕ್ರಮಗಳನ್ನು ಸರಿಯಾಗಿ ಪ್ರಗತಿ ಸಾಧಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಸಲಹೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ತಾ.ಪಂ.ಇಒಗಳಾದ ಶೇಖರ್, ಅಪ್ಪಣ್ಣ, ಜಯಣ್ಣ ಅವರು ಜಿಲ್ಲೆಯಲ್ಲಿ ಹಲವು ಸಂಘ ಸಂಸ್ಥೆಗಳು ಕ್ರಿಯಾಶೀಲವಾಗಿ ತೊಡಗಿಸಿಕೊಂಡಿದ್ದು, ಸ್ವ ಉದ್ಯೋಗ ಕೈಗೊಂಡಿದ್ದಾರೆ. ನರ್ಸರಿ ಸೇರಿದಂತೆ ಕಾಫಿ, ಕರಿಮೆಣಸು, ಇತರೆ ಉದ್ಯಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದು ವಿಶೇಷವಾಗಿದೆ ಎಂದು ಅವರು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.








