ಮಡಿಕೇರಿ ಡಿ.22 : ರೂಪಾಂತರಿ ಕೋವಿಡ್ ಬಗ್ಗೆ ಎಚ್ಚರ ವಹಿಸುವಂತೆ ಸರ್ಕಾರ ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಗಳನ್ನು ವರ್ತಕರು ಹಾಗೂ ಸಾರ್ವಜನಿಕರು ಪಾಲಿಸಬೇಕು ಎಂದು ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ನ ಅಧ್ಯಕ್ಷ ಎಂ.ಧನಂಜಯ ಮನವಿ ಮಾಡಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ನೆರೆಯ ಕೇರಳ ರಾಜ್ಯದಲ್ಲಿ ರೂಪಾಂತರಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಆದ್ದರಿಂದ ಗಡಿ ಭಾಗದ ಕೊಡಗು ಜಿಲ್ಲೆಯಲ್ಲಿ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.
ವರ್ಷಾಂತ್ಯದ ರಜಾ ದಿನಗಳಲ್ಲಿ ಅಧಿಕ ಸಂಖ್ಯೆಯ ಪ್ರವಾಸಿಗರು ಮಡಿಕೇರಿ ನಗರಕ್ಕೆ ಬರುತ್ತಾರೆ. ಈ ಸಂದರ್ಭ ಮಾಸ್ಕ್ ಕಡ್ಡಾಯ ಮಾಡುವುದು ಮತ್ತು ಸ್ವಚ್ಛತೆಗೆ ಆದ್ಯತೆ ನೀಡುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳು ಚಿಂತನೆ ನಡೆಸಬೇಕಾಗಿದೆ. ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಬರುವ ಪ್ರವಾಸಿಗರ ಮೇಲೆ ಆರೋಗ್ಯ ಇಲಾಖೆ ನಿಗಾ ವಹಿಸಬೇಕು. ಅಲ್ಲದೆ ನಗರದ ವರ್ತಕರು ಕೂಡ ಪ್ರವಾಸಿಗರಲ್ಲಿ ಹಾಗೂ ಸಾರ್ವಜನಿಕರಲ್ಲಿ ಕೋವಿಡ್ ಕುರಿತು ಜಾಗೃತಿ ಮೂಡಿಸಬೇಕು ಎಂದು ಧನಂಜಯ ಹೇಳಿದ್ದಾರೆ.
60 ವರ್ಷ ಹಾಗೂ ಮೇಲ್ಪಟ್ಟವರು ಎಲ್ಲಾ ಹಿರಿಯ ನಾಗರೀಕರು ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ವಿಶೇಷವಾಗಿ ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳು, ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು.
ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳದಿರುವುದು ಸೂಕ್ತ. ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸುವುದು, ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ಭೇಟಿ ನೀಡದಿರುವುದು ಸೂಕ್ತವಾಗಿದೆ
ವೈಯಕ್ತಿಕ ಸ್ವಚ್ಛತೆ, ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು, ಇತ್ಯಾದಿಗಳ ಪಾಲನೆಯು ಅಗತ್ಯವಾಗಿದೆ. ಆರೋಗ್ಯ ಸಮಸ್ಯೆಗಳು ಕಂಡು ಬಂದಲ್ಲಿ, ಮನೆಯಲ್ಲಿರುವುದು ಸೂಕ್ತ. ಆರೋಗ್ಯ ಸಮಸ್ಯೆಗಳನ್ನು ಹೊಂದಿದವರು, ಜನಸಂದಣಿಯ ಪ್ರದೇಶಗಳಿಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಿರುವ ಧನಂಜಯ, ಕೋವಿಡ್ ನಿಯಂತ್ರಣಕ್ಕೆ ಅಧಿಕಾರಿಗಳೊಂದಿಗೆ ವರ್ತಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಕೋರಿದ್ದಾರೆ.










