ನಾಪೋಕ್ಲು ಡಿ.25 : ಕೊಳಕೇರಿ ಗ್ರಾಮದ ಚಪ್ಪೆ೦ಡಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸಿ.ಕೆ.ತಿಮ್ಮಯ್ಯ ರಾಜ್ಯಮಟ್ಟದ ಉತ್ತಮ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಸ್ತಿ ಲಭಿಸಿದೆ.
ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ರಾಜ್ಯಮಟ್ಟದ ಮಹಾ ಸಮ್ಮೇಳನ ಮತ್ತು ರಾಜ್ಯ ಉತ್ತಮ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಶಸ್ತಿ ಪ್ರದಾನ ಮಾಡಿದರು.

ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಗ್ರೇಡ್ 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಇವರು ಸಲ್ಲಿಸಿದ ಶ್ಲಾಘನೀಯ ಸೇವೆಗಾಗಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಈ ಹಿಂದೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೂ ಇವರು ಭಾಜನರಾಗಿದ್ದರು. ಇವರ ಪತ್ನಿ ಕಸ್ತೂರಿ ತಿಮ್ಮಯ್ಯ ಕೂಡ ಮೂರ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ಉತ್ತಮ ದೈಹಿಕ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ವರದಿ : ದುಗ್ಗಳ ಸದಾನಂದ







