ಬೆಂಗಳೂರು ಡಿ.26 : ರಾಜ್ಯದ ಆಡಳಿರೂಢ ಕಾಂಗ್ರೆಸ್ ಸರ್ಕಾರದ ಚುನಾವಣಾ ಪ್ರಣಾಳಿಕೆಯ 5ನೇ ‘ಗ್ಯಾರಂಟಿ’ ಭರವಸೆ ‘ಯುವನಿಧಿ’ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದು, ನೋಂದಣಿ ಪ್ರಕ್ರಿಯೆ ಆರಂಭವಾಗಿದೆ.
ನಗರದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೊದಲು ಸಿಎಂ ಮತ್ತು ಗಣ್ಯರು, ಓರ್ವ ಯುವತಿ ಹಾಗೂ ಯುವಕನನ್ನ ವೇದಿಕೆ ಮೇಲೆ ಕರೆಸಿ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಘೋಷ ವಾಕ್ಯದಲ್ಲಿ ಕಾರ್ಯಕ್ರಮ ನಡೆಯಿತು.
ಬಳಿಕ ಸಿಎಂ ಹಾಗೂ ಡಿಸಿಎಂ ಯುವನಿಧಿ ಯೋಜನೆ ಪೋಸ್ಟರ್ ಬಿಡುಗಡೆ ಮಾಡಿದರು. ಇದೇ ವೇಳೆ ಸಿಎಂ ಅವರು ಯುವನಿಧಿ ಯೋಜನೆಯ ಲೋಗೋ ಬಿಡುಗಡೆ ಮಾಡಿದರು. ನಂತರ ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಶರಣಪ್ರಕಾಶ್ ಪಾಟೀಲ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾಗೇಂದ್ರ, ವಿಧಾನ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹ್ಮದ್ ಘನ ಉಪಸ್ಥಿತರಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ವಹಿಸಿದ್ದರು.
ಕಾರ್ಯಕ್ರಮದ ಉದ್ಘಾಟನೆ ವೇಳೆ ಮುಖ್ಯಮಂತ್ರಿಗಳಿಗೆ ಸಾಂಕೇತಿಕವಾಗಿ ಒಬ್ಬ ಯುವಕ ಮತ್ತು ಓರ್ವ ಯುವತಿ ಜತೆಯಾದರು.