ಮಡಿಕೇರಿ ಡಿ.28 : ಮುಸ್ಲಿಂ ಮಹಿಳೆಯರ ಬಗ್ಗೆ ಅಗೌರವದಿಂದ ಮಾತನಾಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕ ಮಡಿಕೇರಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಪಿ.ಎ.ಹನೀಫ್ ಮಾತನಾಡಿ ಮಂಡ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಪ್ರಭಾಕರ್ ಭಟ್ ಅವರು ಮುಸ್ಲಿಂ ಮಹಿಳೆಯರ ಕುರಿತು ಕೀಳು ಮಟ್ಟದ ಭಾಷೆ ಬಳಸಿದ್ದಾರೆ. ಇದರಿಂದ ಇಡೀ ಮಹಿಳಾ ಸಮುದಾಯಕ್ಕೆ ಅವಮಾನವಾಗಿದ್ದು, ಇವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸುವುದಾಗಿ ಅಸಮಾಧಾನ ವ್ಯಕ್ತಪಡಿಸಿದರು.
ಕಾಲೇಜು ವಿದ್ಯಾರ್ಥಿನಿಯೊಬ್ಬಳ ವಿರುದ್ಧ ಬೆದರಿಕೆಯ ಮಾತುಗಳನ್ನಾಡಿದ್ದು, ಇದು ಕೂಡ ಕಾನೂನಿಗೆ ವಿರುದ್ಧವಾಗಿದೆ. ಕೋಮು ದ್ವೇಷ ಹರಡುವುದು ಸಂವಿಧಾನ ವಿರೋಧಿ ನಡೆಯಾಗಿದೆ. ಆದ್ದರಿಂದ ಪೊಲೀಸರು ತಕ್ಷಣ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಪ್ರಭಾಕರ್ ಭಟ್ ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿದರು.
ಮನವಿ ಸಲ್ಲಿಸುವ ಸಂದರ್ಭ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಪ್ರಮುಖರಾದ ಕೆ.ಎಂ.ಸಯ್ಯದ್ ಭಾವ ಹಾಗೂ ಕೋಳುಮಂಡ ರಫೀಕ್ ಹಾಜರಿದ್ದರು.





































