ಸೋಮವಾರಪೇಟೆ ಜ.1 : ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಪಡೆದವರು ದೊಡ್ಡ ಹುದ್ದೆ ಗಳಲ್ಲಿದ್ದು, ಸರ್ಕಾರಿ ಶಾಲೆ ಎಂಬ ಕೀಳರಿಮೆ ಬೇಡ ಎಂದು ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಅಭಿಪ್ರಾಯಿಸಿದರು.
ಶಾಲಾ ಮೈದಾನದಲ್ಲಿ ಆಯೋಜಿಸಿದ್ದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳಿಗೆ ಮೌಲ್ಯಧಾರಿತ ಶಿಕ್ಷಣ ಸಿಗದಿದ್ದರೆ, ಸಮಾಜದ ಆಸ್ತಿ ಆಗುವುದಿಲ್ಲ.
ಸಮಾಜದಲ್ಲಿ ದುರಾಸೆಯಿಂದ ಹಣ ಸಂಪಾದಿಸಲು ಪ್ರಾರಂಭಿಸುತ್ತಾರೆ. ಒತ್ತಡದಿಂದ ಆರೋಗ್ಯವನ್ನು ಕಳೆದುಕೊಳ್ಳುತ್ತಾರೆ. ಸುಖ ಅನುಭವಿಸಲು ಸಾಧ್ಯವಾಗುವುದಿಲ್ಲ. ಶಿಕ್ಷಣ ಪಡೆಯುವುದರೊಂದಿಗೆ ನಮ್ಮ ಆರೋಗ್ಯವನ್ನು ಸರಿಯಾಗಿ ಇಟ್ಟುಕೊಂಡಲ್ಲಿ ಮಾತ್ರ ಉತ್ಸಾಹಭರಿತ ಜೀವನ ನಡೆಸಲು ಸಾಧ್ಯ ಎಂದರು.
ಮಕ್ಕಳಲ್ಲಿ ಕಲೆ, ಸಂಸ್ಕೃತಿ, ಆಚಾರ ವಿಚಾರಗಳನ್ನು ಬೆಳೆಸುವ ಕೆಲಸವನ್ನು ಪೋಷಕರು ಮಾಡಬೇಕು. ಶಿಕ್ಷಕರು ತಮ್ಮ ಮಕ್ಕಳಂತೆ ವಿದ್ಯಾರ್ಥಿಗಳನ್ನು ಕಾಣುವ ಮೂಲಕ ಉತ್ತಮ ಶಿಕ್ಷಣ ನೀಡಬೇಕೆಂದರು.
ಶಾಲಾ ಹಳೆಯ ವಿದ್ಯಾರ್ಥಿ ನಿವೃತ್ತ ಪ್ರಾಂಶುಪಾಲರಾದ ಧರ್ಮಪ್ಪ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಓದುತಿರುವ ಬಗ್ಗೆ ಪೋಷಕರಿಗೆ ಮತ್ತು ವಿದ್ಯಾರ್ಥಿಗಳಲ್ಲಿ ಕೀಳರಿಮೆ ಬೇಡ. ನಾನೂ ಸರ್ಕಾರಿ ಶಾಲೆಯಲ್ಲಿ ಓದಿ, ಉನ್ನತ ಸ್ಥಾನಕ್ಕೆ ತಲುಪುವುದರೊಂದಿಗೆ ಸಮಾಜ ಗುರುತಿಸುವಂತಹ ಕೆಲಸ ಮಾಡಲು ಸಾಧ್ಯವಾಗಿದೆ. ಪೋಷಕರು ಮಕ್ಕಳಿಗೆ ಮೊದಲ ಶಿಕ್ಷಕರಾಗಿ ಉನ್ನತ ಶಿಕ್ಷಣ ಪಡೆಯುವ ಮಾರ್ಗಕ್ಕೆ ಅಡಿಗಲ್ಲಾಗಬೇಕು. ವಿದ್ಯಾರ್ಥಿಗಳು ತಾವು ಕಲಿತ ಶಾಲೆಯ ಬಗ್ಗೆ ಅಭಿಮಾನ ಮೂಡಿಸಿಕೊಳ್ಳಬೇಕೆಂದರು.
ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ದಿನೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚೌಡ್ಲು ಗ್ರಾ.ಪಂ ಉಪಾಧ್ಯಕ್ಷ ನತೀಶ್ ಮಂದಣ್ಣ, ಉದ್ಯಮಿ ಅರುಣ್ ಕಾಳಪ್ಪ, ದಾನಿಗಳಾದ ಮಧುಕುಮಾರ್ ಕೂಗೂರು, ಶಾಲಾ ಮುಖ್ಯ ಶಿಕ್ಷಕಿ ಯಶೋಧ, ನಿವೃತ್ತ ಶಾಲಾ ಪದವೀಧರ ಮುಖ್ಯ ಶಿಕ್ಷಕಿ ಎಂ.ಜೆ. ಅಣ್ಣಮ್ಮ, ಪೋಷಕ ಸಮಿತಿ ಅಧ್ಯಕ್ಷೆ ಆಶಾ ಚೇತನ್ ಮತ್ತಿತರರು ಇದ್ದರು.
ಇದೇ ಸಂದರ್ಭ ಶಾಲಾ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ನಡೆದ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕೊನೆಯಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.









