ಮಡಿಕೇರಿ ಜ.3 : ಕೇಂದ್ರ ಸರ್ಕಾರದ ಜನಪರ ಕಾರ್ಯಕ್ರಮಗಳ ಕುರಿತು ಜನ ಸಾಮಾನ್ಯರಿಗೆ ಅರಿವು ಮೂಡಿಸುವ ‘ನಮ್ಮ ಸಂಕಲ್ಪ ವಿಕಸಿತ ಭಾರತ’ ಕಾರ್ಯಕ್ರಮ ನಗರದ ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಅವರು, ಸಮಾಜದ ಎಲ್ಲಾ ವರ್ಗಗಳ ಅಭ್ಯುದಯಕ್ಕೆ ಪೂರಕವಾದ ಹತ್ತು ಹಲವಾರು ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೊಳಿಸಿದ್ದಾರೆ. ಇದರ ಸದುಪಯೋಗವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕೆಂದು ಕರೆ ನೀಡಿದರು.
ಕೇಂದ್ರ ಸರ್ಕಾರ ರೈತರ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಪಿಎಂ ಕಿಸಾನ್ ಯೋಜನೆ ಮೂಲಕ ವಾರ್ಷಿಕ 6 ಸಾವಿರ ರೂ.ಗಳನ್ನು ನೇರವಾಗಿ ರೈತರ ಖಾತೆಗೆ ವರ್ಗಾಯಿಸುವ ಮಹತ್ವದ ಕಾರ್ಯ ಮಾಡಿದ್ದಾರೆ. ಆಹಾರ ಭದ್ರತೆಯನ್ನು ಖಾತ್ರಿ ಪಡಿಸುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ರಾಜ್ಯದ ಜನತೆಗೆ ಉಚಿತ ಆಹಾರ ಧಾನ್ಯವನ್ನು ವಿತರಿಸಲಾಗಿದೆ ಎಂದರು.
ಮಡಿಕೇರಿ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಮಾತನಾಡಿ, ಕೇಂದ್ರ ಸರ್ಕಾರ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣವನ್ನು ಖಾತ್ರಿ ಪಡಿಸಿದೆ. ಪ್ರಧಾನಮಂತ್ರಿ ಉಜ್ವಲ ಯೋಜನೆಯ ಮೂಲಕ ಬಿಪಿಎಲ್ ಕುಟುಂಬದ ಮಹಿಳೆಯರಿಗೆ ಉಚಿತ ಎಲ್‍ಪಿಜಿ ಅನಿಲ್ ಸಂಪರ್ಕ ಒದಗಿಸಲಾಗಿದೆ. ಮುದ್ರಾ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯವನ್ನು ಒದಗಿಸಲಾಗಿದೆ. ಹೀಗೆ ಹತ್ತು ಹಲವು ಯೋಜನೆಗಳ ಮೂಲಕ ರಾಷ್ಟ್ರದ ಅಭಿವೃದ್ಧಿಗೆ ಮೋದಿ ಸರ್ಕಾರ ಪಣ ತೊಟ್ಟಿದೆ ಎಂದು ತಿಳಿಸಿದರು.
ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಉಚಿತ ಆರೋಗ್ಯ ತಪಾಸಣೆಯೂ ನಡೆಯಿತು.









