ಮಡಿಕೇರಿ ಜ.4 : ಕೋರ್ಬಿವ್ಯಾಕ್ಸ್ ಲಸಿಕೆಯು ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ 100(ಡೋಸ್), ತಾಲ್ಲೂಕು ಆಸ್ಪತ್ರೆ, ಸೋಮವಾರಪೇಟೆ 60(ಡೋಸ್) ಮತ್ತು ಸಾರ್ವಜನಿಕ ಆಸ್ಪತ್ರೆ, ವಿರಾಜಪೇಟೆ 60(ಡೋಸ್) ಲಭ್ಯವಿದ್ದು, ಲಸಿಕೆಯನ್ನು ಉಚಿತವಾಗಿ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ.ಸತೀಶ್ ತಿಳಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ಲಸಿಕಾಕರಣವನ್ನು ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಆದರೆ ಇತ್ತೀಚೆಗೆ ಕೆಲವು ರಾಜ್ಯಗಳಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿದ್ದು, ಇನ್ನೂ ಕೋವಿಡ್-19 ಲಸಿಕೆಯ ಮುನ್ನೆಚ್ಚರಿಕೆ ಡೋಸ್ ಪಡೆಯದೆ ಉಳಿದಿರುವವರಿಗಾಗಿ ಕೊಡಗು ಜಿಲ್ಲೆಗೆ 220 ಡೋಸ್ ಕೋರ್ಬಿವ್ಯಾಕ್ಸ್ ಕೋವಿಡ್-19 ಲಸಿಕೆ ಸರಬರಾಜಾಗಿದೆ. ಮುನ್ನೆಚ್ಚರಿಕೆ ಡೋಸ್ ಆಗಿ ಬಳಸಲು ಈಗಾಗಲೇ ಆರೋಗ್ಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
60 ವರ್ಷ ಮೇಲ್ಪಟ್ಟವರು, ಕಡಿಮೆ ರೋಗ ನಿರೋಧಕ ಶಕ್ತಿ ಉಳ್ಳವರು, ಆರೋಗ್ಯ ಕಾರ್ಯಕರ್ತೆಯರು, ಮುಂಚೂಣಿ ಕಾರ್ಯಕರ್ತೆಯರು ಕೋವಿಡ್-19 ಸೋಂಕಿಗೆ ತುತ್ತಾಗುವ ಸಾಧ್ಯತೆಗಳಿದೆ. ಆದ್ದರಿಂದ ಮುನ್ನೆಚ್ಚರಿಕೆ ಡೋಸ್ ಲಸಿಕಾಕರಣಕ್ಕೆ ಬಾಕಿ ಇರುವ ಫಲಾನುಭವಿಗಳು ಕೋರ್ಬಿವ್ಯಾಕ್ಸ್ ಲಸಿಕೆಯನ್ನು ಪಡೆಯಬಹುದು.
ಅಗತ್ಯವಿರುವವರು ಮಡಿಕೇರಿಯ ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ ಸೋಮವಾರಪೇಟೆ ಮತ್ತು ವಿರಾಜಪೇಟೆಗೆ ಭೇಟಿ ನೀಡಿ ಲಸಿಕೆಯನ್ನು ಪಡೆದುಕೊಳ್ಳಬಹುದು ಎಂದು ಡಾ.ಸತೀಶ್ ತಿಳಿಸಿದ್ದಾರೆ.