ಬೆಂಗಳೂರು ಜ.4 : ಕೊಡಗು ಜಿಲ್ಲೆಯಲ್ಲಿ ಏರ್ ಸ್ಟ್ರಿಪ್ ನಿರ್ಮಾಣಕ್ಕೆ ಅಗತ್ಯವಿರುವ ಜಾಗವನ್ನ ಜಿಲ್ಲಾಡಳಿತಕ್ಕೆ ವರ್ಗಾವಣೆ ಮಾಡುವ ನಿಟ್ಟಿನಲ್ಲ ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವರು ಭರವಸೆ ನೀಡಿದ್ದಾರೆ.
ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್ ಬೊಸರಾಜು ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ವಿಸ್ತ್ರುತವಾಗಿ ಚರ್ಚೆ ನಡೆಸಲಾಯಿತು.
ಕೆಲವು ದಿನಗಳ ಹಿಂದೆ ಕೊಡಗು ಜಿಲ್ಲೆಯಲ್ಲಿ ನಡೆಸಿದ ಕೆಡಿಪಿ ಸಭೆಯಲ್ಲಿ ಕಂದಾಯ ಇಲಾಖೆಗೆ ಸಂಬಂದಿಸಿದಂತೆ ಹಲವಾರು ಸಮಸ್ಯೆಗಳ ಬಗ್ಗೆ ನನ್ನ ಗಮನ ಸೆಳೆಯಲಾಗಿತ್ತು. ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಇಂದು ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರೊಂದಿಗೆ ಇಂದು ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಜಿಲ್ಲೆಯಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ತಾಲ್ಲೂಕುಗಳಲ್ಲಿ ಮಿನಿ ವಿಧಾನಸೌಧ ಹಾಗೂ ಆಡಳಿತ ಭವನ ನಿರ್ಮಾಣಕ್ಕೆ ಅಗತ್ಯ ಅನುದಾನ ಹಾಗೂ ಅನುಮತಿಯನ್ನು ದೊರಕಿಸಿಕೊಡುವ ಬಗ್ಗೆ ಚರ್ಚಿಸಲಾಯಿತು. ಅಲ್ಲದೇ, ಕೊಡಗು ಜಿಲ್ಲೆಯಲ್ಲಿ ಏರ್ಸ್ಟ್ರೀಪ್ ನಿರ್ಮಾಣಕ್ಕೆ ಅಗತ್ಯವಿರುವ ಜಾಗವನ್ನು ಜಿಲ್ಲಾಡಳಿತಕ್ಕೆ ವರ್ಗಾವಣೆ ಮಾಡುವ ನಿಟ್ಟಿನಲ್ಲೂ ಚರ್ಚಿಸಲಾಯಿತು. ಈ ಎಲ್ಲಾ ವಿಷಯಗಳ ಬಗ್ಗೆ ಕಂದಾಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಚಿವರಾದ ಎನ್ ಎಸ್ ಬೋಸರಾಜು ತಿಳಿಸಿದರು.
ಸಭೆಯಲ್ಲಿ ಶಾಸಕರಾದ ಎ.ಎಸ್ ಪೊನ್ನಣ್ಣ ಮತ್ತು ಮಂತರ್ ಗೌಡ ಹಾಗೂ ಅಧಿಕಾರಿಗಳೂ ಉಪಸ್ಥಿತರಿದ್ದರು.