ಮಡಿಕೇರಿ ಜ.9 : ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವುದು ಅಧಿಕಾರಿ ಮತ್ತು ಸಿಬ್ಬಂದಿಗಳ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಸಾಧ್ಯವಾದಷ್ಟು ಕಾಲಮಿತಿಯಲ್ಲಿ ಸಾರ್ವಜನಿಕರಿಗೆ ಸ್ಪಂದಿಸುವುದು ಅತಿಮುಖ್ಯ ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ.
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಟಿ.ಶೆಟ್ಟಿಗೇರಿ ಗ್ರಾಮದ ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ “ಜನಸ್ಪಂದನಾ“ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಧಿಕಾರಿ ಮತ್ತು ಸಿಬ್ಬಂದಿಗಳು ಸಾರ್ವಜನಿಕರನ್ನು ಗೌರವದಿಂದ ಕಾಣಬೇಕು. ಕಚೇರಿಗೆ ಬಂದಾಗ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಡ್ವಕೇಟ್ ಜನರಲ್ ಆಗಿ 6 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ. ಸಾರ್ವಜನಿಕರ ಕೆಲಸಗಳಿಗೆ ಸ್ಪಂದಿಸಬೇಕು. ಕೆಲಸ ಆಗದಿರುವುದಕ್ಕೆ ಹಿಂಬರಹವನ್ನಾದರೂ ನೀಡಬೇಕು ಎಂದು ಎ.ಎಸ್.ಪೊನ್ನಣ್ಣ ಸಲಹೆ ಮಾಡಿದರು.
ವಿರಾಜಪೇಟೆಯ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ ಕಾರ್ಯಕ್ರಮ ಇದ್ದೇ ಇರುತ್ತದೆ. ಆ ನಿಟ್ಟಿನಲ್ಲಿ ಸಾಧ್ಯವಾದಷ್ಟು ಸಾರ್ವಜನಿಕರಿಗೆ ಸ್ಪಂದಿಸಲು ಪ್ರಯತ್ನಿಸಲಾಗುತ್ತದೆ. ಕೊಡಗು ಜಿಲ್ಲೆಗೆ ಸರ್ಕಾರದ ಹಂತದಲ್ಲಿ ಆಗಬೇಕಿರುವ ಕೆಲಸ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕಾರ್ಯರೂಪಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ನುಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜನಸ್ಪಂದನಾ ಕಾರ್ಯಕ್ರಮವನ್ನು ಆಯೋಜಿಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ವರದಿ ನೀಡುವಂತೆ ಸೂಚಿಸಿದೆ. ಆ ನಿಟ್ಟಿನಲ್ಲಿ ಸಾರ್ವಜನಿಕರ ಅಹವಾಲುಗಳನ್ನು ದಾಖಲಿಸಿಕೊಂಡು ಸಕಾಲದಲ್ಲಿ ಪರಿಹರಿಸಲು ಪ್ರಯತ್ನಿಸಲಾಗುತ್ತಿದೆ ಎಂದರು.
‘ಪ್ರಸ್ತುತ ಸರ್ಕಾರ ಜನಪರವಾಗಿದ್ದು, ಬಡವರ, ಶೋಷಿತರ ಹಾಗೂ ಅವಕಾಶ ವಂಚಿತರ ಪರವಾಗಿ ಕೆಲಸ ಮಾಡುತ್ತಿದ್ದು, ಸಾರ್ವಜನಿಕರಿಗೆ ಸ್ಪಂದಿಸುವಲ್ಲಿ ಪ್ರಥಮ ಆದ್ಯತೆ ನೀಡಲಾಗಿದೆ’ ಎಂದು ಎ.ಎಸ್.ಪೊನ್ನಣ್ಣ ಅವರು ವಿವರಿಸಿದರು.
ಗೃಹಲಕ್ಷ್ಮಿ ಯೋಜನೆಯಡಿ ಕೊಡಗು ಜಿಲ್ಲೆಯಲ್ಲಿ 1.05 ಲಕ್ಷ ಮಹಿಳೆಯರಿಗೆ ತಲಾ 2 ಸಾವಿರ ರೂ. ಅವರ ಖಾತೆಗೆ ತಲುಪುತಿದೆ. ಉಳಿದವರಿಗೆ ತಲುಪಿಸಲು ಗೃಹಲಕ್ಷ್ಮಿ ಯೋಜನೆಯ ನ್ಯೂನತೆಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ವಿಶೇಷ ಶಿಬಿರಗಳನ್ನು ಸಹ ಆಯೋಜಿಸಿ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಲಾಗಿದೆ ಎಂದರು.
ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ. ಅಕ್ಕಿಯನ್ನು ವಿತರಿಸಲಾಗುತ್ತಿದೆ. ಹಾಗೆಯೇ 5 ಕೆ.ಜಿ. ಅಕ್ಕಿ ಬದಲಾಗಿ ಹಣವನ್ನು ಕುಟುಂಬದವರ ಖಾತೆಗೆ ಜಮೆ ಮಾಡಲಾಗುತ್ತಿದೆ. ಶಕ್ತಿ ಯೋಜನೆಯಡಿ ರಾಜ್ಯದಲ್ಲಿ ಇದುವರೆಗೆ 70 ಕೋಟಿ ಮಹಿಳೆಯರು ವಿವಿಧ ಸ್ಥಳಗಳಿಗೆ ಪ್ರಯಾಣ ಮಾಡಿದ್ದಾರೆ ಎಂದರು.
ಯುವನಿಧಿ ಯೋಜನೆಯಡಿ ಹೆಸರು ನೋಂದಣಿ ಕಾರ್ಯ ನಡೆಯುತ್ತಿದೆ. ಇದೇ 12 ರಿಂದ ಯುವನಿಧಿ ಯೋಜನೆ ಜಾರಿಗೆ ಬರಲಿದೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹೇಳಿದರು.
ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ 50 ಸಾವಿರ ಕುಟುಂಬಗಳು 200 ಯೂನಿಟ್ ಒಳಗೆ ವಿದ್ಯುತ್ ಪಡೆಯುತ್ತಿರುವುದು ವಿಶೇಷವಾಗಿದೆ ಎಂದರು.
ಸರ್ಕಾರ ಜನಪರವಾಗಿ ಸ್ಪಂದಿಸುವ ನಿಟ್ಟಿನಲ್ಲಿ ಸಮಾಜದ ಎಲ್ಲಾ ವರ್ಗದ ಜನರ ಏಳಿಗೆಗಾಗಿ ಶ್ರಮಿಸುತ್ತಿದೆ. ಜನಸ್ಪಂದನಾ ಕಾರ್ಯಕ್ರಮ ಮೂಲಕ ಜನರಿಗೆ ಮತ್ತಷ್ಟು ಹತ್ತಿರವಾಗಿ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಲು ಮುಂದಾಗಲಾಗಿದೆ ಎಂದು ಪೊನ್ನಣ್ಣ ಅವರು ನುಡಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ಸಾರ್ವಜನಿಕರು ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಜನಸ್ಪಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಗ್ರಾಮಕ್ಕೆ ಆಡಳಿತವೇ ಬಂದು ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಶ್ರಮಿಸಲಾಗುತ್ತಿದೆ ಎಂದರು.
ಸಕಾಲದಲ್ಲಿ ಆಗಬೇಕಿರುವ ಕೆಲಸಗಳನ್ನು ಸಾಧ್ಯವಾದಷ್ಟು 15 ದಿನದೊಳಗೆ ಪರಿಹರಿಸಲಾಗುತ್ತದೆ. ಆಗದಿರುವ ಕೆಲಸಗಳಿಗೆ ಹಿಂಬರಹವನ್ನು ನೀಡಲಾಗುತ್ತದೆ. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಜಿಲ್ಲಾಡಳಿತ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದೆ ಎಂದರು.
ಜನಸ್ಪಂದನಾ ಕಾರ್ಯಕ್ರಮದಲ್ಲಿ 94ಸಿ ರಡಿ ಹಕ್ಕು ಪತ್ರ ಹಾಗೂ ಪಿಂಚಣಿ ಆದೇಶ ಪತ್ರವನ್ನು ಅರ್ಹರಿಗೆ ವಿತರಿಸಲಾಯಿತು.
ಟಿ.ಶೆಟ್ಟಿಗೇರಿ ಗ್ರಾಮದ ಕೊಡವ ಸಮಾಜದಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ 161 ಅರ್ಜಿಗಳು ಸಲ್ಲಿಕೆಯಾದವು. ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಸಂಬಂಧಿಸಿದಂತೆ ರಸ್ತೆ ಸರಿಪಡಿಸುವುದು, ಸೇತುವೆ ನಿರ್ಮಾಣ ಮಾಡುವುದು, ಸೆಸ್ಕ್ ವಿಭಾಗಕ್ಕೆ ಸಂಬಂಧಿಸಿದಂತೆ ವಿದ್ಯುತ್ ಪೂರೈಕೆ ಸಮರ್ಪಕವಾಗಿ ನಿರ್ವಹಣೆ ಮಾಡುವುದು, ವಿದ್ಯುತ್ ಮಾರ್ಗಗಳನ್ನು ಸರಿಪಡಿಸುವುದು. ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ ಕುಡಿಯುವ ನೀರು ಪೂರೈಕೆ ಮಾಡುವುದು, ವಸತಿ ಹಾಗೂ ಮನೆ ನಿರ್ಮಾಣಕ್ಕೆ ಒತ್ತು ನೀಡುವುದು, ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಫೌತಿಖಾತೆ ದಾಖಲು ಮಾಡುವುದು, ದುರಸ್ತಿ ಜಾಗ ಒದಗಿಸುವುದು, ಗೃಹಲಕ್ಷ್ಮಿ ಯೋಜನೆಯಡಿ ಸೌಲಭ್ಯವನ್ನು ಅರ್ಹರಿಗೆ ತಲುಪಿಸುವುದು, ಹೀಗೆ ಹಲವು ಇಲಾಖೆಗೆ ಸಂಬಂಧಿಸಿದಂತೆ ಜನಸ್ಪಂದನಾ ಸಭೆಯಲ್ಲಿ ಸಾರ್ವಜನಿಕರು ಗಮನ ಸೆಳೆದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳಿಂದ ವಸ್ತು ಪ್ರದರ್ಶನ ಮಳಿಗೆಗಳು ಗಮನ ಸೆಳೆದವು. ‘ಹೆಣ್ಣು ಮಗುವನ್ನು ರಕ್ಷಿಸಿ, ಹೆಣ್ಣು ಮಗುವನ್ನು ಓದಿಸಿ’ ಅಭಿಯಾನಕ್ಕೆ ಇದೇ ಸಂದರ್ಭದಲ್ಲಿ ಶಾಸಕರು ಚಾಲನೆ ನೀಡಿದರು.
ಟಿ.ಶೆಟ್ಟಿಗೇರಿ ಗ್ರಾ.ಪಂ.ಅಧ್ಯಕ್ಷರಾದ ಎಂ.ಎಂ.ಪಟ್ಟು, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪ ವಿಭಾಗಾಧಿಕಾರಿ ವಿನಾಯಕ್ ನರ್ವಾಡೆ, ತಹಶೀಲ್ದಾರ್ ರಾಮಚಂದ್ರ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.









