ಕುಶಾಲನಗರ ಜ.10 : ಶಿಕ್ಷಕರು ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಹಾಗೂ ಮಕ್ಕಳ ಕಲಿಕಾಮಟ್ಟವನ್ನು ಉತ್ತಮಪಡಿಸುವ ಮೂಲಕ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸಲು ಹೆಚ್ಚಿನ ಕ್ರಮ ವಹಿಸಬೇಕು ಎಂದು ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಭಾಗ್ಯಮ್ಮ ಹೇಳಿದರು.
ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಕುಶಾಲನಗರ ಜ್ಞಾನ ಭಾರತಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸುವ ಸಂಬಂಧ ಹಾಗೂ ಪ್ರೌಢಶಾಲಾ ಶೈಕ್ಷಣಿಕ ಚಟುವಟಿಕೆಗಳ ಅವಲೋಕನ ಕುರಿತು ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ತಾಲ್ಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆಯಲ್ಲಿ ಶೈಕ್ಷಣಿಕ ಮಾಹಿತಿ ನೀಡಿದರು.
ತಾಲ್ಲೂಕಿನ ಪ್ರೌಢಶಾಲೆಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಪರೀಕ್ಷೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಪ್ರೌಢಶಾಲಾ ಎಲ್ಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದ ತಮ್ಮ ಶಾಲೆಗಳು ಪ್ರಸಕ್ತ ವರ್ಷದಲ್ಲಿ ಶೇ.100 ಫಲಿತಾಂಶ ಪಡೆಯಲು ಶ್ರಮಿಸಬೇಕು ಎಂದರು.
ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳಿಗೆ ವಿಶೇಷ ಆದ್ಯತೆ ನೀಡಿ ಅವರೂ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಹೆಚ್ಚಿನ ಶ್ರಮವಹಿಸಬೇಕು ಎಂದು ಬಿಇಓ ಭಾಗ್ಯಮ್ಮ ಹೇಳಿದರು.
ವಿದ್ಯಾರ್ಥಿಗಳು 8 ಮತ್ತು 9 ನೇ ತರಗತಿಗಳಲ್ಲಿರುವಾಗಲೇ ಅವರ ಕಲಿಕೆ ಬಗ್ಗೆ ಹೆಚ್ಚಿನ ಗಮನ ಹರಿಸಿದರೆ 10 ನೇ ತರಗತಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಸುಲಭವಾಗಿ ಬರೆಯಲು ಸನ್ನದ್ಧರಾಗುತ್ತಾರೆ. ಇದರಿಂದ ಶಿಕ್ಷಕರ ಹೊರೆಯೂ ಕಡಿಮೆಯಾಗುವುದು, ವಿದ್ಯಾರ್ಥಿಗಳ ಕಲಿಕೆಯೂ ಸುಗಮವಾಗುವುದು ಎಂದು ಅವರು ಅಭಿಪ್ರಾಯಪಟ್ಟರು.
ಕಳೆದ ಸಾಲಿನಲ್ಲಿ ಶೇಕಡಾ 100 ರಷ್ಟು ಉತ್ತಮ ಫಲಿತಾಂಶ ಪಡೆದ ಶಾಲೆಗಳು ಹಾಗೂ ವಿಷಯ ಶಿಕ್ಷಕರ ಶ್ರಮದ ಬಗ್ಗೆ ಬಿಇಓ ಭಾಗ್ಯಮ್ಮ ಇದೇ ವೇಳೆ ಶ್ಲಾಘಿಸಿದರು.
ಪ್ರಸ್ತುತ ಸಾಲಿನ ಎಸ್‍ಎಸ್‍ಎಲ್‍ಸಿ ಪರಿಕ್ಷೆಯ ಫಲಿತಾಂಶವನ್ನು ಉತ್ತಮ ಪಡಿಸಲು ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಪರಸ್ಪರ ಸಮನ್ವಯತೆಯಿಂದ ತಮ್ಮ ಜವಾಬ್ದಾರಿಗಳನ್ನು ಅರಿತು ಕೆಲಸ ನಿರ್ವಹಿಸಿದರೆ ಖಂಡಿತವಾಗಿ ನಿರೀಕ್ಷಿತ ಉತ್ತಮ ಫಲಿತಾಂಶ ಗಳಿಸಲು ಸಾಧ್ಯ ಎಂದರು.
ಎಸ್‍ಎಸ್‍ಎಲ್‍ಸಿ ಫಲಿತಾಂಶವನ್ನು ಉತ್ತಮಪಡಿಸಲು ಕೈಗೊಳ್ಳಬಹುದಾದ ಶೈಕ್ಷಣಿಕ ಕ್ರಮಗಳ ಕುರಿತು ಮಾರ್ಗದರ್ಶನ ನೀಡಿದರು. ತಾವು ಶಾಲೆಗಳಿಗೆ ಭೇಟಿ ನೀಡಿದಾಗ ಗಮನಿಸಿದ ಅಂಶಗಳನ್ನು ಬಿಇಓ ವಿಶ್ಲೇಷಿಸಿದರು.
ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್ ಮಾತನಾಡಿ, ಜಿಲ್ಲೆಯಲ್ಲಿ ಪ್ರತಿವರ್ಷ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸಲು ಎಲ್ಲಾ ಪ್ರೌಢಶಾಲೆಗಳಲ್ಲಿ ಶಿಕ್ಷಕರು ಉತ್ತಮ ಶೈಕ್ಷಣಿಕ ಯೋಜನೆಗಳ ಮೂಲಕ ಹೆಚ್ಚಿನ ಕಾಳಜಿ ವಹಿಸಿದ್ದಾರೆ. ಹಾಗಾಗಿ ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಯಲ್ಲಿ ಉತ್ತಮ ಫಲಿತಾಂಶ ನಿರೀಕ್ಷಿಸಲಾಗಿದೆ ಎಂದರು.
ಜಿಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಕೋಶಾಧಿಕಾರಿ ಹ್ಯಾರಿ ಮೋರಸ್, ತಾಲ್ಲೂಕು ಮುಖ್ಯ ಶಿಕ್ಷಕರ ಸಂಘದ ಉಪಾಧ್ಯಕ್ಷೆ ಕೆ.ಇಂದಿರಾ, ನಿರ್ದೇಶಕಿ ಬಿ.ಎನ್.ಪುಷ್ಪ, ಕಾನ್ ಬೈಲ್ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಎಂ.ವಿ.ಮಂಜೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಭೆಯಲ್ಲಿ ತಾಲ್ಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರೌಢಶಾಲಾ ಮುಖ್ಯ ಶಿಕ್ಷಕರು ಇದ್ದರು.
ಇದೇ ವೇಳೆಯಲ್ಲಿ ನೂತನ ಬಿಇಓ ಎಸ್.ಭಾಗ್ಯಮ್ಮ ಹಾಗೂ ಈ ಹಿಂದೆ ಪ್ರಭಾರ ಬಿಇಓ ಆಗಿ ಸೇವೆ ಸಲ್ಲಿಸಿದ ಕಾನ್ ಬೈಲ್ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಎಂ.ವಿ.ಮಂಜೇಶ್ ಅವರನ್ನು ತಾಲ್ಲೂಕು ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಸಭೆಯಲ್ಲಿ ಹೊಸದಾಗಿ ಪ್ರೌಢಶಾಲಾ ಮುಖ್ಯ ಶಿಕ್ಷಕರಾಗಿ ನೇಮಕಗೊಂಡ ನಳಿನಿ, ರಾಜೇಶ್ವರಿ, ಹನುಮಂತಪ್ಪ ತಳವಾರ್ ಹಾಗೂ ಜಾಧವ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.
Breaking News
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*
- *ದೇಶ ದ್ರೋಹದ ಪ್ರಕರಣ ದಾಖಲಿಸಲು ಕೆ.ಜಿ.ಬೋಪಯ್ಯ ಆಗ್ರಹ*
- *ಬಿಜೆಪಿ, ಜೆಡಿಎಸ್ ಗೆ ಜನ ತಕ್ಕ ಪಾಠ ಕಲಿಸಿದ್ದಾರೆ : ಎಂ.ಎ.ಕಲೀಲ್ ಬಾಷ*
- *ಕೆವಿ ಎನ್ಸಿಸಿ ಕೆಡೆಟ್ ಗಳಿಂದ ಕಾಯ೯ಪ್ಪ ಪ್ರತಿಮೆ ಸ್ವಚ್ಛತೆ*
- *ಸೋಮವಾರಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ*