ಮಡಿಕೇರಿ ಜ.14 : ಭಾರತ ದೇಶದ ಮಹಾಗ್ರಂಥ ಎನಿಸಿಕೊಂಡಿರುವ ಡಾ.ಬಿ.ಆರ್.ಅಂಬೇಡ್ಕರ್ ರಚಿತ ಸಂವಿಧಾನವನ್ನು ಪಠ್ಯದಲ್ಲಿ ಅಳವಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಬೇಕು ಎಂದು ಕೆಪಿಸಿಸಿ ವಕ್ತಾರ ಹಾಗೂ ಸಮಾಜ ಸೇವಕ ಸಂಕೇತ್ ಪೂವಯ್ಯ ತಿಳಿಸಿದ್ದಾರೆ.
ಪೊನ್ನಂಪೇಟೆಯ ಕೆಪಿಎಸ್ ಶಾಲೆಯ ಸಭಾಂಗಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನಡೆದ 10ನೇ ತರಗತಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳು ಹಾಗೂ ಶ್ರಮಿಸಿದ ಶಿಕ್ಷಕರು, ಉಪನ್ಯಾಸಕರ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನವನ್ನು ಸರಳವಾಗಿ, ಅರ್ಥವಾಗುವ ರೀತಿಯಲ್ಲಿ ಪಠ್ಯ ಪುಸ್ತಕಗಳಲ್ಲಿ ಅಳವಡಿಸಿಕೊಳ್ಳಬೇಕು. ಇದಕ್ಕೆ ಕೇಂದ್ರ ಹಾಗೂ ರಾಜ್ಯದ ಶಿಕ್ಷಣ ಮಂತ್ರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಂಕೇತ್ ಪೊವಯ್ಯ ಹೇಳಿದರು.
ಸಂವಿಧಾನದಲ್ಲಿರುವ ಅಂಶಗಳು ಅನುಷ್ಠಾನಗೊಳ್ಳಬೇಕು, ಪ್ರತಿಯೊಬ್ಬರು ಸಂವಿಧಾನವನ್ನು ಪ್ರೀತಿಸಿ ಗೌರವಿಸಬೇಕು. ಡಾ.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಾಗಿ ಇಂದು ಇಡೀ ವಿಶ್ವದಲ್ಲಿ ನಮ್ಮ ದೇಶವನ್ನು ಗೌರವದಿಂದ ಕಾಣಲು ಸಾಧ್ಯವಾಗಿದೆ. ಬಡತನದ ನಿರ್ಮೂಲನೆ, ಯುವ ಸಮೂಹಕ್ಕೆ ಉದ್ಯೋಗಾವಕಾಶ, ಸಮಾನತೆ ಇವೆಲ್ಲವೂ ಸಂವಿಧಾನದಿಂದ ನಮಗೆ ದೊರಕಿದೆ ಎಂದರು.
ಇಂದು ಧರ್ಮವನ್ನು ಮುಂದೆ ತಂದು ಸಂವಿಧಾನವನ್ನು ಹಿಂದೆ ತಳ್ಳುವ ವಾತಾವರಣ ಸೃಷ್ಟಿಯಾಗಿದೆ. ಧರ್ಮ ಮುಖ್ಯ, ನಂತರ ರಾಷ್ಟ್ರ ಎನ್ನುವ ಭಾವನೆಯನ್ನು ಮೂಡಿಸಲಾಗುತ್ತಿದೆ ಎಂದು ಸಂಕೇತ್ ಪೂವಯ್ಯ ಬೇಸರ ವ್ಯಕ್ತಪಡಿಸಿದರು.
ಉತ್ತಮ ಸಮಾಜ ನಿರ್ಮಾಣವಾಗಬೇಕಾದರೆ ಅದು ಶಿಕ್ಷಣದಿಂದ ಮಾತ್ರ ಸಾಧ್ಯ. ಶಿಕ್ಷಣಕ್ಕೆ ಆದ್ಯತೆ ನೀಡಬೇಕೆನ್ನುವ ಉದ್ದೇಶದಿಂದ ದಲಿತ ಸಂಘರ್ಷ ಸಮಿತಿ ಸನ್ಮಾನಿಸಿ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯವೆಂದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರೀತಿ ಚಿಕ್ಕಮಾದು ಸಂಘಟನೆಗಳು ಜನಪರವಾಗಿ ಕಾರ್ಯನಿರ್ವಹಿಸಬೇಕು ಮತ್ತು ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು.
ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಮಾತನಾಡಿ ಕಳೆದ 35 ವರ್ಷಗಳಿಂದ ಪರಿಶಿಷ್ಟ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ ಪ್ರೋತ್ಸಾಹಿಸಲಾಗುತ್ತಿತ್ತು. ಕಳೆದ 3 ವರ್ಷಗಳಿಂದ ಎಲ್ಲಾ ವರ್ಗದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುತ್ತಿದೆ ಎಂದರು.
ಮಡಿಕೇರಿ ನಗರದ ಮೂರು ಶಾಲೆಗಳಿಗೆ ಪುಸ್ತಕ ಹಾಗೂ ಶ್ರೀ ಶಕ್ತಿ ವೃದ್ಧಾಶ್ರಮಕ್ಕೆ ಬಟ್ಟೆಯನ್ನು ಪ್ರತಿವರ್ಷ ವಿತರಿಸಲಾಗುತ್ತಿದೆ. ರಕ್ತದಾನ ಶಿಬಿರ, ಸಮಾಜ ಸೇವೆ, ಜನಪರ ಕಾಳಜಿ ತೋರಲಾಗುತ್ತಿದೆ. ಡಾ.ಅಂಬೇಡ್ಕರ್ ಅವರು ನೀಡಿದ ಮಾರ್ಗದರ್ಶನದಂತೆ ಸರ್ವರಿಗೂ ಸಮಾನ ಸೇವೆಗಳನ್ನು ನೀಡಲಾಗುತ್ತಿದೆ ಎಂದು ದಿವಾಕರ್ ತಿಳಿಸಿದರು.
ಕಾರ್ಯಕ್ರಮದಲ್ಲಿ 26 ಶಿಕ್ಷಕರು, 12 ಉಪನ್ಯಾಸಕರು ಹಾಗೂ ಅತಿ ಹೆಚ್ಚು ಅಂಕ ಗಳಿಸಿದ 9 ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಕವಿತಾ ಪಿ.ಪಿ, ಪದವಿಪೂರ್ವ ಕಾಲೇಜು ಪ್ರಾಂಶುಪಾಲ ರಮೇಶ್, ಪ್ರೌಢಶಾಲೆ ಮುಖ್ಯೋಪಾಧ್ಯಾಯ ಚಂಗಪ್ಪ, ದಲಿತ ಸಂಘರ್ಷ ಸಮಿತಿಯ ಮಡಿಕೇರಿ ನಗರ ಸಂಚಾಲಕ ಸಿದ್ದೇಶ್ವರ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*