ಮಡಿಕೇರಿ ಜ.15 : ಗ್ರಾಮ ಪಂಚಾಯ್ತಿ ನೌಕರರಿಗೆ ಕನಿಷ್ಟ ವೇತನ ನಿಗಧಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜ.24 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾ.ಪಂ ನೌಕರರ ಸಂಘದ ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷ ಪಿ.ಆರ್.ಭರತ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಸೇರಿದಂತೆ ಶಾಸಕರಿಗೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಗ್ರಾಮ ಪಂಚಾಯ್ತಿಗಳಲ್ಲಿ ಕಾರ್ಯನಿರ್ವಹಿಸುವ ನೌಕರರಿಗೆ 31 ಸಾವಿರ ರೂ.ಗಳನ್ನು ಕನಿಷ್ಟ ವೇತನವಾಗಿ ನಿಗದಿಪಡಿಸಬೇಕೆನ್ನುವುದು ತಮ್ಮ ಪ್ರಮುಖ ಬೇಡಿಕೆಯಾಗಿದೆ. ಇದರೊಂದಿಗೆ ನಿವೃತ್ತ ಪಂಚಾಯ್ತಿ ನೌಕರರ ಬದುಕಿಗೆ ಆರ್ಥಿಕ ಸ್ಥಿರತೆ ನೀಡಲು 6 ಸಾವಿರ ರೂ. ಪಿಂಚಣಿ ನೀಡಬೇಕು. ಅನಾರೋಗ್ಯಕ್ಕೆ ಒಳಗಾದ ನೌಕರರಿಗೆ ಆಸ್ಪತ್ರೆ ವೆಚ್ಚವನ್ನು ಭರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಪಂಚಾಯ್ತಿಗಳಿಗೆ ನೌಕರರನ್ನು ಗುತ್ತಿಗೆ ಮತ್ತು ಹೊರ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡುವ ಪದ್ಧತಿಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.
2023ರ ನ.18 ರಂದು ಸರ್ಕಾರ ಆದೇಶವೊಂದನ್ನು ಹೊರಡಿಸಿ, 11,170 ಪಂಚಾಯ್ತಿ ನೌಕರರನ್ನು ಅನುಮೋದನೆಗೊಳಿಸಬೇಕೆಂದು ತಿಳಿಸಿತ್ತು. ಆದರೆ ಕೊಡಗು ಜಿಲ್ಲೆಯ ಗ್ರಾಮ ಪಂಚಾಯ್ತಿಗಳಲ್ಲಿ ಈ ಆದೇಶ ಕಾರ್ಯರೂಪಕ್ಕೆ ಬಂದಿಲ್ಲ. ತಕ್ಷಣ ಈ ಆದೇಶವನ್ನು ಜಾರಿ ಮಾಡಬೇಕೆಂದು ಆಗ್ರಹಿಸಿದರು.
ಪಂಚಾಯ್ತಿಗಳಲ್ಲಿ ಅನುಮೋದನೆಗೊಳ್ಳದೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ಮೃತಪಟ್ಟರೆ ಅವರ ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡುವ ಅವಕಾಶವನ್ನು ರದ್ದುಗೊಳಿಸಲಾಗಿತ್ತು. ಆದರೆ, ಸರ್ಕಾರ ಕಳೆದ ಸಾಲಿನಲ್ಲಿ ಮತ್ತೆ ಇದಕ್ಕೆ ಅವಕಾಶ ನೀಡಿ ಆದೇಶವನ್ನು ನೀಡಿದ್ದು, ತಕ್ಷಣವೇ ಇದನ್ನು ಜಾರಿಗೊಳಿಸಬೇಕು. ಹಲವು ಗ್ರಾಮ ಪಂಚಾಯ್ತಿಗಳಲ್ಲಿ ಕಾರ್ಮಿಕರ ವೇತನವನ್ನು ತಿಂಗಳುಗಟ್ಟಲೆ ನೀಡದೆ ಬಾಕಿ ಉಳಿಸಿಕೊಂಡಿದ್ದು, ತಕ್ಷಣ ವೇತನ ನೀಡಬೇಕೆಂದು ಒತ್ತಾಯಿಸಿದ ಭರತ್, ಜಿಲ್ಲೆಯ ಪಂಚಾಯ್ತಿಗಳಲ್ಲಿ ಖಾಲಿ ಇರುವ 215 ವಿವಿಧ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಬೇಕೆಂದರು.
ಜನರ ನಿತ್ಯೋಪಯೋಗಿ ವಸ್ತುಗಳ ಬೆಲೆ ಗಗನ ಮುಖಿಯಾಗಿದ್ದು, ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು, ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂದಕ್ಕೆ ಪಡೆಯಬೇಕು, ಎಲ್ಲಾ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆಯನ್ನು ಜಾರಿ ಮಾಡಬೇಕೆನ್ನುವ ಬೇಡಿಕೆಗಳನ್ನು ಧರಣಿ ಸತ್ಯಾಗ್ರಹ ಸಂದರ್ಭ ಸರ್ಕಾರದ ಮುಂದಿಡುವುದಾಗಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿ ಖಜಾಂಚಿ ಎಂ.ಕೆ.ವಸಂತ, ಜಿಲ್ಲಾ ಸಮಿತಿ ಸದಸ್ಯರಾದ ಪಿ.ರಂಗಸ್ವಾಮಿ ಹಾಗೂ ಹೆಚ್.ಎಂ.ದಿನೇಶ್ ಉಪಸ್ಥಿತರಿದ್ದರು.