ಮಡಿಕೇರಿ ಜ.19 : ಕೊಡಗು ಜಿಲ್ಲಾ ದಲಿತ ಸಂಘರ್ಷ ಸಮಿತಿ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜ.25 ರಂದು ವಿರಾಜಪೇಟೆಯಲ್ಲಿ “ಕರ್ನಾಟಕ ದಲಿತ ರತ್ನ ಪ್ರಶಸ್ತಿ” ಪ್ರದಾನ ಮಾಡಲಾಗುವುದು ಎಂದು ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಜಪೇಟೆ ನಗರದ ಸೆಂಟ್ ಆನ್ಸ್ ಕಾಲೇಜು ಮೈದಾನದಲ್ಲಿ ಬೆಳಿಗ್ಗೆ 10.30 ಗಂಟೆಗೆ ವಿರಾಜಪೇಟೆ ಕ್ಷೇತ್ರದ ಶಾಸಕರು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದರು.
ಹುಟ್ಟು ಹೋರಾಟಗಾರರಾಗಿ ಬಡವರ ನೋವಿಗೆ ಸ್ಪಂದಿಸುವ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಜನಪರ ಮತ್ತು ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಪ್ರಶಸ್ತಿ ನೀಡಲಾಗುತ್ತಿದೆ ಎಂದು ದಿವಾಕರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಸಂಚಾಲಕ ಹೆಚ್.ಬಿ.ಸಂತೋಷ್ ಹಾಗೂ ಮಡಿಕೇರಿ ನಗರ ಸಂಚಾಲಕ ಲೋಕನಾಥ್ ಉಪಸ್ಥಿತರಿದ್ದರು.




















