ಮಡಿಕೇರಿ ಜ.23 NEWS DESK : ಕನಿಷ್ಟ ವೇತನ ಮತ್ತು ಪಿಂಚಣಿ ಸೌಲಭ್ಯ ಕಲ್ಪಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕೊಡಗು ಜಿಲ್ಲಾ ಅಂಗನವಾಡಿ ನೌಕರರ ಸಂಘ ಸಿಐಟಿಯು ನೇತೃತ್ವದಲ್ಲಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ, ಘೋಷಣೆಗಳನ್ನು ಕೂಗಿದರು.
ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಪ್ರಸ್ತುತ ಮಾಸಿಕ 11,500 ರೂ. ಗೌರವ ಧನವನ್ನಷ್ಟೆ ಪಡೆಯುತ್ತಿದ್ದಾರೆ. 2017ರ ಬಳಿಕ ಗೌರವ ಧನ ಹೆಚ್ಚಳವಾಗಿಲ್ಲ. ಬೆಲೆ ಏರಿಕೆಯ ಈ ದಿನಗಳಲ್ಲಿ ಕನಿಷ್ಟ 31 ಸಾವಿರ ವೇತನವನ್ನು ನೀಡಬೇಕೆಂದು ಒತ್ತಾಯಿಸಿದರಲ್ಲದೆ, ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗುವವರಿಗೆ ಕನಿಷ್ಟ 10 ಸಾವಿರ ಪಿಂಚಣಿ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿದರು.
ಸಮಿತಿಯ ಜಿಲ್ಲಾಧ್ಯಕ್ಷ ಪಿ.ಆರ್.ಭರತ್, ಜಿಲ್ಲಾ ಪ್ರಧನಾ ಕಾರ್ಯದರ್ಶಿ ಎ.ಸಿ.ಸಾಬು, ಪೊನ್ನಂಪೇಟೆ ತಾಲ್ಲೂಕು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ವಿ.ಎಸ್.ಸುಮಿತ್ರ, ಮಡಿಕೇರಿ ತಾಲ್ಲೂಕು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷರಾದ ಬಿ.ಎಸ್.ಸರೋಜ, ಸೋಮವಾರಪೇಟೆ ತಾಲ್ಲೂಕು ಅಂಗನವಾಡಿ ನೌಕರರ ಸಂಘದ ಖಜಾಂಚಿ ಎಂ.ಬಿ.ಜಮುನ, ವಿರಾಜಪೇಟೆ ತಾಲ್ಲೂಕು ಅಂಗನವಾಡಿ ನೌಕರರ ಸಂಘದ ಕಾರ್ಯದರ್ಶಿ ಎಂ.ಬಿ.ಲೀಲಾವತಿ, ಪೊನ್ನಂಪೇಟೆ ತಾಲ್ಲೂಕು ಸಂಘದ ಕಾರ್ಯದರ್ಶಿ ಬಿ.ಸಿ.ಲಲಿತಾಕ್ಷಿ ಹಾಗೂ ವಿರಾಜಪೇಟೆ ತಾಲ್ಲೂಕು ಅಧ್ಯಕ್ಷೆ ಎ.ವಿ.ಶೀಲಾ ಸೇರಿದಂತೆ ಜಿಲ್ಲಾ ವ್ಯಾಪ್ತಿಯಲ್ಲಿರುವ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತರು ಕಾರ್ಯಸ್ಥಗಿತಗೊಳಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.