ಮಡಿಕೇರಿ ಜ.23 NEWS DESK : ಮಡಿಕೇರಿ ಜ.23 : ‘ಭಾರತ್ ಜೋಡೋ ನ್ಯಾಯ ಯಾತ್ರೆ’ಯ ಸಂದರ್ಭ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮೇಲೆ ಬಿಜೆಪಿ ಕರ್ಯಕರ್ತರು ದಾಳಿಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ, ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.
ಜಿಲ್ಲಾ ಕಾಂಗ್ರೆಸ್ ಹಾಗೂ ಮಡಿಕೇರಿ ನಗರ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಯಕರ್ತರು ಮಂಗಳವಾರ ಬೆಳಗ್ಗೆ ಇಂದಿರಾಗಾಂಧಿ ವೃತ್ತದಲ್ಲಿ ಸಮಾವೇಶಗೊಂಡು, ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಇಡೀ ರಾಷ್ಟ್ರವನ್ನು ಸೌಹಾರ್ದತೆಯಿಂದ ಬೆಸೆಯುವ ಚಿಂತನೆಯಡಿ ರಾಹುಲ್ ಗಾಂಧಿಯವರು ಭಾರತ್ ಜೋಡೋ ನ್ಯಾಯ ಯಾತ್ರೆಯನ್ನು ನಡೆಸುತ್ತಿದ್ದಾರೆ. ಈ ಸಂದರ್ಭ ಅಸ್ಸಾಂನಲ್ಲಿ ರಾಹುಲ್ ಗಾಂಧಿ ಅವರಿದ್ದ ವಾಹನವನ್ನು ತಡೆಗಟ್ಟಿ ದಾಳಿ ನಡೆಸುವ ಪ್ರಯತ್ನವನ್ನು ಬಿಜೆಪಿ ಕಾರ್ಯಕರ್ತರು ಮಾಡಿದ್ದಾರೆ. ಇದನ್ನು ತೀವ್ರವಾಗಿ ಖಂಡಿಸುವುದಾಗಿ ಪ್ರತಿಭಟನಾಕಾರರು ತಿಳಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಗೌರವ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ಉಪಾಧ್ಯಕ್ಷ ಸುಜು ತಿಮ್ಮಯ್ಯ, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಆರ್.ಪಿ. ಚಂದ್ರಶೇಖರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ, ಮಡಿಕೇರಿ ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್, ಮಡಿಕೇರಿ ನಗರಸಭಾ ಮಾಜಿ ಅಧ್ಯಕ್ಷೆ ಶ್ರೀಮತಿ ಬಂಗೇರ, ಜಿಲ್ಲಾ ಕಾಂಗ್ರೆಸ್ ಸೇವಾ ದಳದ ಅಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ಮೂಡ ಮಾಜಿ ಅಧ್ಯಕ್ಷ ಎ.ಸಿ.ಚುಮ್ಮಿ ದೇವಯ್ಯ, ನಗರ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಯು.ಅಬ್ದುಲ್ ರಜಾಕ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.









