ಮಡಿಕೇರಿ ಫೆ.8 NEWS DESK : ಸುಂಟಿಕೊಪ್ಪ ಪಟ್ಟಣ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸುಂಟಿಕೊಪ್ಪದ ಗದ್ದೆಹಳ್ಳ ನಿವಾಸಿ ವಿಜಯ.ಜೆ (28) ಹಾಗೂ ಪಿರಿಯಾಪಟ್ಟಣ ತಾಲ್ಲೂಕು ಕೊಪ್ಪ ಗ್ರಾಮದ ನಿವಾಸಿ ಶ್ರೀಧರ (34) ಎಂಬುವವರನ್ನು 1 ಕೆಜಿ 450ಗ್ರಾಂ ಗಾಂಜಾ ಸಹಿತ ವಶಕ್ಕೆ ಪಡೆಯಲಾಗಿದೆ.
ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್‌ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ವೃತ್ತದ ಸಿಪಿಐ ರಾಜೇಶ್.ಕೆ, ಸುಂಟಿಕೊಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ಶ್ರೀಧರ್.ಎಂ.ಸಿ ಹಾಗೂ ಸಿಬ್ಬಂದಿಗಳ ವಿಶೇಷ ತಂಡ ಸುಂಟಿಕೊಪ್ಪದ ಎಮ್ಮೆಗುಂಡಿ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆಯಿತು.
ಪೊಲೀಸ್ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ. ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡು ಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ. ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗ ಪಡಿಸುವುದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.










