ಮಡಿಕೇರಿ ಫೆ.14 NEWS DESK : ಹಿಂದಿನ ಶಾಸಕರುಗಳು ಮಾಡಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಈಗಾಗಲೇ ಶ್ವೇತಪತ್ರ ಹೊರಡಿಸಲಾಗಿದೆ. ಈಗಿನ ಕಾಂಗ್ರೆಸ್ ಶಾಸಕರುಗಳು ಇಲ್ಲಿಯವರೆಗೆ ಯಾವ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂದು ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಜನಪರವಾಗಿ ಪ್ರಶ್ನೆ ಮಾಡುವುದು ತಪ್ಪೇ ಎಂದು ಕೊಡಗು ಜಿಲ್ಲಾ ಬಿಜೆಪಿ ಪ್ರಶ್ನಿಸಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ವಕ್ತಾರರಾದ ಟಿ.ಎ.ಕಿಶೋರ್ ಕುಮಾರ್, ಸುಬ್ರಹ್ಮಣ್ಯ ಉಪಾಧ್ಯಾಯ, ಬಿ.ಕೆ.ಅರುಣ್ ಕುಮಾರ್ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಅವರುಗಳು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ವರ್ಷವಾಗುತ್ತಿದ್ದರೂ, ಕೊಡಗಿನಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಹಿಂದಿನ ಬಿಜೆಪಿ ಶಾಸಕರುಗಳು ಮಂಜೂರು ಮಾಡಿಸಿರುವ ಅಭಿವೃದ್ಧಿ ಕೆಲಸಗಳಿಗೆ ಭೂಮಿಪೂಜೆ ಮಾಡುವುದು, ಒಂದೇ ರಸ್ತೆಯನ್ನು ಎರಡೆರಡು ಬಾರಿ ಉದ್ಘಾಟನೆ ಮಾಡುತ್ತಿರುವುದು ಮಾತ್ರ ಕಂಡು ಬರುತ್ತಿದೆ ಎಂದು ಟೀಕಿಸಿದರು.
ಕೊಡಗಿನ ಹಾಲಿ ಶಾಸಕರು ಕೇವಲ ಕಾಂಗ್ರೆಸ್’ನ ಶಾಸಕರಲ್ಲ, ಅವರು ಎಲ್ಲಾ ಜನರಿಗೂ ಶಾಸಕರು. ಆದ್ದರಿಂದ ಅವರನ್ನು ಪ್ರಶ್ನಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ವಿಧಾನ ಪರಿಷತ್ತಿನ ಸದಸ್ಯರಂತಹ ಜವಾಬ್ದಾರಿ ಸ್ಥಾನದಲ್ಲಿದ್ದ ವೀಣಾ ಅಚ್ಚಯ್ಯ ಅವರು ಇದನ್ನು ಅರ್ಥ ಮಾಡಿಕೊಳ್ಳದಿರುವುದು ಕಾಂಗ್ರೆಸ್’ನ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ ಬಿಜೆಪಿ ವಕ್ತಾರರು ಲೇವಡಿ ಮಾಡಿದರು.
ಬಿಜೆಪಿ ಎಂದೂ ದ್ವೇಷದ ರಾಜಕೀಯ ಮಾಡುವುದಿಲ್ಲ, ನಮ್ಮದು ನುಡಿದಂತೆ ನಡೆಯುವ ಪಕ್ಷವಾಗಿದ್ದು, ಅಭಿವೃದ್ಧಿಯ ಬಗ್ಗೆ ಪ್ರಶ್ನೆ ಮಾಡಿದರೆ ವೀಣಾ ಅಚ್ಚಯ್ಯ ಅವರಿಗೆ ನೋವಾಗುವುದು ಯಾಕೆ ಎಂದು ಪ್ರಶ್ನಿಸಿದರು.
ಜಿಲ್ಲೆಯಲ್ಲಿ ಬಿಜೆಪಿ ಶಾಸಕರ ಅವಧಿಯಲ್ಲಿ ಏನೆಲ್ಲ ಅಭಿವೃದ್ಧಿ ಕೆಲಸಗಳಾಗಿದೆ ಎಂಬುದು ಆ ಸಂದರ್ಭ ವಿಧಾನ ಪರಿಷತ್ ಸದಸ್ಯರಾಗಿದ್ದ ವೀಣಾ ಅಚ್ಚಯ್ಯ ಅವರಿಗೂ ಚೆನ್ನಾಗಿ ತಿಳಿದಿದೆ. ಆದರೆ ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಕಾಂಗ್ರೆಸ್ಸಿಗರು ಬಿಜೆಪಿ ಬಗ್ಗೆ ಅಪಪ್ರಚಾರದಲ್ಲಿ ತೊಡಗಿದ್ದಾರೆ, ಸುಳ್ಳು ಹೇಳಿ ಮತಗಳಿಸುವ ಭ್ರಮೆ ಬೇಡ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಪ್ರತಾಪ್ ಸಿಂಹ ಅವರು ಬೆಂಗಳೂರು-ಮೈಸೂರು, ಮೈಸೂರು- ಕುಶಾಲನಗರ ಚತುಷ್ಪಥ ರಸ್ತೆ, ಮಡಿಕೇರಿ-ಸಂಪಾಜೆ ಹೆದ್ದಾರಿ ಅಭಿವೃದ್ಧಿಯಾಗಿದೆ. ಜಿಲ್ಲೆಯ ಹಲವಾರು ಸಹಕಾರ ಸಂಘಗಳ ಅಭಿವೃದ್ಧಿ, ಶಾಲಾ ಸಭಾಂಗಣಗಳು, ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ, ಸಮುದಾಯ ಭವನಗಳಿಗೆ, ದೇವಾಲಯಗಳ ಜೀರ್ಣೋದ್ಧಾರಕ್ಕೆ ಸಂಸದರು ಸಾಕಷ್ಟು ಅನುದಾನ ನೀಡಿದ್ದಾರೆ. ಇದು ವೀಣಾ ಅಚ್ಚಯ್ಯ ಅವರಿಗೆ ತಿಳಿದಿಲ್ಲವೇ ಎಂದು ಪ್ರಶ್ನಿಸಿದ ಅವರುಗಳು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಒಪ್ಪಿಕೊಂಡಿರುವ ಮತದಾರರು ಬಿಜೆಪಿ ಪರ ಇರುವುದನ್ನು ಸಹಿಸದೆ ಕಾಂಗ್ರೆಸ್ಸಿಗರು ಹತಾಶರಾಗಿದ್ದಾರೆ ಎಂದು ಆರೋಪಿಸಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಯಾರೇ ಬಿಜೆಪಿ ಅಭ್ಯರ್ಥಿಯಾದರೂ ಅವರು ಪ್ರಚಂಡ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ. ಅಲ್ಲದೆ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಮಂತ್ರಿಯಾಗಲಿದ್ದಾರೆ. ಇದೇ ಕಾರಣಕ್ಕೆ ಕಾಂಗ್ರೆಸ್ಸಿಗರು ಬಿಜೆಪಿ ಬಗ್ಗೆ ಅಪಪ್ರಚಾರದಲ್ಲಿ ತೊಡಗಿದ್ದು, ಇದನ್ನು ಅವರು ತಕ್ಷಣ ನಿಲ್ಲಿಸಬೇಕು. ಇಲ್ಲವಾದಲ್ಲಿ ಜವಾಬ್ದಾರಿಯುತ ವಿರೋಧ ಪಕ್ಷವಾಗಿರುವ ಬಿಜೆಪಿ ಇದಕ್ಕಿಂತಲೂ ಖಾರವಾಗಿ ಪ್ರಶ್ನಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ಕಾರ್ಯದರ್ಶಿ ಪ್ರಶಾಂತ್ ಹಾಗೂ ಮಡಿಕೇರಿ ನಗರ ಮಂಡಲ ಅಧ್ಯಕ್ಷ ಉಮೇಶ್ ಸುಬ್ರಮಣಿ ಉಪಸ್ಥಿತರಿದ್ದರು.
Breaking News
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*