ಮಡಿಕೇರಿ ಫೆ.16 NEWS DESK : ಯುವತಿಯೊಬ್ಬಳನ್ನು ಅತ್ಯಾಚಾರ ಮಾಡಿದ ಆರೋಪದಡಿ ಅರಣ್ಯ ಇಲಾಖೆಯ ಚಾಲಕನೊಬ್ಬನನ್ನು ಕುಟ್ಟ ಪೊಲೀಸರು ಬಂಧಿಸಿದ್ದಾರೆ.
ಕೆ.ಬಾಡಗ ಗ್ರಾಮದ ನಾಣಚ್ಚಿ ನಿವಾಸಿ ಶ್ರೀಕಾಂತ್ (31) ಬಂಧಿತ ಆರೋಪಿಯಾಗಿದ್ದಾನೆ.
ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಬಾಡಗ ಗ್ರಾಮದ ತೋಟದ ಲೈನುಮನೆಯಲ್ಲಿ ವಾಸವಿರುವ ಪಂಜರಿ ಎರವರ ದಂಪತಿಯ 17 ವರ್ಷದ ಪುತ್ರಿ ಇದೇ ಫೆ.12 ರಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಳು. ಫೆ.2 ರಂದು ಶ್ರೀಕಾಂತ್ ಯುವತಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ ಪರಿಣಾಮ ಆಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನುವ ಆರೋಪದಡಿ ಕುಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಘಟನೆ ಸ್ಥಳಕ್ಕೆ ಕುಟ್ಟ ಪೊಲೀಸ್ ಠಾಣೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಕೃತ್ಯಕ್ಕೆ ಸಂಬಂಧಿಸಿದ ಮಾಹಿತಿ ಮತ್ತು ಸಾಕ್ಷ್ಯಾಧಾರಗಳನ್ನು ಕಲೆಹಾಕಿ ಆರೋಪಿಯನ್ನು ಪತ್ತೆ ಹಚ್ಚಲು ವಿಶೇಷ ತಂಡ ರಚಿಸಿದರು. ವಿರಾಜಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ಮೋಹನ್ ಕುಮಾರ್, ಕುಟ್ಟ ಪೊಲೀಸ್ ಠಾಣೆಯ ಪಿಎಸ್‌ಐ ಇರ್ಶಾದ್.ಸಿ ಹಾಗೂ ಸಿಬ್ಬಂದಿಗಳ ತಂಡ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.










