ಮಡಿಕೇರಿ ಫೆ.17 NEWS DESK : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ವತಿಯಿಂದ ಕುಶಾಲನಗರದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು.
ತಾಲೂಕು ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
ಅಲ್ಲದೆ ಸರ್ಕಾರಗಳು ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ದುಡಿಯುವ ಜನರ ಶೋಷಣೆ ತಪ್ಪಿಸಲು, ಉದ್ಯೋಗ ಸೃಷ್ಟಿಸಲು, ಅಗತ್ಯ ವಸ್ತುಗಳ ಬೆಲೆ ಇಳಿಸಲು ಕ್ರಮ ಕೈಗೊಳ್ಳಬೇಕು, ಬಡವರಿಗೆ ಬದುಕಲು ಅವಕಾಶ ನೀಡುವ ನೀತಿಗಳನ್ನು ಜಾರಿಗೆ ತರಬೇಕು, ರೈಲ್ವೆ, ವಿದ್ಯುತ್ ಒಳಗೊಂಡ ಎಲ್ಲಾ ಸಾರ್ವಜನಿಕ ಕ್ಷೇತ್ರಗಳ ಖಾಸಗೀಕರಣವನ್ನು ಕೈಬಿಡಬೇಕು, ಸಾರ್ವಜನಿಕ ರಂಗದ ಕೈಗಾರಿಕೆ ಹಾಗೂ ಸೇವೆಗಳನ್ನು ಬಲಪಡಿಸಬೇಕು, ಡಾ.ಸ್ವಾಮಿನಾಥನ್ ಶಿಫಾರಸ್ಸಿನಂತೆ ಕನಿಷ್ಟ ಬೆಂಬಲ ಬೆಲೆಗೆ ಕಾನೂನು ರಚಿಸಬೇಕು, ಕೃಷಿ ಕಾರ್ಮಿಕರಿಗೆ ಸಮಗ್ರವಾದ ಕಲ್ಯಾಣ ಯೋಜನೆಗಳನ್ನು ರೂಪಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು.
ಈ ಸಂದರ್ಭ ಮಾತನಾಡಿದ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಕುಮಾರ್, ರೈತರ ಪ್ರತಿಭಟನೆಗೆ ಕೇಂದ್ರ ಸರ್ಕಾರ ಅವಕಾಶ ನೀಡುತ್ತಿಲ್ಲ. ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಜನರು ದಂಗೆ ಏಳಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.
ಅಂಗನವಾಡಿ ನೌಕಕರಾದ ಸಾವಿತ್ರಿ, ನೌಕರರಾದ ಚಾಮುಂಡಿ, ಗ್ರಾಪಂ ನೌಕರರಿಂದ ದಿನೇಶ್ ಮತ್ತು ಅನಿಲ್, ತೋಟ ಕಾರ್ಮಿಕರ ಸಂಘಟನೆಯಿಂದ ಪಟ್ಟು ಹಾಗೂ ಸಂಘಟನೆಯ ಸದಸ್ಯರು ಇದ್ದರು.
ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶಿರಸ್ತೆದಾರರ ಮೂಲಕ ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.