ಮಡಿಕೇರಿ ಫೆ.19 NEWS DESK : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಯ ಗ್ರಾಮವೊಂದರಲ್ಲಿ ಅಪ್ರಾಪ್ತ ಯುವತಿಯ ಮೇಲೆ ಅತ್ಯಾಚಾರವೆಸಗಿ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಸಿಐಡಿ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ದಲಿತರಿಗೆ ರಕ್ಷಣೆ ನೀಡುವಲ್ಲಿ ವಿಫಲರಾಗಿರುವ ರಾಜ್ಯ ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಕರ್ನಾಟಕ ಅಹಿಂದ ಸಂಘಟನೆಗಳ ಒಕ್ಕೂಟ ಸೇರಿದಂತೆ ವಿವಿಧ ಸಂಘಟನೆಗಳು ಪೊನ್ನಂಪೇಟೆಯಲ್ಲಿ ಪ್ರತಿಭಟನೆ ನಡೆಸಿದವು.
ಗೃಹ ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿ ನ್ಯಾಯಕ್ಕಾಗಿ ಒತ್ತಾಯಿಸಿದ ಪ್ರತಿಭಟನಾಕಾರರು ಪೊನ್ನಂಪೇಟೆ ಬಸ್ ನಿಲ್ದಾಣದಿಂದ ತಾಲ್ಲೂಕು ತಹಶೀಲ್ದಾರ್ ಕಚೇರಿವರೆಗೆ ಮೆರವಣಿಗೆ ನಡೆಸಿದರು. ತಹಶೀಲ್ದಾರ್ ಕಚೇರಿ ಎದುರು ಮಾತನಾಡಿದ ಅಹಿಂದ ಸಂಘಟನೆಗಳ ಒಕ್ಕೂಟದ ಮುಖಂಡ ಹರಿರಾಮ್ ಯುವತಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರಾಥಮಿಕ ಹಂತದಲ್ಲಿ ಪೊಲೀಸರು ಸೂಕ್ತ ರೀತಿಯಲ್ಲಿ ಸ್ಪಂದನೆ ನೀಡಿಲ್ಲ. ಆದ್ದರಿಂದ ಕರ್ತವ್ಯ ಲೋಪವೆಸಗಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಆರೋಪಿಸಿದ ಅವರು, ಗೃಹ ಸಚಿವರು ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕೆಂದು ಒತ್ತಾಯಿಸಿದರು.
ದಲಿತ ಸಂಘರ್ಷ ಸಮಿತಿಯ ವಿಭಾಗೀಯ ಸಂಚಾಲಕ ಹೆಚ್.ಕೃಷ್ಣಪ್ಪ ಮಾತನಾಡಿ, ಅಪ್ರಾಪ್ತ ಯುವತಿಯ ಮೇಲಿನ ಅತ್ಯಾಚಾರ ಮತ್ತು ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕು ಎಂದರು.
ಸ್ಥಳಕ್ಕಾಗಮಿಸಿದ ಉಪವಿಭಾಗಾಧಿಕಾರಿ ವರ್ಣಿತ್ ನೇಗಿ ಹಾಗೂ ಡಿವೈಎಸ್‌ಪಿ ಅವರಿಗೆ ಪ್ರತಿಭಟನಾಕಾರರು ವಿವಿಧ ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದರು.
ಅಪ್ರಾಪ್ತ ಯುವತಿಯ ಅತ್ಯಾಚಾರ ಮತ್ತು ಆಕೆಯ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು ಹಾಗೂ ಹೈಸೊಡ್ಲೂರು ಗ್ರಾಮದಲ್ಲಿ ಕಳೆದ 7 ವರ್ಷಗಳಿಂದ ಶೆಡ್ ನಿರ್ಮಿಸಿಕೊಂಡು ಬದುಕು ಸಾಗಿಸುತ್ತಿರುವ ಆದಿವಾಸಿಗಳಿಗೆ ಸೂಕ್ತ ದಾಖಲಾತಿ ನೀಡಬೇಕು ಎಂದು ಒತ್ತಾಯಿಸಿದರು.
ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರಾದ ರಜನಿಕಾಂತ್, ಪರಶುರಾಮ್, ಆಲ್ ಇಂಡಿಯ ದಲಿತ ರೈಟ್ಸ್ ಮೂಮೆಂಟ್ಸ್ ರಾಜ್ಯಾಧ್ಯಕ್ಷ ರಮೇಶ್, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕಿ ಓಮನ, ಜಿಲ್ಲಾ ಸಂಘಟನಾ ಸಂಚಾಲಕ ಯೋಗೇಶ್, ಹೆಚ್.ಈ.ಶಿವಕುಮಾರ್, ಮುತ್ತಯ್ಯ, ರಾಜು ಹೆಚ್.ಸಿ, ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಸಂಚಾಲಕ ಶೈಲೇಶ್, ಸಂಘಟನಾ ಸಂಚಾಲಕ ನಾಗೇಶ್ ಮತ್ತಿತರ ಪ್ರಮುಖರು ಹಾಗೂ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.












