ಮಡಿಕೇರಿ ಫೆ.22 NEWS DESK : ಕೊಡಗು ಜಿಲ್ಲೆಯ ಕಾಫಿ ಬೆಳೆಗಾರರ 10 ಹೆಚ್.ಪಿ ಪಂಪ್ ಸೆಟ್ ಗಳ ವಿದ್ಯುತ್ ಸಂಪರ್ಕ ಕಡಿತವನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕ ಧರಣಿ ಸತ್ಯಾಗ್ರಹವನ್ನು ಮುಂದುವರೆಸಿದೆ.
ನಗರದ ಚೆಸ್ಕಾಂ ಕಚೇರಿಯ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ರೈತರು ಬೇಡಿಕೆ ಈಡೇರುವವರೆಗೆ ಇಲ್ಲಿಂದ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ರೈತ ಸಂಘದ ಜಿಲ್ಲಾಧ್ಯಕ್ಷ ಮನು ಸೋಮಯ್ಯ ಮಾತನಾಡಿ, ಸರ್ಕಾರ ಕಾಫಿ ಬೆಳೆಗಾರರ ಬಗ್ಗೆ ಮಲತಾಯಿ ಧೋರಣೆ ತೋರುತ್ತಿದೆ. ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಲವಾರು ಬಾರಿ ಸರ್ಕಾರದ ಗಮನ ಸೆಳೆಯಲಾಗಿತ್ತು. ಆದರೆ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರ ರೈತಪರವಾದ ನಿರ್ಧಾರ ತೆಗೆದುಕೊಳ್ಳುತ್ತಿಲ್ಲವೆಂದು ಆರೋಪಿಸಿದರು.
ಸರ್ಕಾರ ಬೆಳೆಗಾರರನ್ನು ಬೀದಿಗೆ ಎಳೆಯುವುದು ಬೇಡ, ಈಗಾಗಲೇ ಪ್ರಾಣಿ ಮಾನವ ಸಂಘರ್ಷದಿಂದ ಸಾಕಷ್ಟು ಕಷ್ಟ ನಷ್ಟಗಳು ಎದುರಾಗಿದೆ. ಅಲ್ಲದೆ ಅಕಾಲಿಕ ಮಳೆ, ಬೆಳೆಹಾನಿಯಿಂದಾಗಿಯೂ ರೈತರು ಕಂಗಾಲಾಗಿದ್ದಾರೆ. ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿದ್ದರೆ ತೀವ್ರ ರೀತಿಯ ಹೋರಾಟದ ಮೂಲಕ ಉತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
200 ಯೂನಿಟ್ ವಿದ್ಯುತ್ತನ್ನು ಉಚಿತವಾಗಿ ಯಾರೂ ಕೇಳಿಲ್ಲ, ಸ್ವಾರ್ಥಕ್ಕಾಗಿ ಉಚಿತವಾಗಿ ನೀಡಲಾಗುತ್ತಿದೆ. ನಾವು ಕಳೆದ 20 ವರ್ಷಗಳಿಂದಲೂ ಹೋರಾಟ ನಡೆಸುತ್ತಾ ಬಂದಿದ್ದರೂ ಕೃಷಿಗೆ ಉಚಿತ ವಿದ್ಯುತ್ ನೀಡಿಲ್ಲ. ಇತರ ಬೆಳೆಗಳಂತೆ ಕಾಫಿ ಬೆಳೆಗೂ ಸೌಲಭ್ಯ ಕಲ್ಪಿಸಬೇಕು. ಕಾಫಿ ಬೆಳೆಗಾರರ 10 ಹೆಚ್.ಪಿ ಪಂಪ್ ಸೆಟ್ ಗಳ ವಿದ್ಯುತ್ ಕಡಿತಗೊಳಿಸುವುದನ್ನು ನಿಲ್ಲಿಸಬೇಕು. ಇಲ್ಲದಿದ್ದಲ್ಲಿ ಚೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಬೀಗ ಜಡಿಯಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಂಘದ ಪದಾಧಿಕಾರಿಗಳು ಲಿಖಿತ ರೂಪದಲ್ಲಿ ಭರವಸೆ ನೀಡಬೇಕೆಂದು ಒತ್ತಾಯಿಸಿದರು.









