ವಿರಾಜಪೇಟೆ ಫೆ.28 NEWS DESK : ರಾಜ್ಯಸಭೆಗೆ ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ನ ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಮತ್ತು ಆರೋಪಿಗಳನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿ ವಿರಾಜಪೇಟೆ ಬಿಜೆಪಿ ಮಂಡಲದ ವತಿಯಿಂದ ಪ್ರತಿಭಟನೆ ನಡೆಯಿತು.
ನಗರದ ಗಡಿಯಾರ ಕಂಬದ ಬಳಿ ಜಮಾಯಿಸಿ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ದೇಶದ್ರೋಹಿಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭ ಮಾತನಾಡಿದ ಮಾಜಿ ಶಾಸಕ ಕೆ.ಜಿ ಬೋಪಯ್ಯ, ಪ್ರಜಾಪ್ರಭುತ್ವದ ದೇಗುಲ ಎಂದು ಬಿಂಬಿಸುವ ರಾಜ್ಯದ ವಿಧಾನ ಸೌಧದಲ್ಲಿ ಕಾಂಗ್ರೆಸ್ನ ನಾಸಿರ್ ಹುಸೇನ್ ಅವರ ಬೆಂಬಲಿಗನೋರ್ವ ಪಾಕಿಸ್ತಾನದ ಪರ ಘೋಷಣೆ ಕೂಗಿ ದೇಶಕ್ಕೆ ಅಪಮಾನ ಮಾಡಿದ್ದು, ಇದು ದೇಶ ದ್ರೋಹದ ಕೆಲಸವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಬಿಜೆಪಿ ವಿರಾಜಪೇಟೆ ನಗರ ಅಧ್ಯಕ್ಷ ಟಿ.ಪಿ.ಕೃಷ್ಣ ಮಾತನಾಡಿ, ನಮ್ಮ ದೇಶದಲ್ಲಿ ಹುಟ್ಟಿ, ದೇಶದ ಋಣವನ್ನು ಪಡೆದು ಪಾಕಿಸ್ತಾನವನ್ನು ಬೆಂಬಲಿಸುವ ದೇಶದ್ರೋಹಿಗಳನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿದರು.
ವಿರಾಜಪೇಟೆ ಮಂಡಲ ಅಧ್ಯಕ್ಷ ಸುವೀನ್ ಗಣಪತಿ, ತಾಲೂಕು ಮಂಡಲ ಪ್ರಧಾನ ಕಾರ್ಯದರ್ಶಿ ಕುಟ್ಟಂಡ ಅಜಿತ್ ಕರುಂಬಯ್ಯ, ಪ್ರಮುಖರಾದ ಮಂಜು ಗಣಪತಿ, ಪುರಸಭೆಯ ಸದಸ್ಯರಾದ ಮಹದೇವ, ಆಶಾ ಸುಬ್ಬಯ್ಯ, ಅನಿತಾ ಕುಮಾರ್, ಸುನೀತಾ ಜೂನಾ, ಮತ್ತು ಯುವ ಮೋರ್ಚಾದ ಪದಾಧಿಕಾರಿಗಳು, ನಗರ ಭಾ.ಜ.ಪ ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ವರದಿ : ಕಿಶೋರ್ ಕುಮಾರ್ ಶೆಟ್ಟಿ