ಮಡಿಕೇರಿ ಮಾ.1 NEWS DESK : ಅರಣ್ಯ ಇಲಾಖೆಯ ಅಧಿಕಾರಿಗಳು ಮರ ಕಡಿತಲೆ ಸೇರಿದಂತೆ ಇತರೆ ಕಡತಗಳನ್ನು ವಿಲೇವಾರಿ ಮಾಡಲು ವಿಳಂಬ ಧೋರಣೆ ತೋರುತ್ತಿದ್ದಾರೆ ಎಂದು ಆರೋಪಿಸಿರುವ ಕೊಡಗು ಜಿಲ್ಲಾ ಭೂ ಮಾಲೀಕರ ಮತ್ತು ಮರ ವ್ಯಾಪಾರಿಗಳ ಸಂಘದ ಅಧ್ಯಕ್ಷ ಅರವಿಂದ್ ಕುಟ್ಟಪ್ಪ, ಈ ಬಗ್ಗೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಗಮನ ಹರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸರ್ವೆ ಕಾರ್ಯ, ಕಂದಾಯ ನಿಗಧಿ, ಮರಕಡಿತಲೆಗೆ ಆದೇಶ ಸೇರಿದಂತೆ ಇತರೆ ಕೆಲಸ ಕಾರ್ಯದಲ್ಲಿ ವಿಳಂಬ ಧೋರಣೆ ಕಂಡು ಬರುತ್ತಿದೆ. ಈ ಬಗ್ಗೆ ನಮ್ಮ ಸಂಘಕ್ಕೆ ಅನೇಕ ದೂರುಗಳು ಬಂದಿವೆ, ಅರಣ್ಯ ಇಲಾಖೆಯ ಅಧಿಕಾರಿಗಳ ಭೇಟಿಗೂ ಅವಕಾಶ ಇಲ್ಲದಾಗಿದೆ. ಇದೆಲ್ಲವೂ ಭೂ ಮಾಲೀಕರು ಹಾಗೂ ಮರ ವ್ಯಾಪಾರಿಗಳಿಗೆ ಸಮಸ್ಯೆಯಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಗಮನ ಹರಿಸಬೇಕು. ಕಡತಗಳನ್ನು ಶೀಘ್ರ ಪರಿಶೀಲನೆ ಮಾಡಬೇಕು ಮತ್ತು ಪ್ರಕ್ರಿಯೆಗಳನ್ನು ಸರಳೀಕರಣಗೊಳಿಸಬೇಕು ಎಂದು ಒತ್ತಾಯಿಸಿದರು.
ಸಂಘದ ಉಪಾಧ್ಯಕ್ಷ ಕೆ.ಎ.ಆದಂ ಮಾತನಾಡಿ, ಈ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು. ಸೂಕ್ತ ರೀತಿಯಲ್ಲಿ ಸ್ಪಂದಿಸದಿದ್ದಲ್ಲಿ ಶಾಸಕರ ಗಮನಕ್ಕೆ ತರಲಾಗುವುದು. ಇಲ್ಲಿಯೂ ಸಮಸ್ಯೆಗೆ ಸೂಕ್ತ ಪರಿಹಾರ ದೊರೆಯದಿದ್ದಲ್ಲಿ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಮನೋರಂಜನ್, ಖಜಾಂಚಿ ಎನ್.ಎಸ್.ಸುರೇಶ್, ಸಾಮಾಜಿಕ ಜಾಲತಾಣದ ವಕ್ತಾರ ಕೆ.ಕೆ.ಹಂಸ ಹಾಗೂ ಕಾನೂನು ಸಲಹೆಗಾರ ಸಿ.ಬಿ.ಪೂವಣ್ಣ ಉಪಸ್ಥಿತರಿದ್ದರು.









