ಮಡಿಕೇರಿ ಮಾ.7 NEWS DESK : ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಓಲೈಕೆಯಲ್ಲಿ ತೊಡಗಿದೆ ಎಂದು ಸಂಸದ ಪ್ರತಾಪ್ ಸಿಂಹ ಅವರು ನೀಡಿರುವ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಮಾಜಿ ಅಧ್ಯಕ್ಷ ಎಂ.ಎ.ಉಸ್ಮಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತ ದೇಶದಲ್ಲಿ ಸರ್ವರಿಗೂ ಸಮಾನ ಹಕ್ಕುಗಳನ್ನು ಸಂವಿಧಾನ ನೀಡಿದೆ. ಇದರ ಆಧಾರದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರಿಗೆ ಸಿಗಬೇಕಾದ ಸೌಲಭ್ಯಗಳನ್ನು ನೀಡುತ್ತಿದ್ದಾರೆ. ಇದು ಹಕ್ಕುಗಳ ಪ್ರತಿಪಾದನೆಯೇ ಹೊರತು ಅಲ್ಪಸಂಖ್ಯಾತರ ಓಲೈಕೆಯಲ್ಲ ಎಂದು ತಿಳಿಸಿದ್ದಾರೆ.
ಅಲ್ಪಸಂಖ್ಯಾತ ಸಮುದಾಯದ ಅಭ್ಯುದಯ ಮತ್ತು ರಕ್ಷಣೆಗೆ ಆಡಳಿತ ವ್ಯವಸ್ಥೆ ಬದ್ಧವಾಗಿರಬೇಕೆನ್ನುವುದು ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯ ಆಶಯವಾಗಿದೆ. ಇದನ್ನು ಕಾಂಗ್ರೆಸ್ ಸರ್ಕಾರ ಪರಿಪಾಲನೆ ಮಾಡುತ್ತಿದೆಯೇ ಹೊರತು ಓಲೈಕೆ ರಾಜಕಾರಣ ಮಾಡುತ್ತಿಲ್ಲ. ವಿನಾಕಾರಣ ಸಂಸದರು ಧರ್ಮ ಆಧಾರಿತ ರಾಜಕಾರಣ ಮಾಡುತ್ತಿದ್ದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡಲು ವಿಷಯಗಳಿಲ್ಲದೆ ಭಾವನಾತ್ಮಕವಾಗಿ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರತಿ ಚುನಾವಣೆ ಸಂದರ್ಭ ಬಹುಸಂಖ್ಯಾತ, ಅಲ್ಪಸಂಖ್ಯಾತ ಎಂದು ಬೇಧಭಾವದ ಮಾತುಗಳನ್ನಾಡಿ ಜನರ ಹಾದಿ ತಪ್ಪಿಸುವ ಯತ್ನ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಜನಪ್ರಿಯತೆಯನ್ನು ಕಂಡು ಹತಾಶೆಗೊಂಡಿರುವ ಸಂಸದರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿ ಮಾಡಿ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಧರ್ಮ ಆಧಾರಿತ ಮತ್ತು ಕೋಮು ದ್ವೇಷದ ರಾಜಕಾರಣ ಹೆಚ್ಚು ದಿನ ಫಲ ನೀಡುವುದಿಲ್ಲ ಎನ್ನುವುದನ್ನು 2023 ರ ವಿಧಾನಸಭಾ ಚುನಾವಣೆ ಸಾಬೀತು ಪಡಿಸಿದೆ. ಆದರೂ ಪಾಠ ಕಲಿಯದ ಸಂಸದರು, ಅಲ್ಪಸಂಖ್ಯಾತರನ್ನು ಟಾರ್ಗೆಟ್ ಮಾಡಿದರೆ ಈ ಬಾರಿಯ ಚುನಾವಣೆಯಲ್ಲೂ ಗೆದ್ದು ಬಿಡಬಹುದೆನ್ನುವ ಭ್ರಮೆಯಲ್ಲಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಕೊಡಗಿನ ಪ್ರಜ್ಞಾವಂತ ಮತದಾರರು ವಿಧಾನಸಭಾ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನ್ನು ಗೆಲ್ಲಿಸಿದ್ದಾರೆ. ಈಗ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕೂಡ ಬಿಜೆಪಿಯನ್ನು ಸೋಲಿಸುವುದು ಖಚಿತವೆಂದು ಭವಿಷ್ಯ ನುಡಿದಿದ್ದಾರೆ.
ಪರಿಶಿಷ್ಟರ ಅನುದಾನ ಬೇರೆಡೆಗೆ ಹೋಗಿದೆ ಎಂದು ಚುನಾವಣೆ ಸಂದರ್ಭದಲ್ಲಿ ಪರಿಶಿಷ್ಟರ ಬಗ್ಗೆ ಭಾರೀ ಕಾಳಜಿ ತೋರುತ್ತಿರುವ ಸಂಸದರು, ಕಳೆದ 10 ವರ್ಷಗಳಲ್ಲಿ ಕೊಡಗು ಜಿಲ್ಲೆಯ ಎಷ್ಟು ಗಿರಿಜನ ಹಾಡಿಗಳಿಗೆ ಭೇಟಿ ನೀಡಿದ್ದಾರೆ, ಆದಿವಾಸಿಗಳ ಸಮಸ್ಯೆಗಳಿಗೆ ಎಷ್ಟು ಸ್ಪಂದಿಸಿದ್ದಾರೆ, ಕೇಂದ್ರ ಸರ್ಕಾರದ ಯೋಜನೆಗಳನ್ನು ಎಷ್ಟು ಹಾಡಿಗಳಿಗೆ ತಲುಪಿಸಿದ್ದಾರೆ ಎನ್ನುವುದನ್ನು ಮೊದಲು ಬಹಿರಂಗ ಪಡಿಸಲಿ ಎಂದು ಉಸ್ಮಾನ್ ಒತ್ತಾಯಿಸಿದ್ದಾರೆ.









