ಮಡಿಕೇರಿ ಮಾ.13 NEWS DESK : ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಅವಧಿಯಲ್ಲಿ ಕಳಪೆ ಮತ್ತು ಅವೈಜ್ಞಾನಿಕ ಕಾಮಗಾರಿಯ ಮೂಲಕ ಭಾರೀ ವಿವಾದ ಸೃಷ್ಟಿಸಿದ್ದ ಜಿಲ್ಲಾಧಿಕಾರಿಗಳ ಕಚೇರಿಯ ತಡೆಗೋಡೆಯನ್ನು ಕೆಡವಲು ಕ್ರಮ ಕೈಗೊಳ್ಳಲಾಗಿದ್ದು, ಮಾ.14 ರಂದು ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ ನೇತೃತ್ವದ ಸಮಿತಿ ಸ್ಥಳ ಪರಿಶೀಲನೆ ನಡೆಸಲಿದೆ.
ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ಜರ್ಮನ್ ತಂತ್ರಜ್ಞಾನದಲ್ಲಿ ನಡೆದ ತಡೆಗೋಡೆ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಮತ್ತು ಅಪಾಯಕಾರಿಯಾಗಿದೆ ಎಂದು ಆರೋಪಿಸಿ ಅಂದು ವಿರೋಧ ಪಕ್ಷದ ಸ್ಥಾನದಲ್ಲಿದ್ದ ಕಾಂಗ್ರೆಸ್ ಹೋರಾಟ ನಡೆಸಿತ್ತು. ಅಲ್ಲದೆ ಮಳೆಗಾಲದಲ್ಲಿ ತಡೆಗೋಡೆ ಕುಸಿಯುವ ಆತಂಕವೂ ಎದುರಾಗಿತ್ತು.
ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಿಲ್ಲೆಯ ಶಾಸಕದ್ವಯರಾದ ಡಾ.ಮಂತರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರ ಪ್ರಯತ್ನದ ಫಲವಾಗಿ ತಡೆಗೋಡೆ ನಿರ್ವಹಣೆ ಹೊತ್ತ ಇಂಜಿನಿಯರ್ ಅಮಾನತಿಗೆ ಒಳಗಾದರು. ಸಹಾಯಕ ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಇನ್ನೂ ಕೆಲವು ಅಧಿಕಾರಿಗಳು ವರ್ಗಾವಣೆ ಶಿಕ್ಷೆಗೆ ಗುರಿಯಾದರು.
ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಪ್ರಥಮ ಅಧಿವೇಶನದಲ್ಲಿ ತಡೆಗೋಡೆ ಅವೈಜ್ಞಾನಿಕವಾಗಿದ್ದು ಬಿದ್ದು ಅನಾಹುತ ಸಂಭವಿಸುವುದರಿಂದ ಸುಭದ್ರ ತಡೆಗೋಡೆ ನಿರ್ಮಾಣಕ್ಕೆ ಒತ್ತಾಯಿಸಿದ್ದರು.
ಇದೀಗ ಕಳಪೆ ಕಾಮಗಾರಿಯ ತಡೆಗೋಡೆ ತೆರವಿಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಗುರುವಾರ ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ ಅವರು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.