ಮಡಿಕೇರಿ ಮಾ.21 : ಲೋಕಸಭಾ ಚುನಾವಣೆ ಸಂಬಂಧ ಪಾರದರ್ಶಕ ಮತ್ತು ಶಾಂತಿಯುತವಾಗಿ ನಡೆಸುವ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡು ಠೇವಣಿ ಇಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿರುವ ಎಲ್ಲಾ ಶಸ್ತ್ರಾಸ್ತ್ರ ಪರವಾನಗಿದಾರರು ಹೊಂದಿರುವ ಶಸ್ತ್ರಾಸ್ತ್ರಗಳನ್ನು ಮತ್ತು ವಿನಾಯಿತಿ ಪತ್ರದಡಿ ಶಸ್ತ್ರಾಸ್ತ್ರ ಹೊಂದಿರುವವರ ಪೈಕಿ ಕ್ರಿಮಿನಲ್ ಹಿನ್ನೆಲೆಯುಳ್ಳ, ನ್ಯಾಯಾಲಯದಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿರುವ, ಈ ಹಿಂದಿನ ಚುನಾವಣಾ ಸಂದರ್ಭಗಳಲ್ಲಿ ಶಸ್ತ್ರಾಸ್ತ್ರಗಳನ್ನು ದುರ್ಬಳಕೆ ಮಾಡಿದ ಹಿನ್ನೆಲೆಯುಳ್ಳ ವ್ಯಕ್ತಿಗಳು ಹೊಂದಿರುವ ಶಸ್ತ್ರಾಸ್ತ್ರಗಳನ್ನು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಅಥವಾ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡು ವ್ಯಾಪಾರಿಗಳಲ್ಲಿ ಕೂಡಲೇ ಠೇವಣಿ ಇರಿಸಬೇಕೆಂದು ತಿಳಿಸಿದ್ದಾರೆ.
ಚುನಾವಣಾ ಫಲಿತಾಂಶ ಘೋಷಣೆಯಾಗುವವರೆಗೆ ಯಾವುದೇ ವ್ಯಕ್ತಿ ಶಸ್ತ್ರಾಸ್ತ್ರಗಳನ್ನು ಪ್ರದರ್ಶಿಸುವುದು, ಹಿಡಿದುಕೊಂಡು ಓಡಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಚುನಾವಣಾ ನೀತಿ ಸಂಹಿತೆ ಮುಕ್ತಾಯಗೊಂಡ 2024 ರ ಜೂ.6 ರ ಒಂದು ವಾರದ ಒಳಗೆ ಠೇವಣಿ ಇರಿಸಿದ್ದ ಶಸ್ತ್ರಾಸ್ತ್ರಗಳನ್ನು ಹಿಂತಿರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.










