ಮಡಿಕೇರಿ ಮಾ. 29 NEWS DESK : ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಪ್ರಚಾರಕ್ಕಾಗಿ ಮಾಡುವ ಖರ್ಚುವೆಚ್ಚದ ಬಗ್ಗೆ ಪ್ರತಿ ದಿನ ನಿಗಾ ವಹಿಸಿ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಚುನಾವಣಾ ವೆಚ್ಚ ವೀಕ್ಷಕರಾದ ಎ.ಸುರೇಶ್ ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ವೆಚ್ಚ ವೀಕ್ಷಕರ ತಂಡದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಭೆ ನಡೆಸಿ ಅವರು ಮಾತನಾಡಿದರು.
ಚುನಾವಣಾ ಕೆಲಸಕ್ಕಾಗಿ ನೇಮಕವಾಗಿರುವ ಎಫ್.ಎಸ್.ಟಿ, ಎಸ್.ಎಸ್.ಟಿ, ವಿ.ಎಸ್.ಟಿ ಮತ್ತಿತರ ಚುನಾವಣಾ ತಂಡಗಳು ಸಂಘಟಿತರಾಗಿ ಕಾರ್ಯನಿರ್ವಹಿಸಬೇಕು ಎಂದು ಚುನಾವಣಾ ವೆಚ್ಚ ವೀಕ್ಷಕರು ನಿರ್ದೇಶನ ನೀಡಿದರು. ಚುನಾವಣಾ ಆಯೋಗದ ನಿರ್ದೇಶನಗಳನ್ನು ಚಾಚುತಪ್ಪದೆ ಪಾಲಿಸಬೇಕು. ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.
ಯಾವುದೇ ರೀತಿಯ ಗೊಂದಲಗಳಿದ್ದಲ್ಲಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು ಎಂದು ತಿಳಿಸಿದರು. ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಿ ದಾಖಲೆ ರಹಿತ ಹಣ ಅಥವಾ ಇನ್ನಿತರೆ ವಸ್ತುಗಳು ಸಾಗಾಣಿಕೆಯಾಗದಂತೆ ಗಮನಹರಿಸಬೇಕು ಎಂದು ಚುನಾವಣಾ ವೆಚ್ಚ ವೀಕ್ಷಕರು ಹೇಳಿದರು.
ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳ ಚುನಾವಣಾ ವೆಚ್ಚ ನಿರ್ವಹಿಸಲು ನೇಮಕವಾಗಿರುವ ಅಧಿಕಾರಿಗಳು/ ಸಿಬ್ಬಂದಿಗಳು ಸಮನ್ವಯ ಮತ್ತು ಸಂಘಟಿತರಾಗಿ ಕಾರ್ಯನಿರ್ವಹಿಸಬೇಕು ಎಂದರು.
ಬ್ಯಾಂಕ್ ವಹಿವಾಟಿನ ಮೇಲೆ ನಿಗಾ ವಹಿಸಿ; ಬ್ಯಾಂಕ್ ಖಾತೆಗಳಲ್ಲಿ ನಡೆಯುವ ವಹಿವಾಟು ಬಗ್ಗೆ ಗಮನಹರಿಸಬೇಕು. ಹಣ ವರ್ಗಾವಣೆ ಕುರಿತಂತೆ ಪ್ರತಿದಿನ ಪರಿಶೀಲನೆ ನಡೆಸಬೇಕು ಎಂದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಚುನಾವಣಾ ಕೆಲಸಕ್ಕಾಗಿ ನೇಮಕವಾಗಿರುವ ವಿವಿಧ ತಂಡಗಳು, ಅಧಿಕಾರಿಗಳ ಕಾರ್ಯನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಜಿಲ್ಲೆಗೆ ಹೊಂದಿಕೊಂಡಿರುವ ಅಂತರರಾಜ್ಯ ಗಡಿ ಚೆಕ್ ಪೋಸ್ಟ್ ಗಳ ಕಾರ್ಯ ಚಟುವಟಿಕೆ ಮತ್ತಿತರ ಬಗ್ಗೆ ವಿವರಿಸಿದರು.
ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರು ಲೋಕಸಭಾ ಚುನಾವಣೆ ಸಂಬಂಧ ಹಲವು ಮಾಹಿತಿ ನೀಡಿದರು.
ಬಳಿಕ ಚುನಾವಣಾ ವೆಚ್ಚ ವೀಕ್ಷಕರು ಜಿಲ್ಲಾ ಚುನಾವಣಾ ವೆಚ್ಚ ಮೇಲ್ವಿಚಾರಕರ ಕೋಶ ಹಾಗೂ ಜಿಲ್ಲಾ ಮಾಧ್ಯಮ ದೃಢೀಕರಣ ಹಾಗೂ ಉಸ್ತುವಾರಿ ಸಮಿತಿ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.
ಈ ಸಂದರ್ಭ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ನಾರಾಯಣಸ್ವಾಮಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಇತರರು ಇದ್ದರು.