ಮಡಿಕೇರಿ ಏ.12 NEWS DESK : ಚುನಾವಣೆ ಪ್ರಜಾಪ್ರಭುತ್ವದ ಹಬ್ಬವಾಗಿದ್ದು, ಈ ಪ್ರಜಾಪ್ರಭುತ್ವದ ಹಬ್ಬದಲ್ಲಿ ಎಲ್ಲರೂ ಭಾಗವಹಿಸಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು ಹಾಗೂ ತಮ್ಮವರನ್ನು ಕೂಡ ಮತ ಚಲಾಯಿಸುವಂತೆ ಪ್ರೇರೇಪಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಾರ್ವಜನಿಕರಿಗೆ ಕರೆ ನೀಡಿದರು.
ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ(ಸ್ವೀಪ್) ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಹಮ್ಮಿಕೊಳ್ಳಲಾದ ಕಾಲ್ನಡಿಗೆ ಜಾಥಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ, ಅವರು ಮಾತನಾಡಿದರು.
ಚುನಾವಣೆಯು ಪ್ರಜಾಪ್ರಭುತ್ವದ ಹಬ್ಬವಾಗಿದೆ. ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬ ಪ್ರಜೆಯು ವಿವೇಚನೆಯಿಂದ ಅರ್ಹ ವ್ಯಕ್ತಿಗೆ ನೀಡುವ ಮೂಲಕ ಸದೃಢ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಮುಂದಾಗಬೇಕು. ಈ ಚುನಾವಣೆಯಲ್ಲಿ ಮತದಾನ ಪ್ರಕ್ರಿಯೆಯಿಂದ ದೂರವುಳಿಯದೆ ಉಜ್ವಲ ಭವಿಷ್ಯಕ್ಕಾಗಿ ತಪ್ಪದೇ ಮತದಾನ ಮಾಡುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಏ.26 ರಂದು ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಚಲಾಯಿಸಬೇಕು. ಪ್ರತೀ ಮತವು ಅತ್ಯಮೂಲ್ಯವಾದದ್ದು, ಪ್ರಜಾಪ್ರಭುತ್ವದ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ವಿನಾಕಾರಣ ದೂಷಿಸುವ ಬದಲು ಚುನಾವಣೆಯಲ್ಲಿ ಮತದಾನ ಮಾಡಿ ವಿಶ್ವಾಸಾರ್ಹ ಸರ್ಕಾರ ರಚನೆಯಲ್ಲಿ ನಾವು ಪಾಲ್ಗೊಳ್ಳಬೇಕು. ವ್ಯವಸ್ಥೆಯ ಸುಭದ್ರಕ್ಕಾಗಿ ಮತದಾನದ ಮಹತ್ವವನ್ನು ನಾವೆಲ್ಲರೂ ಅರಿಯಬೇಕು. ಉತ್ತಮ ವ್ಯಕ್ತಿಗಳ ಆಯ್ಕೆಗೆ ಪ್ರಜಾಪ್ರಭುತ್ವ ನಮಗೆ ನೀಡಿದ ಮತದಾನದ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಮತದಾನದ ದಿನದಂದು ಬೆಳಗ್ಗೆ ಬೇಗನೆ ಮತಗಟ್ಟೆಗೆ ತೆರಳಿ ಮತ ಚಲಾಯಿಸಿ ದೈನಂದಿನ ಕೆಲಸಗಳಿಗೆ ಹಾಜರಾಗಬಹುದಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ ಮಾತನಾಡಿ ಏ.26 ರಂದು ಮನೆಯಿಂದ ಹೊರಬಂದು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಪ್ರಜಾತಂತ್ರ ವ್ಯವಸ್ಥೆಯನ್ನು ಭದ್ರಪಡಿಸೋಣ. ಕೊಡಗು ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾನದ ಪ್ರಮಾಣವನ್ನು ಅಧಿಕಗೊಳಿಸಲು ಈಗಾಗಲೇ ಹಲವಾರು ಚಟುವಟಿಕೆಗಳನ್ನು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೈಗೊಳ್ಳಲಾಗಿದೆ. ಈ ಮತದಾನದ ಜಾಗೃತಿಯಿಂದ ಜಿಲ್ಲೆಯ ಮತದಾನದ ಪ್ರಮಾಣ ರಾಜ್ಯದಲ್ಲಿಯೇ ಅತೀ ಹೆಚ್ಚು ಆಗುವಂತೆ ನಾವೆಲ್ಲರೂ ಶ್ರಮಿಸೋಣ ಎಂದರು.
ಮುಕ್ತ, ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ಉದ್ದೇಶ ಹೊಂದಿರುವ ಚುನಾವಣಾ ಆಯೋಗವು ಚುನಾವಣೆ ಸಂದರ್ಭದಲ್ಲಿ ನಡೆಯುವ ಅಕ್ರಮ ಪತ್ತೆಗೆ ಹಾಗೂ ತಡೆಗೆ ಸಿವಿಜಿಲ್ ಆ್ಯಪ್ ಬಿಡುಗಡೆ ಮಾಡಿದೆ. ಸಾರ್ವಜನಿಕರು ಸಿವಿಜಿಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಂಡು ದೂರು ನೀಡಬಹುದು. ಅಥವಾ ಸಹಾಯವಾಣಿ ಸಂಖ್ಯೆ 1950 ಸಂಖ್ಯೆಗೆ ಕರೆ ಮಾಡಿ ದೂರು ನೀಡಬಹುದಾಗಿದೆ. ಚುನಾವಣೆಯ ಸಂದರ್ಭಗಳಲ್ಲಿ ಚುನಾವಣೆಗೆ ಸ್ಪರ್ಧಿಸುವ ವ್ಯಕ್ತಿಗೆ ಅಥವಾ ಪಕ್ಷಕ್ಕೆ ಮತ ಹಾಕುವಂತೆ ಹಣ, ಉಡುಗೊರೆ, ಆಸೆ ಆಮಿಷಗಳನ್ನು ನೀಡಿದರೆ ಮತದಾರರು ಸಿವಿಜಿಲ್ ಆ್ಯಪ್ ಮೂಲಕ ದೂರು ದಾಖಲಿಸಬಹುದು ಎಂದರು.
ನಮ್ಮ ಮತ, ನಮ್ಮ ಹಕ್ಕು, ಪ್ರತೀ ಮತ ಅತ್ಯಮೂಲ್ಯ, ತಪ್ಪದೇ ಮತದಾನ ಮಾಡಿ, ನನ್ನ ಮತ ಮಾರಾಟಕ್ಕಿಲ್ಲ, ಮತ ಚಲಾಯಿಸೋಣ ಪ್ರಜಾಪ್ರಭುತ್ವ ಗಟ್ಟಿಗೊಳಿಸೋಣ ಮುಂತಾದ ಶ್ಲೋಗನ್‍ಗಳನ್ನು ಒಳಗೊಂಡ ಬಂಟಿಂಗ್ಸ್‍ಗಳನ್ನು ಹಿಡಿದು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಕಾಲ್ನಡಿಗೆ ಜಾಥ ಯಶಸ್ವಿಯಾಯಿತು.
ಬೀದಿನಾಟಕ: ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಕಾಲ್ನಡಿಗೆ ಜಾಥ ಮೂಲಕ ಆಗಮಿಸಿದ ಗಣ್ಯರು, ಸಾರ್ವಜನಿಕರು, ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ವಿದ್ಯಾರ್ಥಿಗಳ ಸಮ್ಮುಖದಲ್ಲಿ ಕಲಾವಿದರಿಂದ ಬೀದಿನಾಟಕ ಪ್ರದರ್ಶನ ಜರುಗಿತು. ಮತ ಮಾರಾಟಕ್ಕಿಲ್ಲ, ಯಾವುದೇ ಆಮಿಷಗಳಿಗೆ ಮತ ನೀಡದೆ ಮಕ್ಕಳ ಹಾಗೂ ಪ್ರಜಾಪ್ರಭುತ್ವದ ಉತ್ತಮ ಭವಿಷ್ಯಕ್ಕಾಗಿ ನಮ್ಮ ಮತವನ್ನು ಅರ್ಹರಿಗೆ ಚಲಾಯಿಸೋಣ ಎಂಬ ಸಂದೇಶದ ನಾಟಕ ಪ್ರದರ್ಶನ ಉತ್ತಮವಾಗಿ ಪ್ರದರ್ಶನಗೊಂಡಿತು.
ಪ್ರತಿಜ್ಞಾ ವಿಧಿ ಬೋಧನೆ: ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆಂದು ಮತ್ತು ಪ್ರತಿಯೊಂದ ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆಂದು ಪ್ರತಿಜ್ಞಾ ವಿಧಿಯನ್ನು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ಅವರು ಬೋಧಿಸಿದರು.
ಕಾಲ್ನಡಿಗೆ ಜಾಥವು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಆರಂಭವಾಗಿ ಜನರಲ್ ವೃತ್ತದ ಮಾರ್ಗವಾಗಿ ಕಾವೇರಿ ಕಲಾಕ್ಷೇತ್ರ ತಲುಪುವ ಕಾಲ್ನಡಿಗೆ ಅಂತಿಮಗೊಂಡಿತು. ಜಾಥದಲ್ಲಿ ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿಗಳು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪ್ರಾಧಿಕಾರಿಗಳು ಪಾಲ್ಗೊಳ್ಳುವ ಮೂಲಕ ಕಾಲ್ನಡಿಗೆ ಜಾಥ ಯಶಸ್ವಿಯಾಯಿತು.














