ಮಡಿಕೇರಿ ಏ.13 NEWS DESK : ಲೋಕಸಭಾ ಚುನಾವಣೆ ಹಿನ್ನೆಲೆ ಮೈಸೂರು- ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಗೌಡರ ಪರ ಮತಯಾಚಿಸಲು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಉಪಸ್ಥಿತಿಯಲ್ಲಿ ಮಡಿಕೇರಿಯಲ್ಲಿ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ.
ಭಾನುವಾರ ಬೆಳಿಗ್ಗೆ 11.30 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಭೋಸರಾಜು, ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಕೊಡಗು ಜಿಲ್ಲೆಯ ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ ಸೇರಿದಂತೆ ಹಿರಿಯ ನಾಯಕರುಗಳು ಪಾಲ್ಗೊಳ್ಳಲಿದ್ದಾರೆ ಎಂದರು.
ಈಗಾಗಲೇ ಕೊಡಗು ಜಿಲ್ಲೆಯಾದ್ಯಂತ ಕಾಂಗ್ರೆಸ್ ಪಕ್ಷದಿಂದ ಬಿರುಸಿನ ಪ್ರಚಾರ ಕಾರ್ಯ ನಡೆದಿದೆ. ಜನರಿಂದ ಎಂ.ಲಕ್ಷ್ಮಣ ಗೌಡರ ಪರ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಕಾಂಗ್ರೆಸ್ ಸರಕಾರ ಹೆಚ್ಚು ಜನಪ್ರಿಯತೆಯನ್ನು ಗಳಿಸಿದ್ದು, ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತವೆಂದು ಧರ್ಮಜ ಉತ್ತಪ್ಪ ವಿಶ್ವಾಸ ವ್ಯಕ್ತಪಡಿಸಿದರು.











