ಮಡಿಕೇರಿ ಮೇ 8 NEWS DESK : ಹಾಸನದ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾತ್ಯತೀತ ಜನತಾದಳದ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರು ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ತೇಜೋವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಜೆಡಿಎಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಮೂಟೆರಾ ಪುಷ್ಪಾವತಿ ರಮೇಶ್, ಕಾಂಗ್ರೆಸ್ ಸರಕಾರದ ವಿರುದ್ಧ ಕೊಡಗು ಜಿಲ್ಲಾ ಜೆಡಿಎಸ್ ಮೇ 9 ರಂದು ಪ್ರತಿಭಟನೆಯನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದ್ದಾರೆ.
ಗುರುವಾರ ಬೆಳಿಗ್ಗೆ 11.30 ಗಂಟೆಗೆ ಮಡಿಕೇರಿಯ ಗಾಂಧಿ ಮೈದಾನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಕಾಂಗ್ರೆಸ್ ಸರಕಾರದ ನಡೆಯನ್ನು ಖಂಡಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಪೆನ್ ಡ್ರೈವ್ ನಲ್ಲಿ ಇತ್ತು ಎನ್ನಲಾದ ಅಶ್ಲೀಲ ವಿಡಿಯೋಗಳನ್ನು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿಬಿಟ್ಟು ಸಂತ್ರಸ್ತ ಮಹಿಳೆಯರ ಮಾನಹಾನಿ ಮಾಡಿದ್ದಾರೆ. ಇದನ್ನು ತಡೆಯುವಲ್ಲಿ ರಾಜ್ಯ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ, ಅಲ್ಲದೆ ವಿನಾಕಾರಣ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಹೆಸರನ್ನು ಬಳಕೆ ಮಾಡುವ ಮೂಲಕ ಕಾಂಗ್ರೆಸ್ ನಾಯಕರು ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದಾರೆ ಎಂದು ಪುಷ್ಪಾವತಿ ರಮೇಶ್ ಆರೋಪಿಸಿದ್ದಾರೆ.