ಮಡಿಕೇರಿ ಮೇ 9 NEWSDESK : ರಾಜ್ಯದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ದುಬಾರಿ ಶುಲ್ಕ ವಸೂಲಾತಿ ವ್ಯವಹಾರಕ್ಕೆ ಸರಕಾರ ತಕ್ಷಣ ಕಡಿವಾಣ ಹಾಕಿ ಪೋಷಕರು ಹಾಗೂ ವಿದ್ಯಾರ್ಥಿಗಳ ಹಿತ ಕಾಯಬೇಕೆಂದು ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯದಲ್ಲಿ ಸರಕಾರಿ ಶಿಕ್ಷಣ ವ್ಯವಸ್ಥೆ ಹದಗೆಟ್ಟಿದೆ. ಈ ಕಾರಣದಿಂದ ಪೋಷಕರು ಹಾಗೂ ವಿದ್ಯಾರ್ಥಿಗಳು ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ. ಆದರೆ ವಿದ್ಯಾರ್ಥಿಗಳ ಹಿತ ಕಾಯಬೇಕಾದ ಖಾಸಗಿ ಶಿಕ್ಷಣ ಸಂಸ್ಥೆಗಳು ನಿಯಮ ಬಾಹಿರವಾಗಿ ದುಬಾರಿ ಶುಲ್ಕ ವಸೂಲಿ ಮಾಡುತ್ತಿವೆ ಎಂದು ಆರೋಪಿಸಿದ್ದಾರೆ.
ದೆಹಲಿಯ ಆಮ್ ಆದ್ಮಿ ಪಾರ್ಟಿ ಸರಕಾರ ಖಾಸಗಿ ಶಾಲೆಗಳ ಮೇಲೆ ಕಟ್ಟುನಿಟ್ಟಿನ ನಿಯಂತ್ರಣ ಹೇರಿದೆ. ಕರ್ನಾಟಕ ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರತಿವರ್ಷ ಶೇ.15 ರಷ್ಟು ಶುಲ್ಕ ಹೆಚ್ಚಳ ಮಾಡುವ ಕುರಿತು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ರಾಜ್ಯದಲ್ಲಿ ಶುಲ್ಕ ನಿಯಂತ್ರಣ ಪ್ರಾಧಿಕಾರ ಇದೆಯೇ ಎನ್ನುವ ಪ್ರಶ್ನೆ ಮೂಡುತ್ತಿದೆ. ಖಾಸಗಿ ಶಾಲೆಗಳಿಗೆ ಶುಲ್ಕ ನಿಗಧಿ ಮಾಡುವ ಅಧಿಕಾರ ರಾಜ್ಯ ಸರಕಾರಕ್ಕಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರಕಾರ ಹೈಕೋರ್ಟ್ ಎದುರು ಸಮರ್ಪಕವಾಗಿ ವಾದ ಮಂಡಿಸದೆ ಇರುವುದೇ ಇದಕ್ಕೆ ಕಾರಣ ಎಂದು ಟೀಕಿಸಿದ್ದಾರೆ.
ಈ ಶೈಕ್ಷಣಿಕ ವರ್ಷದಲ್ಲಾದರೂ ಖಾಸಗಿ ಶಾಲೆಗಳ ವಸೂಲಾತಿ ವ್ಯವಹಾರಕ್ಕೆ ಶುಲ್ಕ ನಿಯಂತ್ರಣ ಪ್ರಾಧಿಕಾರ ತಡೆಯೊಡ್ಡಬೇಕು. ಇದೀಗ ಲೋಕಸಭಾ ಚುನಾವಣೆ ಮುಗಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿನ ಬಗ್ಗೆ ಗಮನ ಹರಿಸಬೇಕಿದೆ. ನ್ಯಾಯಾಲಯದ ಆದೇಶದ ಕುರಿತು ಕಾನೂನು ತಜ್ಞರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರತಿ ಶಾಲೆಗೆ ಭೇಟಿ ನೀಡಿ ಶುಲ್ಕ ಹೆಚ್ಚಳದ ಬಗ್ಗೆ ನಿಗಾ ಇಡಬೇಕು. ಹೆಚ್ಚು ಶುಲ್ಕ ಕಂಡುಬಂದಲ್ಲಿ ಅಂತಹ ಶಾಲೆಗಳೊಂದಿಗೆ ಚರ್ಚಿಸಿ ಶುಲ್ಕ ಏರಿಕೆಯನ್ನು ಕಡಿಮೆ ಮಾಡಬೇಕು ಎಂದು ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ.