ಬೆಂಗಳೂರು ಮೇ 14 NEWS DESK : ಹತ್ತನೇ ತರಗತಿ ಪರೀಕ್ಷೆಯಲ್ಲಿ ಮೊದಲ ರ್ಯಾಂಕ್ ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳದ ಸರಕಾರಿ ಶಾಲೆ ವಿದ್ಯಾರ್ಥಿನಿ ಅಂಕಿತಾಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು 5 ಲಕ್ಷ ರೂ. ನೀಡಿ ಸನ್ಮಾನಿಸಿ ಅಭಿನಂದಿಸಿದರು.
ಇದೇ ಸಂದರ್ಭ 3ನೇ ಸ್ಥಾನ ಪಡೆದ ಮಂಡ್ಯದ ಸರಕಾರಿ ಶಾಲೆಯ ವಿದ್ಯಾರ್ಥಿ ನವನೀತ್ ಗೆ 2 ಲಕ್ಷ ರೂ. ಪ್ರೋತ್ಸಾಹ ಧನ ಘೋಷಿಸಿದರು.
ಶಿವಕುಮಾರ್ ಅವರ ಆಹ್ವಾನದ ಮೇರೆಗೆ ಅಂಕಿತಾ, ಆಕೆಯ ಪೋಷಕರು, ಶಾಲೆಯವರು ಹಾಗೂ ನವನೀತ್, ಅವರ ಕುಟುಂಬದ ಸದಸ್ಯರು ಸದಾಶಿವನಗರದ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿದರು.
ಡಿಕೆಶಿ ಅವರು ಇಬ್ಬರೂ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅಂಕಿತಾಗೆ 5 ಲಕ್ಷ ರೂ. ಚೆಕ್ ನೀಡಿದರು. ನವನೀತ್ಗೆ 2 ಲಕ್ಷ ರೂ. ಉಡುಗೊರೆ ಪ್ರಕಟಿಸಿ ಚೆಕ್ ನೀಡುವಂತೆ ಕಚೇರಿ ಸಿಬ್ಬಂದಿಗೆ ಸೂಚಿಸಿದರು.
ಈ ಸಂದರ್ಭ ಮಾತನಾಡಿದ ಉಪಮುಖ್ಯಮಂತ್ರಿಗಳು ಅಂಕಿತಾ 625 ಕ್ಕೆ 625 ಅಂಕಗಳನ್ನು ಪಡೆದಿರುವುದನ್ನು ಕಂಡು ಸಂತೋಷವಾಯಿತು, ಬಹಳ ಹೆಮ್ಮೆ ಎನಿಸಿತು. ನಮ್ಮ ಸರಕಾರಿ ಶಾಲೆ ಮಕ್ಕಳು ಹಾಗೂ ಅಲ್ಲಿನ ಶಿಕ್ಷಕರು ಬಹಳ ಸಮರ್ಥರಿದ್ದಾರೆ. ಅಂಕಿತಾ ಜತೆ ನಾನು ದೂರವಾಣಿ ಕರೆ ಮೂಲಕ ಮಾತನಾಡಿ ಬೆಂಗಳೂರಿಗೆ ಬಂದಾಗ ನನ್ನ ಮನೆಗೆ ಬರುವಂತೆ ಆಹ್ವಾನಿಸಿದ್ದೆ. ಅವರು ಇಂದು ಆಗಮಿಸಿದ್ದಾರೆ. ಸರ್ಕಾರದ ಪರವಾಗಿ ನಾನು ಈ ಹೆಣ್ಣುಮಗಳು ಹಾಗೂ ಆಕೆಯ ಪೋಷಕರನ್ನು ಅಭಿನಂದಿಸುತ್ತೇನೆ. ಈಕೆಯ ಮುಂದಿನ ವಿದ್ಯಾಭ್ಯಾಸಕ್ಕೆ 5 ಲಕ್ಷ ರೂ. ಹಣವನ್ನು ಉಡುಗೊರೆಯಾಗಿ ನೀಡುತ್ತಿದ್ದೇನೆ. ಇನ್ನು ಮಂಡ್ಯದ ನವನೀತ್ ಕೂಡ ಸರಕಾರಿ ಶಾಲೆಯಲ್ಲಿ ಓದಿ ಮೂರನೇ ಸ್ಥಾನ ಪಡೆದಿದ್ದು, ಈತನಿಗೆ 2 ಲಕ್ಷ ಉಡುಗೊರೆಯಾಗಿ ನೀಡುತ್ತಿದ್ದೇನೆ. ಇವರಿಗೆ ಒಳ್ಳೆಯದಾಗಲಿ ಎಂದು ಹಾರೈಸಿದರು.