ಮಡಿಕೇರಿ ಮೇ 17 NEWS DESK : ಕೊಡಗು ಜಿಲ್ಲೆಯ ಕಾಫಿ ತೋಟಗಳಲ್ಲಿ ಅರಣ್ಯ ಇಲಾಖೆ ನಡೆಸುತ್ತಿರುವ ಮರಗಳ ಗಣತಿ ಕಾರ್ಯವನ್ನು ತಕ್ಷಣ ನಿಲ್ಲಿಸಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಅರಣ್ಯ ಭವನದ ಎದುರು ಅರಣ್ಯ ಇಲಾಖೆ ಹಾಗೂ ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಮರ ಗಣತಿ ಆದೇಶವನ್ನು ತಕ್ಷಣ ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿದರು. ರಾಜ್ಯ ಕಾಂಗ್ರೆಸ್ ಸರಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಮತ್ತು ವಿನಾಕಾರಣ ಬೆಳೆಗಾರರಿಗೆ ಕಿರುಕುಳ ನೀಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಮರಗಳ ಗಣತಿ ಕಾರ್ಯವನ್ನು ತಕ್ಷಣ ಸ್ಥಗಿತಗೊಳಿಸದಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ.ಸುನೀಲ್ ಸುಬ್ರಮಣಿ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರರಾದ ಸುಬ್ರಮಣ್ಯ ಉಪಾಧ್ಯಾಯ, ಬಿ.ಕೆ.ಅರುಣ್ ಕುಮಾರ್, ತಳೂರು ಕಿಶೋರ್ ಕುಮಾರ್, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.