ಮಡಿಕೇರಿ ಮೇ 28 NEWS DESK : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಮತ್ತು ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಎಸ್‍ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ನಿಗಮದ ಅನುದಾನದಲ್ಲಿ ಅವ್ಯವಹಾರ ನಡೆದಿದೆ ಎಂದು ಕೆಲವು ಪ್ರಭಾವಿಗಳ ಹೆಸರು ಪ್ರಸ್ತಾಪಿಸಿ ಡೆತ್ ನೋಟ್ ಬರೆದಿಟ್ಟು ಅಧಿಕಾರಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಖಂಡನೀಯ ಮತ್ತು ಅತ್ಯಂತ ಗಂಭೀರ ವಿಚಾರವಾಗಿದೆ ಎಂದು ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಬಳಕೆಯಾಗಬೇಕಿದ್ದ ಅನುದಾನವನ್ನು ಬೇರೆ ಉದ್ದೇಶಕ್ಕೆ ಬಳಸಿಕೊಳ್ಳಲು ಪ್ರಭಾವಿಗಳು ಒತ್ತಡ ಹೇರಿರುವ ಶಂಕೆ ವ್ಯಕ್ತವಾಗಿದೆ. ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆಗೆ ಶರಣಾಗಿರುವುದನ್ನು ಗಮನಿಸಿದರೆ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿರುವುದು ಸ್ಪಷ್ಟವಾಗುತ್ತದೆ. ಇದೇ ಕಾರಣಕ್ಕೆ ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಕುಂಟಿತಗೊಂಡಿದೆ ಎಂದು ಆರೋಪಿಸಿದ್ದಾರೆ.
ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಇಲಾಖೆಯಲ್ಲಿನ ವ್ಯವಹಾರಗಳ ಕುರಿತು ಸೂಕ್ತ ತನಿಖೆ ನಡೆಸಬೇಕು. ರಾಜ್ಯದಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಇಲಾಖೆಗಳು ಕೇವಲ ಕಮಿಷನ್ ದಂಧೆಗಾಗಿ ಯೋಜನೆಗಳನ್ನು ರೂಪಿಸುತ್ತಿದೆ. ಚಂದ್ರಶೇಖರ್ ಪ್ರಕರಣದಲ್ಲಿ ಪ್ರಭಾವಿಗಳ ಕೈವಾಡ ಇರುವುದರಿಂದ ರಾಜ್ಯದ ಎಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಇಲಾಖೆ, ನಿಗಮ ಮಂಡಳಿಗಳಲ್ಲಿ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹೆಸರಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಬಯಲಿಗೆಳೆಯಬೇಕು ಹಾಗೂ ಅಧಿಕಾರಿ ಚಂದ್ರಶೇಖರ್ ಸಾವಿನ ತನಿಖೆಯನ್ನು ಪಾರದರ್ಶಕವಾಗಿ ನಡೆಸಿ ಸತ್ಯಾಂಶವನ್ನು ರಾಜ್ಯದ ಜನತೆಗೆ ತಿಳಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅನುದಾನವನ್ನು ಇತರ ಉದ್ದೇಶಕ್ಕೆ ಬಳಸುತ್ತಿರುವ ಬಗ್ಗೆ ಎದ್ದಿರುವ ಸಂಶಯಗಳನ್ನು ನಿವಾರಿಸಬೇಕು. ತಪ್ಪಿದಲ್ಲಿ ಬಿಜೆಪಿ ಎಸ್‍ಸಿ ಮೋರ್ಚಾದಿಂದ ರಾಜ್ಯವ್ಯಾಪಿ ಹೋರಾಟ ನಡೆಸಬೇಕಾಗುತ್ತದೆ ಎಂದು ಪಿ.ಎಂ.ರವಿ ಎಚ್ಚರಿಕೆ ನೀಡಿದ್ದಾರೆ.
ರಾಜ್ಯ ಕಾಂಗ್ರೆಸ್ ಸರಕಾರದ ದುರಾಡಳಿತದ ವಿರುದ್ಧ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.