ಮಡಿಕೇರಿ ಮೇ 29 NEWS DESK : ಕರ್ನಾಟಕ ವಿಧಾನ ಪರಿಷತ್ ನ 11 ಸದಸ್ಯರುಗಳ ಅಧಿಕಾರವಧಿ ಜೂನ್ 17 ರಂದು ಕೊನೆಗೊಳ್ಳಲಿದೆ. ಈ ಬಾರಿ ಕೊಡಗು ಜಿಲ್ಲೆಯ ಓರ್ವ ಅಲ್ಪಸಂಖ್ಯಾತ ಅಭ್ಯರ್ಥಿಗೆ ವಿಧಾನ ಪರಿಷತ್ ಪ್ರವೇಶಿಸಲು ಅವಕಾಶ ನೀಡುವ ಮೂಲಕ ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ಋಣ ತೀರಿಸಲಿ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಜಿಲ್ಲಾಧ್ಯಕ್ಷ ಅಬ್ದುಲ್ ಅಡ್ಕಾರ್ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಈಗಾಗಲೇ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕಾಗಿ ತೆರೆಮರೆಯಲ್ಲಿ ಕಸರತ್ತು ಆರಂಭಗೊಂಡಿದೆ. ಶೇಕಡಾ 20 ರಷ್ಟಿರುವ ಅಲ್ಪಸಂಖ್ಯಾತ ಸಮುದಾಯಕ್ಕೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಸ್ಥಾನಗಳನ್ನು ಪಡೆಯಲು ಸಾಧ್ಯವಾಗಿಲ್ಲ. ದೇಶಕ್ಕೆ ಸ್ವಾತಂತ್ರ್ಯ
ಬಂದಲ್ಲಿಂದ ಇಲ್ಲಿಯವರೆಗೆ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯ ಕಾಂಗ್ರೆಸ್ ಪಕ್ಷವನ್ನೇ ಬೆಂಬಲಿಸುತ್ತಾ ಬಂದಿದೆ. ಕಳೆದ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ಕೂಡ ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯದ ಶೇ.99 ರಷ್ಟು ಮತಗಳು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ನೀಡಿರುವುದು
ಗಮನಾರ್ಹ. ಈ ಹಿನ್ನೆಲೆ ಅಲ್ಪಸಂಖ್ಯಾತರಿಗೆ ರಾಜಕೀಯ ನ್ಯಾಯ ಒದಗಿಸುವ ದೊಡ್ಡ ಜವಾಬ್ದಾರಿ ಕಾಂಗ್ರೆಸ್ ಪಕ್ಷದ ಮೇಲಿದೆ. ಆದ್ದರಿಂದ ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲಿ ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯದವರಿಗೆ ಒಂದು ಸ್ಥಾನವನ್ನು ಕಲ್ಪಿಸಬೇಕು. ಆ ಮೂಲಕ ಕಾಂಗ್ರೆಸ್ ಪಕ್ಷ ಜಿಲ್ಲೆಯ ಅಲ್ಪಸಂಖ್ಯಾತರ ಋಣವನ್ನು ತೀರಿಸಬೇಕು ಎಂದು ಅಬ್ದುಲ್ ಅಡ್ಕರ್ ಆಗ್ರಹಿಸಿದ್ದಾರೆ.