ಮಡಿಕೇರಿ ಮೇ 31 NEWS DESK : ಬಿತ್ತನೆ ಬೀಜದ ಬೆಲೆಯನ್ನು ಏರಿಕೆ ಮಾಡಿರುವ ರಾಜ್ಯ ಸರಕಾರದ ಕ್ರಮ ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿ ಕೊಡಗು ಜಿಲ್ಲಾ ಬಿಜೆಪಿಯ ಕೃಷಿ ಮೋರ್ಚಾ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
ನಗರದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಎದುರು ಘೋಷಣೆಗಳನ್ನು ಕೂಗಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸರಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಸರಕಾರ ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಬಿತ್ತನೆ ಬೀಜದ ಬೆಲೆ ಅವೈಜ್ಞಾನಿಕವಾಗಿದ್ದು, ಕೃಷಿಕ ವರ್ಗಕ್ಕೆ ಹೊರೆಯಾಗಿದೆ. ಸರಕಾರದ ದ್ವಂದ್ವ ನಿಲುವುಗಳಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ, ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಆರೋಪಿಸಿದರು.
ರೈತರ ಬದುಕಿಗೆ ಮಾರಕವಾಗುವ ನಿರ್ಧಾರಗಳನ್ನು ಕೈಗೊಂಡರೆ ಸರಕಾರದ ವಿರುದ್ಧ ಹೋರಾಟವನ್ನು ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ರಾಜ್ಯ ರೈತ ಮೋರ್ಚಾದ ಕಾರ್ಯದರ್ಶಿ ಡಾ.ಬಿ.ಸಿ.ನವೀನ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ವಕ್ತಾರರಾದ ಮಹೇಶ್ ಜೈನಿ, ತಳೂರು ಕಿಶೋರ್ ಕುಮಾರ್, ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ, ನಗರಾಧ್ಯಕ್ಷ ಮನು ಮಂಜುನಾಥ್, ಬಿಜೆಪಿ ಎಸ್‍ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ, ಪ್ರಮುಖರಾದ ಕುಮಾರ್, ರಾಬೀನ್ ದೇವಯ್ಯ, ಜಗದೀಶ್, ಬೊಳ್ಳಜಿರ ಬಿ.ಅಯ್ಯಪ್ಪ ಮತ್ತಿತರರು ಪಾಲ್ಗೊಂಡಿದ್ದರು.