ಮಡಿಕೇರಿ ಜೂ.1 NEWS DESK : ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಪಿ.ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ಬಿಜೆಪಿಯ ಯುವ ಮೋರ್ಚಾದ ನೇತೃತ್ವದಲ್ಲಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು.
ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಸಚಿವರಿಂದ ರಾಜೀನಾಮೆ ಪಡೆಯದಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ನಿಗಮದ ಅಧೀಕ್ಷಕ ಪಿ.ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಬೇಕು, ಸೂಕ್ತ ತನಿಖೆ ನಡೆಸಬೇಕು ಮತ್ತು ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿದ್ದ ಅನುದಾನವನ್ನು ಬೇರೆ ಉದ್ದೇಶಕ್ಕೆ ಬಳಸಿಕೊಳ್ಳಲು ಪ್ರಭಾವಿಗಳು ಒತ್ತಡ ಹೇರಿದ್ದಾರೆ. ಬಡವರ ವಿರೋಧಿ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಪ್ರಮುಖರು ಆರೋಪಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಪ್ರಧಾನ ಕಾರ್ಯದರ್ಶಿಗಳಾದ ವಿ.ಕೆ.ಲೋಕೇಶ್, ಮಹೇಶ್ ಜೈನಿ, ಉಪಾಧ್ಯಕ್ಷ ಮನು ಮಂಜುನಾಥ್, ವಕ್ತಾರ ಬಿ.ಕೆ.ಅರುಣ್ ಕುಮಾರ್, ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಮಹೇಶ್ ತಿಮ್ಮಯ್ಯ, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ, ನಗರ ಉಪಾಧ್ಯಕ್ಷ ಬಿ.ಕೆ.ಜಗದೀಶ್, ಬಿಜೆಪಿ ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ, ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ.ಸತೀಶ್, ಕೆ.ಎಸ್.ರಮೇಶ್, ಅರುಣ್ ಶೆಟ್ಟಿ, ಸವಿತಾ ರಾಕೇಶ್ ಮತ್ತಿತರರು ಪಾಲ್ಗೊಂಡಿದ್ದರು.